ಮಡಿಕೇರಿ, NEWS DESK ಅ.2: ಕೊಡ್ಲಿಪೇಟೆ ಸಮೀಪದ ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 64 ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸಂಬಂಧಿಸಿದ ಮತದಾರರು ಹಾಗೂ ಕಾಂಗ್ರೆಸ್ ಮುಖಂಡರು ಕಂದಾಯ ಇಲಾಖೆ ಕಚೇರಿ ಎದುರು ಸಾಂಕೇತಿಕ ಪ್ರತಿಭಟನೆ ನಡೆಸಿ, ಸಮಗ್ರ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಉದ್ದೇಶದಿಂದ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿ, ಅರ್ಜಿಗಳನ್ನು ಯಾರು ಸಲ್ಲಿಸಿದ್ದಾರೆ, ಯಾವ ಕಾರಣಗಳನ್ನು ನಮೂದಿಸಲಾಗಿದೆ ಹಾಗೂ ಹೆಸರುಗಳನ್ನು ಅಳಿಸಲು ಕಾನೂನುಬದ್ಧ ಕಾರಣಗಳಿವೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ರಾಜಕೀಯ ಉದ್ದೇಶದಿಂದ ಅರ್ಹ ಮತದಾರರ ಹಕ್ಕಿಗೆ ಧಕ್ಕೆ ತರುವ ಪ್ರಯತ್ನ ನಡೆದಿದ್ದರೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ತನಿಖೆಯಲ್ಲಿ ಆರೋಪಗಳು ಸತ್ಯವೆಂದು ದೃಢಪಟ್ಟರೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಮನವಿ ಮಾಡಿದರು.
ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಲು ವಿಫಲವಾದರೆ ಅ.3ರಂದು ಮತ್ತೊಮ್ಮೆ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ನಿಸಾರ್, ಮುಖಂಡರಾದ ಗಗನ್, ಹಮೀದ್, ದೊಡ್ಡಯ್ಯ, ಬಿ.ಎಂ. ಅಬ್ದುಲ್ ಲತೀಫ್, ಅಬ್ದುಲ್ ಖಾದರ್, ರಫೀಕ್, ಲತೀಫ್, ಅಬ್ದುಲ್ ಬಾಸಿತ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.








