ಮಡಿಕೇರಿ, NEWS DESK ಅ.7: ಅಕ್ರಮವಾಗಿ ದೇಶಕ್ಕೆ ಪ್ರವೇಶಿಸಿರುವ ಬಾಂಗ್ಲಾದೇಶಿ ವಲಸಿಗರನ್ನು ಗಡಿಪಾರು ಮಾಡಬೇಕು ಹಾಗೂ ದೇಶದ ಆಂತರಿಕ ಸುರಕ್ಷತೆಗಾಗಿ ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕೊಡಗು ಸುರಕ್ಷ ಆಂದೋಲನ ಸಮಿತಿ ವತಿಯಿಂದ ಅ.9ರಂದು ಮಡಿಕೇರಿಯಲ್ಲಿ ಬೃಹತ್ ಜನಜಾಗೃತಿ ಮೆರವಣಿಗೆ ಹಾಗೂ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಯೋಜಕ ಕುಕ್ಕೇರ ಅಜಿತ್ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.28ರಂದು ಕೇರಳ ಗಡಿಭಾಗದ ಕುಟ್ಟದಿಂದ ಆರಂಭಗೊಂಡ ಜನಜಾಗೃತಿ ವಾಹನ ಜಾಥಾವು ಜಿಲ್ಲೆಯ ಐದು ತಾಲ್ಲೂಕುಗಳ ಸುಮಾರು 45 ಪ್ರಮುಖ ಸ್ಥಳಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿದೆ. ಜಾಥಾದ ಸಮಾರೋಪ ಕಾರ್ಯಕ್ರಮವಾಗಿ ಅ.9ರಂದು ಬೆಳಿಗ್ಗೆ 10 ಗಂಟೆಗೆ ಮಡಿಕೇರಿಯ ಗಾಂಧಿ ಮೈದಾನದಿಂದ ಬೃಹತ್ ಮೆರವಣಿಗೆ ಆರಂಭವಾಗಲಿದೆ. ಮೆರವಣಿಗೆಯು ಹಳೇ ಖಾಸಗಿ ಬಸ್ ನಿಲ್ದಾಣದವರೆಗೆ ಸಾಗಲಿದ್ದು, ಅಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ ಎಂದರು.
ಸಭೆಯಲ್ಲಿ ವಿವಿಧ ಸಾಮಾಜಿಕ ಸಂಘಟನೆಗಳ ಮುಖಂಡರು ಭಾಗವಹಿಸಿ ಜಾಗೃತಿ ಭಾಷಣ ಮಾಡಲಿದ್ದಾರೆ. ಜಾಥಾವು ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚರಿಸಿದ ಸಂದರ್ಭದಲ್ಲಿ ಅಕ್ರಮ ವಲಸಿಗರ ಕುರಿತು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದು, ಜನಜಾಗೃತಿ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತವಾಗಿದೆ ಎಂದು ಅವರು ಹೇಳಿದರು.
ಅಕ್ರಮ ವಲಸಿಗರು ಸರ್ಕಾರಿ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯುವುದನ್ನು ತಡೆಯಬೇಕು. ಅಕ್ರಮವಾಗಿ ಪಡೆದಿರುವ ಗುರುತಿನ ದಾಖಲೆಗಳು, ಆಸ್ತಿ-ಪಾಸ್ತಿ ಸೇರಿದಂತೆ ಇತರ ಅಕ್ರಮಗಳ ಕುರಿತು ಪರಿಶೀಲನೆ ನಡೆಸಲು ವಿಶೇಷ ಕಾರ್ಯಪಡೆ ರಚಿಸಬೇಕು ಎಂದು ಕುಕ್ಕೇರ ಅಜಿತ್ ಆಗ್ರಹಿಸಿದರು.
ಕೊಡಗು ಜಿಲ್ಲೆಯಲ್ಲಿ ಕಾರ್ಮಿಕರ ಕೊರತೆ ಇರುವ ಹಿನ್ನೆಲೆಯಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳ ಕಾರ್ಮಿಕ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯವಿರುವ ಕಾರ್ಮಿಕರನ್ನು ವ್ಯವಸ್ಥಿತವಾಗಿ ಪೂರೈಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು. ಈ ಕುರಿತು ಸ್ಥಳೀಯ ರೈತರು ಹಾಗೂ ತಜ್ಞರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
ದೇಶದ ಆಂತರಿಕ ಸುರಕ್ಷತೆಯ ಹಿನ್ನೆಲೆಯಲ್ಲಿ ಅಕ್ರಮ ವಲಸೆಯ ಸಮಸ್ಯೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ನಡೆಯುತ್ತಿರುವ ಸಮಾರೋಪ ಕಾರ್ಯಕ್ರಮದಲ್ಲಿ ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.
ಸುದ್ದಿಗೋಷ್ಠಿಯಲ್ಲಿ ಸಾಮಾಜಿಕ ಕಾರ್ಯಕರ್ತ ಕೆ.ಕೆ. ದಿನೇಶ್ ಕುಮಾರ್, ಸಮಿತಿ ಸದಸ್ಯರಾದ ರೂಪಾ ಸತೀಶ್, ಯತೀಶ್, ರಾಬಿನ್ ದೇವಯ್ಯ ಹಾಗೂ ಚಂದ್ರ ಉಡೋತ್ತು ಉಪಸ್ಥಿತರಿದ್ದರು.

















