ಮಡಿಕೇರಿ, NEWS DESK ಅ. 8: ಮಡಿಕೇರಿ ನಗರಸಭೆಯ ಸಾಮಾನ್ಯ ಸಭೆಯು ಶಾಸಕ ಡಾ. ಮಂತರ್ ಗೌಡ ಅವರ ಉಪಸ್ಥಿತಿಯಲ್ಲಿ ನಡೆಯಿತು. ಸಭೆಯಲ್ಲಿ ನಗರದ ರಸ್ತೆ ಅವ್ಯವಸ್ಥೆ, ಕಸ ವಿಲೇವಾರಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳು ಪ್ರಮುಖವಾಗಿ ಚರ್ಚೆಗೆ ಬಂದವು. ನಗರದಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ, ಕಸ ವಿಲೇವಾರಿಗೆ ಸೂಕ್ತ ಜಾಗದ ಕೊರತೆ ಹಾಗೂ ದಸರಾ ಹಬ್ಬ ಸಮೀಪಿಸುತ್ತಿದ್ದರೂ ಹಲವು ರಸ್ತೆಗಳು ದುರಸ್ತಿಯಾಗದೆ ಇರುವ ಕುರಿತು ನಗರಸಭಾ ಸದಸ್ಯರು ಸಭೆಯಲ್ಲಿ ಪ್ರಸ್ತಾಪಿಸಿದರು. ಸಭೆಯ ವೇಳೆ ಶಾಸಕ ಡಾ. ಮಂತರ್ ಗೌಡ ಅವರ ಎದುರಲ್ಲೇ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ವಾಕ್ಸಮರ ನಡೆಯಿತು. ನಗರದ ಅಭಿವೃದ್ಧಿ ಕಾಮಗಾರಿಗಳು ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ ಎಂದು ವಿರೋಧ ಪಕ್ಷದ ಸದಸ್ಯರು ಆಡಳಿತ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. ಆಡಳಿತ ಪಕ್ಷದಲ್ಲಿನ ಹೊಂದಾಣಿಕೆಯ ಕೊರತೆಯಿಂದಾಗಿ ನಗರದ ಅಭಿವೃದ್ಧಿ ಕಾರ್ಯಗಳಿಗೆ ಹಿನ್ನಡೆಯಾಗುತ್ತಿದೆ ಎಂದು ವಿರೋಧ ಪಕ್ಷದ ಸದಸ್ಯರು ಆರೋಪಿಸಿದರು. ಇದಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಕೆಲಕಾಲ ಚರ್ಚೆ ಹಾಗೂ ವಾಗ್ವಾದ ನಡೆಯಿತು. ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ಉಪಾಧ್ಯಕ್ಷ ಮಹೇಶ್ ಜೈನಿ, ವಿರೋಧ ಪಕ್ಷ ಎಸ್‌ಡಿಪಿಐ ಸದಸ್ಯ ಎಂ.ಕೆ.ಮನ್ಸೂರ್ ಆಲಿ, ಕಾಂಗ್ರೆಸ್ ಸದಸ್ಯ ಬಿ.ವೈ.ರಾಜೇಶ್, ಬಿಜೆಪಿ ಹಾಗೂ ಎಸ್‌ಡಿಪಿಐ ಸದಸ್ಯರು ಸಭೆಯಲ್ಲಿ ಭಾಗವಹಿಸಿ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು.
ಅಭಿವೃದ್ಧಿಗೆ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಿ: ಶಾಸಕ ಮಂತರ್ ಗೌಡ
ನಗರದ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಶಾಸಕ ಡಾ. ಮಂತರ್ ಗೌಡ ಸದಸ್ಯರಿಗೆ ಸೂಚಿಸಿದರು. ನಗರದ ಅಗತ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಸರಕಾರದಿಂದ ಅಗತ್ಯ ನೆರವು ದೊರಕಿಸಲು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ ನೀಡಿದರು. ನಗರಸಭೆ ಹಾಗೂ ಜನಪ್ರತಿನಿಧಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ನಗರದ ಮೂಲಭೂತ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಹೇಳಿದರು. ದಸರಾ ಹಬ್ಬ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ನಗರದ ರಸ್ತೆ ದುರಸ್ತಿ, ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಯಿತು.

















