ಮಡಿಕೇರಿ, NEWS DESK ಅ. 6: ಭಾರತ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿವೆ.
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಜ್ಞಾನೇಶ್ ಕುಮಾರ್ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸಿ ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಮನವಿ ಪತ್ರದಲ್ಲಿ ಆರೋಪಿಸಲಾಗಿದೆ.
ಮನವಿ ಸಲ್ಲಿಸಿದ ಬಳಿಕ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅರ್ಹ ಮತದಾರರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ದೇಶವ್ಯಾಪಿ ಹೋರಾಟಗಳು ನಡೆಯುತ್ತಿದ್ದರೂ, ಜ್ಞಾನೇಶ್ ಕುಮಾರ್ ಅವರು ಸರ್ವಾಧಿಕಾರಿ ಧೋರಣೆ ಅನುಸರಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ. ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಅವರನ್ನು ತುರ್ತಾಗಿ ವಜಾಗೊಳಿಸುವುದರೊಂದಿಗೆ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಯಾವುದೇ ಮತದಾರನ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಅಧಿಕಾರ ಚುನಾವಣಾ ಆಯೋಗಕ್ಕೆ ಇಲ್ಲ. ಜ್ಞಾನೇಶ್ ಕುಮಾರ್ ಅವರ ವರ್ತನೆಯಿಂದ ಚುನಾವಣಾ ಆಯೋಗದ ಮೇಲಿನ ಜನರ ನಂಬಿಕೆ ಕುಸಿದಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಸರ್ವಾಧಿಕಾರಕ್ಕೆ ಅವಕಾಶವಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಮತದಾರರನ್ನು ಸೇರ್ಪಡೆಗೊಳಿಸುವ ಫಾರಂ ನಂ. 6ಕ್ಕೆ ಮತ್ತಷ್ಟು ತಿದ್ದುಪಡಿ ತರುವ ಮೂಲಕ ಸಾಮಾನ್ಯ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗದಂತೆ ಮಾಡುವ ಪ್ರಯತ್ನ ನಡೆದಿದೆ ಎಂದು ಅವರು ಆರೋಪಿಸಿದರು.
ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಹೆಚ್.ಬಿ. ರಮೇಶ್ ಮಾತನಾಡಿ, ಎನ್‌ಡಿಎ ಮೈತ್ರಿಕೂಟ ಮುಂದಿನ ಚುನಾವಣೆಯಲ್ಲಿ ಸ್ಥಾನಗಳನ್ನು ಕಳೆದುಕೊಳ್ಳುವ ಆತಂಕದಿಂದ ಎಸ್‌ಐಆರ್ ಮೂಲಕ ಮುಸ್ಲಿಮರು, ಕ್ರೈಸ್ತರು ಹಾಗೂ ಆದಿವಾಸಿಗಳ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವ ಪ್ರಯತ್ನ ನಡೆಸುತ್ತಿದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಐ. ಮುನೀರ್ ಅಹಮ್ಮದ್, ಮಡಿಕೇರಿ ನಗರಾಧ್ಯಕ್ಷ ಪ್ರಕಾಶ್ ಆಚಾರ್ಯ ಹಾಗೂ ಸಿಪಿಐ ಪಕ್ಷದ ಮುಖಂಡ ರಮೇಶ್ ಮಾಯಮುಡಿ ಉಪಸ್ಥಿತರಿದ್ದರು.








