
ಕುಶಾಲನಗರ, NEWS DESK ಸೆ.30: ನೆಲ್ಯಾಹುದಕೇರಿ ಅಂಗನವಾಡಿ ಕೇಂದ್ರದಲ್ಲಿ ಬಾಣಂತಿಯರಿಗೆ ಅವಧಿ ಮುಗಿದ ಆಹಾರ ವಿತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೇಲ್ವಿಚಾರಕಿ ಹಾಗೂ ಸಂಬಂಧಿಸಿದ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲು ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೀರ್ಮಾನಿಸಲಾಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು.
ಅಂಗನವಾಡಿಯಲ್ಲಿ ಅವಧಿ ಮುಗಿದ ಆಹಾರ ವಿತರಿಸಿರುವುದು ಮೇಲ್ವಿಚಾರಕಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಭವಿಸಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಇಂತಹ ಘಟನೆಗಳು ಸಾರ್ವಜನಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತೀರ್ಮಾನಿಸಲಾಯಿತು.
ಇದೇ ವೇಳೆ ಹೆಬ್ಬಾಲೆ, ತೊರೆನೂರು ಹಾಗೂ ಶಿರಂಗಾಲ ಗ್ರಾಮಗಳ ಮಧ್ಯಭಾಗದಲ್ಲಿ ನೂತನ ವಿದ್ಯುತ್ ಉಪಶಾಖೆ ಸ್ಥಾಪಿಸುವಂತೆ ಸಭೆಯಲ್ಲಿ ಒತ್ತಾಯಿಸಲಾಯಿತು.
ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆಯೂ ತೀರ್ಮಾನಿಸಲಾಯಿತು. ಅಲ್ಲದೆ, ಸಭೆಯಲ್ಲಿ ಸೂಕ್ತ ಮಾಹಿತಿ ನೀಡದ ಅಧಿಕಾರಿಗಳ ವಿರುದ್ಧ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಅಸಮಾಧಾನ ವ್ಯಕ್ತಪಡಿಸಿದರು.
ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಅನ್ನಭಾಗ್ಯ ಹಾಗೂ ಯುವನಿಧಿ ಸೇರಿದಂತೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಅಧಿಕಾರಿಗಳಿಂದ ಅನುಪಾಲನಾ ವರದಿ ಪಡೆಯಲಾಯಿತು. ನಂತರ ಯೋಜನೆಗಳ ಪ್ರಗತಿ ವರದಿಗಳ ಕುರಿತು ಚರ್ಚೆ ನಡೆಸಿ, ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಕೈಗೊಳ್ಳಲಾಯಿತು.
ಸಭೆಯಲ್ಲಿ ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಶಶಿಭೀಮಯ್ಯ, ಜಿಲ್ಲಾ ಸಮಿತಿ ಸದಸ್ಯ ಬಿ.ಡಿ. ಅಣ್ಣಯ್ಯ, ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಕೃಷ್ಣೇಗೌಡ, ಅಬ್ದುಲ್ ರಜಾಕ್, ರಫೀಕ್ ಖಾನ್, ಫಿಲೋಮಿನಾ, ಎಂ.ಎ. ಆದಂ, ಶ್ರೀನಿವಾಸ್ ಎಸ್.ಎ., ಶ್ರೀನಿವಾಸ್ ಕುಮಾರ್ ಎನ್., ಮಲ್ಲಿಕಾರ್ಜುನ ಬಿ.ಸಿ. ಹಾಗೂ ಯು.ಎಂ. ಕಿಶೋರ್ ಉಪಸ್ಥಿತರಿದ್ದರು.








