ಬಳ್ಳಾರಿ, NEWS DESK ಅ.8: ಮಳೆ ಕೈಕೊಟ್ಟ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ತೊಗರಿ, ಜೋಳ ಸೇರಿದಂತೆ ಹಲವು ಬೆಳೆಗಳು ಹಾನಿಯಾಗಿದ್ದು, ರಾಜ್ಯಾದ್ಯಂತ ಸುಮಾರು ಶೇ.90ರಷ್ಟು ಬೆಳೆ ನಷ್ಟವಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.
ಬಳ್ಳಾರಿಯ ಹಾಲಕುಂದಿ ಗ್ರಾಮ ಸೇರಿದಂತೆ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ರಾಜ್ಯವು ಕಳೆದ ಹಲವು ದಶಕಗಳಲ್ಲೇ ಅತ್ಯಂತ ಗಂಭೀರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ ಎಂದು ಹೇಳಿದರು.
217 ತಾಲೂಕುಗಳು ಈಗಾಗಲೇ ಬರಪೀಡಿತ
ಕರ್ನಾಟಕದ ಒಟ್ಟು 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನು ಈಗಾಗಲೇ ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದ 23 ತಾಲೂಕುಗಳಲ್ಲಿ ವಾಸ್ತವ ಸ್ಥಿತಿಯ ಪರಿಶೀಲನೆ ನಡೆಯುತ್ತಿದ್ದು, ಈ ಪೈಕಿ 10ರಿಂದ 15 ತಾಲೂಕುಗಳು ಮತ್ತಷ್ಟು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಪರಮೇಶ್ವರ ಮಾಹಿತಿ ನೀಡಿದರು.
ಮಳೆಯ ಕೊರತೆಯಿಂದ ಮೊದಲಿಗೆ ತೊಗರಿ ಬೆಳೆ ಕೈಕೊಟ್ಟಿದೆ. ಬಳಿಕ ರೈತರು ಪರ್ಯಾಯವಾಗಿ ಜೋಳ ಬೆಳೆಯಲು ಮುಂದಾದರೂ ನಿರೀಕ್ಷಿತ ಮಳೆ ಬಾರದ ಕಾರಣ ಆ ಬೆಳೆ ಕೂಡ ಹಾನಿಗೀಡಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಹೇಳಿದರು.
ರೈತರಿಗೆ ₹2,500 ಮೊದಲ ಕಂತಿನ ಪರಿಹಾರ
ರೈತರಿಗೆ ತಕ್ಷಣದ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರದ ಪರಿಹಾರಕ್ಕಾಗಿ ಕಾಯದೆ ರಾಜ್ಯ ಸರ್ಕಾರ ತನ್ನದೇ ಸಂಪನ್ಮೂಲಗಳಿಂದ ₹2,500 ಮೊದಲ ಕಂತಿನ ಪರಿಹಾರ ನೀಡಲು ನಿರ್ಧರಿಸಿದೆ.
ಈ ಸಂಬಂಧ ಆದೇಶ ಹೊರಡಿಸಲಾಗಿದ್ದು, ಪರಿಹಾರ ಹಣವನ್ನು ತಕ್ಷಣ ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದರು.
“ರೈತರು ಸಂಕಷ್ಟದಲ್ಲಿರುವಾಗ ಸರ್ಕಾರ ಸುಮ್ಮನೆ ಕುಳಿತುಕೊಳ್ಳುವುದಿಲ್ಲ. ನಮ್ಮಿಂದ ಸಾಧ್ಯವಿರುವ ಎಲ್ಲ ನೆರವನ್ನು ನೀಡುತ್ತೇವೆ,” ಎಂದು ಪರಮೇಶ್ವರ ಭರವಸೆ ನೀಡಿದರು.
₹46 ಸಾವಿರ ಕೋಟಿ ನಷ್ಟದ ಅಂದಾಜು
ರಾಜ್ಯ ಸರ್ಕಾರದ ಅಂದಾಜಿನ ಪ್ರಕಾರ 177 ತಾಲೂಕುಗಳಲ್ಲಿ ಬರದಿಂದ ಸುಮಾರು ₹46,000 ಕೋಟಿ ನಷ್ಟ ಉಂಟಾಗಿದೆ. ಎನ್ಡಿಆರ್ಎಫ್ ಮಾರ್ಗಸೂಚಿಗಳ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಸುಮಾರು ₹11,000 ಕೋಟಿಯಿಂದ ₹11,500 ಕೋಟಿ ಪರಿಹಾರ ನೀಡುವಂತೆ ರಾಜ್ಯ ಮನವಿ ಮಾಡಿದೆ.
ಕೇಂದ್ರದ ತಂಡಗಳು ಈಗಾಗಲೇ ಕರ್ನಾಟಕಕ್ಕೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿವೆ. ಮಾದರಿ ಪರಿಶೀಲನೆ ಮತ್ತು ಉಪಗ್ರಹ ಆಧಾರಿತ ಮಾಹಿತಿಯನ್ನೂ ಪರಿಹಾರ ನಿರ್ಧಾರಕ್ಕೆ ಪರಿಗಣಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ರೈತರ ಸಾಲ ವಸೂಲಾತಿಗೆ ತಾತ್ಕಾಲಿಕ ರಿಲೀಫ್
ಬರದಿಂದ ರೈತರ ಮೇಲೆ ಹೆಚ್ಚುತ್ತಿರುವ ಆರ್ಥಿಕ ಒತ್ತಡವನ್ನು ಕಡಿಮೆ ಮಾಡಲು ಸಾಲ ವಸೂಲಾತಿಯನ್ನು ಮುಂದೂಡುವಂತೆ ಬ್ಯಾಂಕುಗಳಿಗೆ ಸೂಚಿಸಲಾಗಿದೆ. ಸಾಲ ಪುನರ್ರಚನೆ ಮತ್ತು ಮರುಹಣಕಾಸು ಸೌಲಭ್ಯ ಕಲ್ಪಿಸುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪರಮೇಶ್ವರ ಹೇಳಿದರು.
ಬ್ಯಾಂಕುಗಳಿಂದ ನೋಟಿಸ್ ಬಂದರೆ ರೈತರು ಆತಂಕಪಡುವ ಅಗತ್ಯವಿಲ್ಲ. ರಾಷ್ಟ್ರೀಕೃತ ಬ್ಯಾಂಕುಗಳ ಜತೆಗೆ ಖಾಸಗಿ ಹಣಕಾಸು ಸಂಸ್ಥೆಗಳಿಗೂ ಅಗತ್ಯ ಸೂಚನೆ ನೀಡಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.
ಕುಡಿಯುವ ನೀರಿನ ಸಮಸ್ಯೆಗೂ ಸರ್ಕಾರದ ಗಮನ
ಬರದ ಪರಿಣಾಮ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ಎದುರಾಗಿದೆ. ಜನರಿಗೆ ಕುಡಿಯುವ ನೀರು ಒದಗಿಸುವುದು ಹಾಗೂ ತುರ್ತು ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯ ಹಣ ಬಿಡುಗಡೆ ಮಾಡಲಾಗಿದೆ ಎಂದು ಪರಮೇಶ್ವರ ತಿಳಿಸಿದರು.
ಸದ್ಯದ ಪರಿಸ್ಥಿತಿಯಲ್ಲಿ ರೈತರನ್ನು ಉಳಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ಆರ್ಥಿಕ ಸಂಪನ್ಮೂಲಗಳ ಲಭ್ಯತೆಗೆ ಅನುಗುಣವಾಗಿ ಇತರ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಅವರು ಹೇಳಿದರು.
“ರೈತನೇ ನಮ್ಮ ಮೊದಲ ಆದ್ಯತೆ. ರೈತರನ್ನು ಸಂಕಷ್ಟದಿಂದ ಹೊರತರುವುದು ಸರ್ಕಾರದ ಪ್ರಮುಖ ಜವಾಬ್ದಾರಿ,” ಎಂದು ಪರಮೇಶ್ವರ ಹೇಳಿದರು.
















