ವಿರಾಜಪೇಟೆ, NEWS DESK ಅ.02: ಪಟ್ಟಣದ ಸಂತ ಅನ್ನಮ್ಮ ಪ್ರೌಢಶಾಲೆಯಲ್ಲಿ ಎನ್‌ಸಿಸಿ ಘಟಕದ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಂಗವಾಗಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಭಗವದ್ಗೀತೆ, ಕುರಾನ್ ಹಾಗೂ ಬೈಬಲ್ ಧಾರ್ಮಿಕ ಗ್ರಂಥಗಳ ಪ್ರಾರ್ಥನೆ ನಡೆಯಿತು.
ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂತ ಅನ್ನಮ್ಮ ಚರ್ಚ್‌ನ ಸಹಾಯಕ ಗುರುಗಳಾದ ಫಾ. ವಿಲ್ಫ್ರೆಡ್, “ಇಬ್ಬರು ಆದರ್ಶ ಪುರುಷರ ಜಯಂತಿಯನ್ನು ನಾವಿಂದು ಆಚರಿಸುತ್ತಿದ್ದು, ಅವರ ತತ್ವ, ಸಿದ್ಧಾಂತ ಹಾಗೂ ಪರಿಕಲ್ಪನೆಗಳು ಇಂದಿಗೂ ಪ್ರಸ್ತುತವಾಗಿವೆ. ಅವರ ಆದರ್ಶಗಳನ್ನು ಪಾಲಿಸುವ ಮೂಲಕ ಭವ್ಯ ರಾಷ್ಟ್ರ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಪಣ ತೊಡಬೇಕು” ಎಂದು ಕರೆ ನೀಡಿದರು.
ಸಂತ ಅನ್ನಮ್ಮ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸವರಿನ್ ಡಿಸೋಜ ಮಾತನಾಡಿ, “ಭಾರತದ ಇತಿಹಾಸದಲ್ಲಿ ಸದಾ ಸ್ಮರಣೀಯರಾಗಿರುವ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಕೊಡುಗೆ ಅಪಾರ. ಅವರ ಆದರ್ಶಗಳು ಇಂದಿನ ಯುವಜನತೆಗೆ ಮಾದರಿಯಾಗಿದ್ದು, ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಅವರ ಸಂದೇಶಗಳು ದಾರಿದೀಪವಾಗಿವೆ” ಎಂದರು.
ಸಭಾ ಕಾರ್ಯಕ್ರಮದ ಬಳಿಕ ಎನ್‌ಸಿಸಿ ವಿದ್ಯಾರ್ಥಿಗಳು ಸಮೀಪದ ಚರ್ಚ್ ಸ್ಟ್ರೀಟ್ ಹಾಗೂ ಶಾಲಾ ಆವರಣದಲ್ಲಿ ಶ್ರಮದಾನ ನಡೆಸಿದರು. ಮುಖ್ಯ ರಸ್ತೆಯ ಎರಡೂ ಬದಿಗಳಲ್ಲಿ ಬಿದ್ದಿದ್ದ ಪ್ಲಾಸ್ಟಿಕ್, ಪೇಪರ್ ಸೇರಿದಂತೆ ತ್ಯಾಜ್ಯವನ್ನು ತೆರವುಗೊಳಿಸಿ ಸ್ವಚ್ಛತಾ ಕಾರ್ಯ ಕೈಗೊಂಡರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿಯರಾದ ಸಿಸ್ಟರ್ ರೋಸಿ ಡೈಸಾ, ಸಿಸ್ಟರ್ ವಂದನಾ, ಎನ್‌ಸಿಸಿ ಅಧಿಕಾರಿಗಳಾದ ಅಬ್ದುಲ್ ಮುನೀರ್, ಸಹನಾ ರಹಮತ್, ಸಹ ಶಿಕ್ಷಕರು, ಸಿಬ್ಬಂದಿ ಹಾಗೂ ಎನ್‌ಸಿಸಿ ಏರ್ ವಿಂಗ್ ಮತ್ತು ಆರ್ಮಿ ವಿಂಗ್‌ನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







