ನಾಪೋಕ್ಲು, NEWS DESK ಸೆ.28: ಸ್ಥಳೀಯ ‘ನಾಪೋಕ್ಲು ಕ್ಲೀನ್ ಅಪ್’ ಸಂಸ್ಥೆಯ ವತಿಯಿಂದ ನಾಪೋಕ್ಲು–ಹಳೆ ತಾಲೂಕು ರಸ್ತೆಯ ಬದಿಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟಿಕ್ ಹಾಗೂ ಇತರೆ ತ್ಯಾಜ್ಯಗಳನ್ನು ತೆರವುಗೊಳಿಸುವ ಬೃಹತ್ ಸ್ವಚ್ಛತಾ ಅಭಿಯಾನವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.
‘ಟೀಮ್ ನ್ಯಾಷನಲ್ ನಾಪೋಕ್ಲು’ ಹಾಗೂ ‘ಭಗವತಿ ಹಾಕಿ ಕ್ಲಬ್ ನಾಪೋಕ್ಲು’ ಸಂಘಟನೆಗಳ ಸಕ್ರಿಯ ಸಹಕಾರದೊಂದಿಗೆ ನಡೆದ ಅಭಿಯಾನದಲ್ಲಿ ಸದಸ್ಯರು ರಸ್ತೆ ಬದಿಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಗಳು, ಕವರ್‌ಗಳು ಹಾಗೂ ಇತರೆ ತ್ಯಾಜ್ಯಗಳನ್ನು ಸಂಗ್ರಹಿಸಿ, ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಂಡದ ಪ್ರಮುಖರು, ಸಾರ್ವಜನಿಕರು ರಸ್ತೆ ಬದಿಗಳಲ್ಲಿ ಮನಬಂದಂತೆ ಕಸ ಹಾಗೂ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಎಸೆಯದಂತೆ ಮನವಿ ಮಾಡಿದರು. ‘ಸ್ವಚ್ಛ ನಾಪೋಕ್ಲು–ನಮ್ಮೆಲ್ಲರ ಜವಾಬ್ದಾರಿ’ ಎಂಬ ಸಂದೇಶದೊಂದಿಗೆ ಸಾರ್ವಜನಿಕರಲ್ಲಿ ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಲಾಯಿತು.
ನಾಪೋಕ್ಲುವನ್ನು ಸುಂದರ ಹಾಗೂ ಸ್ವಚ್ಛವಾಗಿಡುವುದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು, ಸಾರ್ವಜನಿಕರು ಸ್ವಚ್ಛತಾ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಕರೆ ನೀಡಿದರು.
ಮುಂದಿನ ದಿನಗಳಲ್ಲಿಯೂ ನಾಪೋಕ್ಲು ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ಸರಣಿ ಸ್ವಚ್ಛತಾ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ‘ನಾಪೋಕ್ಲು ಕ್ಲೀನ್ ಅಪ್’ ಸಂಸ್ಥೆಯ ಪದಾಧಿಕಾರಿಗಳು ತಿಳಿಸಿದ್ದಾರೆ.
ವರದಿ: ದುಗ್ಗಳ ಸದಾನಂದ







