ಸೋಮವಾರಪೇಟೆ, NEWS DESK ಸೆ.24: ಕಸ್ತೂರಿ ರಂಗನ್ ವರದಿ ಆಧರಿಸಿ ಕೇಂದ್ರ ಸರ್ಕಾರ ಹೊರಡಿಸಿರುವ 7ನೇ ಕರಡು ಅಧಿಸೂಚನೆಯನ್ನು ವಿರೋಧಿಸಿ ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರು ಹಾಗೂ ಗ್ರಾಮಸ್ಥರು ವಿಶೇಷ ಗ್ರಾಮಸಭೆಯಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿ, ತಮ್ಮ ತಕರಾರು ಅರ್ಜಿಗಳನ್ನು ಸಲ್ಲಿಸಿದರು.
ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಗ್ರಾಮಸಭೆಯ ಅಧ್ಯಕ್ಷತೆಯನ್ನು ಆಡಳಿತಾಧಿಕಾರಿ ಹಾಗೂ ಬಿಇಒ ಕೃಷ್ಣಪ್ಪ ವಹಿಸಿದ್ದರು. ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸಿದ ಗ್ರಾಮಸ್ಥರು, ವರದಿ ಜಾರಿಗೊಂಡರೆ ಕೊಡಗಿನ ಕೃಷಿಕರು ಹಾಗೂ ಗ್ರಾಮೀಣ ಜನಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅಭಿಪ್ರಾಯಪಟ್ಟರು.
ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಜಿ.ಎಂ. ಹೂವಯ್ಯ ಮಾತನಾಡಿ, ಕೊಡಗಿನ ರೈತರು ತಲೆತಲಾಂತರಗಳಿಂದ ಕೃಷಿಯೊಂದಿಗೆ ಪರಿಸರ ಸಂರಕ್ಷಣೆಯನ್ನೂ ಮಾಡಿಕೊಂಡು ಬಂದಿದ್ದಾರೆ. ಪರಿಸರ ರಕ್ಷಣೆಯ ಹೆಸರಿನಲ್ಲಿ ಕೃಷಿ ಭೂಮಿ, ಕಾಫಿ ತೋಟಗಳು ಹಾಗೂ ಗ್ರಾಮೀಣ ಪ್ರದೇಶಗಳನ್ನು ಸೂಕ್ಷ್ಮ ಪರಿಸರ ವಲಯದ ವ್ಯಾಪ್ತಿಗೆ ತರುವ ಕ್ರಮವನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು.
ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವ ಮುನ್ನ ಕೊಡಗಿನ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಸಮಗ್ರ ಭೌತಿಕ ಸಮೀಕ್ಷೆ ನಡೆಸಬೇಕು. ಸ್ಥಳೀಯ ಜನಪ್ರತಿನಿಧಿಗಳು, ರೈತರು ಹಾಗೂ ಗ್ರಾಮಸ್ಥರ ಅಭಿಪ್ರಾಯಗಳನ್ನು ಪಡೆದುಕೊಂಡ ಬಳಿಕವೇ ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾಫಿ, ಅಡಿಕೆ, ಭತ್ತ ಸೇರಿದಂತೆ ವಿವಿಧ ಕೃಷಿ ಚಟುವಟಿಕೆಗಳನ್ನೇ ಅವಲಂಬಿಸಿರುವ ಗ್ರಾಮೀಣ ಜನರ ಬದುಕಿಗೆ ಯಾವುದೇ ರೀತಿಯ ನಿರ್ಬಂಧ ಉಂಟಾಗಬಾರದು. ರೈತರ ಹಕ್ಕು ಮತ್ತು ಕೃಷಿ ಚಟುವಟಿಕೆಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಅಧಿಸೂಚನೆಯಲ್ಲಿ ಅಗತ್ಯ ಬದಲಾವಣೆಗಳನ್ನು ಮಾಡಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.
ಸಭೆಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೋಹನ ಮಾತನಾಡಿ, ಗ್ರಾಮಸ್ಥರು ಸಲ್ಲಿಸಿರುವ ತಕರಾರು ಅರ್ಜಿಗಳನ್ನು ದಾಖಲಿಸಿಕೊಂಡು, ವಿಶೇಷ ಗ್ರಾಮಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಸಂಬಂಧಿಸಿದ ಮೇಲಾಧಿಕಾರಿಗಳಿಗೆ ಕಳುಹಿಸಲಾಗುವುದು ಎಂದು ತಿಳಿಸಿದರು.
ನಂತರ ಗ್ರಾಮಸ್ಥರು ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆಗೆ ಸಂಬಂಧಿಸಿದ ತಮ್ಮ ಆಕ್ಷೇಪಣೆಗಳನ್ನು ಲಿಖಿತ ರೂಪದಲ್ಲಿ ಪಂಚಾಯಿತಿ ಆಡಳಿತಾಧಿಕಾರಿ ಕೃಷ್ಣಪ್ಪ ಅವರಿಗೆ ಸಲ್ಲಿಸಿದರು. ಗ್ರಾಮಸ್ಥರು ಉಪಸ್ಥಿತರಿದ್ದರು.







