
ಮಡಿಕೇರಿ NEWS DESK ಸೆ.23 : ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನಿಯೋಗವು ಇಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ, ನೂತನವಾಗಿ ನಿರ್ಮಾಣವಾಗುತ್ತಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಧನಸಹಾಯ ನೀಡುವಂತೆ ಮನವಿ ಮಾಡಿತು. ನಿಯೋಗದೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ನೂತನ ಕಾಂಗ್ರೆಸ್ ಭವನದ ರೂಪುರೇಷೆಗಳ ಕುರಿತು ಮಾಹಿತಿ ಪಡೆದರು. ಭವನ ನಿರ್ಮಾಣಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡುವುದರೊಂದಿಗೆ ಧನಸಹಾಯ ಮಾಡುವುದಾಗಿ ಭರವಸೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಕೊಲ್ಯದ ಗಿರೀಶ್ ಹಾಗೂ ಎಸ್.ಐ.ಮುನೀರ್ ಅಹ್ಮದ್, ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್ ಹಾಗೂ ಜಿಲ್ಲಾ ಕಾಂಗ್ರೆಸ್ ಸದಸ್ಯ ಚೊಟ್ಟೆಯಂಡಮಾಡ ವಿಷು ನಿಯೋಗದಲ್ಲಿದ್ದರು.









