ಮಡಿಕೇರಿ, NEWS DESK ಅ.2 : ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಒತ್ತಾಯಿಸಿ ಚುನಾವಣಾ ಅಧಿಕಾರಿಗಳಿಗೆ ದೂರು ಸಲ್ಲಿಸಲಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂತ್ ನಂಬರ್ 20ರ ಹಳೆಯ ಬೂತ್ ಹಾಗೂ 21ರ ಹೊಸ ಬೂತ್‌ನಲ್ಲಿ ಸುಮಾರು 60–65 ಫಾರಂ ನಂಬರ್ 7ಗಳಿಗೆ ಒಬ್ಬರೇ ವ್ಯಕ್ತಿ ಹತ್ತಾರು ಫಾರಂಗಳಿಗೆ ಸಹಿ ಹಾಕಿರುವುದು ಕಂಡುಬಂದಿದೆ ಎಂದು ಆರೋಪಿಸಿದರು.
ಈ ಕುರಿತು ತಮ್ಮ ಪಕ್ಷದ ಬೂತ್ ಮಟ್ಟದ ಅಧಿಕಾರಿ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆಡಿಯೋದಲ್ಲಿ ಮಹಿಳೆಯೊಬ್ಬರು, “ಫಾರಂ ನಂಬರ್ 7 ಅನ್ನು ಪಕ್ಷದ ಕಚೇರಿಯಲ್ಲೇ ನೀಡಲಾಗಿದೆ” ಎಂದು ಹೇಳಿರುವುದು ಕೇಳಿಬರುತ್ತಿದೆ. ಇದೇ ರೀತಿಯ ಘಟನೆಗಳು ಬೇರೆ ಪ್ರದೇಶಗಳಲ್ಲಿಯೂ ನಡೆಯುತ್ತಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.
ಚುನಾವಣಾ ಕಾಯ್ದೆಯಡಿ ಇಂತಹ ಕೃತ್ಯ ಅಪರಾಧವಾಗಿದ್ದು, ಒಂದು ವರ್ಷ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸುವ ಅವಕಾಶವಿದೆ ಎಂದು ಡಾ.ಮಂತರ್ ಗೌಡ ತಿಳಿಸಿದರು.
ಮತ ಚಲಾಯಿಸುವುದು ಪ್ರತಿಯೊಬ್ಬರ ಹಕ್ಕು ಹಾಗೂ ಜವಾಬ್ದಾರಿಯಾಗಿದೆ. ಅದನ್ನು ಉದ್ದೇಶಪೂರ್ವಕವಾಗಿ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡರೆ ಯಾರೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಕೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.







