ನಾಪೋಕ್ಲು, NEWS DESK ಅ.2: ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಕ್ಕದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಲಾಯಿತು.
ಬಕ್ಕದ ನಾಲ್ಕು ಸ್ವಸಹಾಯ ಸಂಘಗಳು, ಗಜಾನನ ಭಕ್ತ ಮಂಡಳಿ ಹಾಗೂ ಸಾರ್ವಜನಿಕರು ಸಲ್ಲಿಸಿದ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಸಮುದಾಯ ಭವನ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಗುತ್ತಿಗೆದಾರ ಗೌರೀಶ್ ಹಾಗೂ ಭಾಗಮಂಡಲ ಕಾಂಗ್ರೆಸ್ ವಲಯಾಧ್ಯಕ್ಷ ವೆಂಕಟೇಶ್ ಅವರ ನೇತೃತ್ವದಲ್ಲಿ ಸ್ಥಳ ಪರಿಶೀಲನೆ ನಡೆಸಿ, ಸಮುದಾಯ ಭವನ ನಿರ್ಮಾಣಕ್ಕೆ ಸೂಕ್ತ ಸ್ಥಳವನ್ನು ಗುರುತಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬೆಟ್ಟಗೇರಿ ಗ್ರಾಮ ಪಂಚಾಯಿತಿ ವಲಯ ಕಾಂಗ್ರೆಸ್ ಅಧ್ಯಕ್ಷ ಕೊಡಗನ ತೀರ್ಥಕುಮಾರ್ ಅವರು ಮಾತನಾಡಿ, ಸಮುದಾಯ ಭವನ ನಿರ್ಮಾಣದಿಂದ ಸ್ಥಳೀಯರಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಭಾಗಮಂಡಲ ಕಾಂಗ್ರೆಸ್ ವಲಯಾಧ್ಯಕ್ಷ ವೆಂಕಟೇಶ್ ಅವರು ಅಗತ್ಯ ಸಲಹೆಗಳನ್ನು ನೀಡಿದರು.
ಶ್ರೀಕೃಷ್ಣ ಸಂಘದ ಕಾರ್ಯದರ್ಶಿ ಹೊಸೋಕ್ಲು ಮೊನ್ನಪ್ಪ ಅವರು ಮಾತನಾಡಿ, ಸಮುದಾಯ ಭವನ ನಿರ್ಮಾಣದ ಕಾರ್ಯವನ್ನು ಯಶಸ್ವಿಗೊಳಿಸಲು ಎಲ್ಲರೂ ಒಗ್ಗಟ್ಟಿನಿಂದ ಸಹಕರಿಸುವಂತೆ ಮನವಿ ಮಾಡಿದರು.
ಸಭೆಯಲ್ಲಿ ಸ್ಥಳೀಯರಾದ ಪ್ರಕಾಶ್ ರೈ, ನೆಯ್ಯಂಣಿ ತಾರೇಂದ್ರ, ರಂಜನ್, ಲೋಕನಾಥ್, ಬೈತಡ್ಕ ಎಸ್. ದೇವಯ್ಯ, ವೀಕ್ಷಿತ್, ಜೀವನ್, ಲವ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ದುಗ್ಗಳ ಸದಾನಂದ







