ಮಡಿಕೇರಿ, NEWS DESK ಸೆ. 29: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೊಡಗು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟವು ಕೂಡಿಗೆ ಕ್ರೀಡಾ ಶಾಲೆಯಲ್ಲಿ ನಡೆಯಿತು.
ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕ್ರೀಡಾ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಪೂರ್ಣಪ್ರಮಾಣದ ಸಹಕಾರ ನೀಡಲಾಗುವುದು. ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಅವರಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಿಕೊಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.
ಕ್ರೀಡಾಪಟುಗಳು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವಂತಾಗಬೇಕು. ಕ್ರೀಡೆಯ ಮೂಲಕ ವಿವಿಧ ಧರ್ಮಗಳ ಜನರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಕ್ರೀಡೆಯು ಸ್ಪರ್ಧಾತ್ಮಕವಾಗಿರಬೇಕು. ಕ್ರೀಡೆಯು ಸಾಮರಸ್ಯವನ್ನು ಬೆಳೆಸುತ್ತದೆ. ಕ್ರೀಡಾ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ಕರೆದು ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯ ಚಕ್ರವರ್ತಿ, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ತರಬೇತುದಾರರು, ವ್ಯವಸ್ಥಾಪಕರು ಹಾಗೂ ಕ್ರೀಡಾಪಟುಗಳು ಉಪಸ್ಥಿತರಿದ್ದರು.








