ಮಡಿಕೇರಿ, NEWS DESK ಅ.6: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ಥಕ ರಾಜಕೀಯ ಜೀವನದ ಗೌರವಾರ್ಥ ಕೊಡಗು ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಅ.7ರಂದು ಮಡಿಕೇರಿಯಲ್ಲಿ ‘ಸೇವಾ ಜ್ಯೋತಿ’ ಕಾರ್ಯಕ್ರಮ ಆಯೋಜಿಸಲಾಗಿದೆ.
ನಗರದ ಗಾಂಧಿ ಮೈದಾನದಲ್ಲಿ ಬೆಳಿಗ್ಗೆ 9.30ಕ್ಕೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಮಾವೇಶಗೊಳ್ಳಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಹಾಗೂ 10.15ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಇಬ್ಬರ ಭಾಷಣದ ನೇರ ಪ್ರಸಾರವನ್ನು ಎಲ್‌ಇಡಿ ಪರದೆಯ ಮೂಲಕ ಗಾಂಧಿ ಮೈದಾನದಲ್ಲಿ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಬಿ.ಕೆ. ಅರುಣ್ ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಲಿದ್ದಾರೆ. ‘ಸೇವಾ ಜ್ಯೋತಿ’ ಪ್ರಜ್ವಲಿಸಿದ ಬಳಿಕ ಗಾಂಧಿ ಮೈದಾನದಿಂದ ಹಳೆಯ ಖಾಸಗಿ ಬಸ್ ನಿಲ್ದಾಣ ಮಾರ್ಗವಾಗಿ ಇಂದಿರಾಗಾಂಧಿ ವೃತ್ತದವರೆಗೆ ‘ಸೇವಾ ಜ್ಯೋತಿ’ ಜಾಥಾ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುಜಾ ಕುಶಾಲಪ್ಪ, ಮಾಜಿ ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚುರಂಜನ್, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಾರ್ವಜನಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾ ಬಿಜೆಪಿ ಮನವಿ ಮಾಡಿದೆ.







