ಕಾರ್ಮಾಡು, NEWS DESK ಅ.09: ವನ್ಯಜೀವಿ ಸಪ್ತಾಹದ ಅಂಗವಾಗಿ ಅರಣ್ಯ ಇಲಾಖೆಯ ಕಲ್ಲಹಳ್ಳ ವನ್ಯಜೀವಿ ವಲಯದ ವತಿಯಿಂದ ನಿಟ್ಟೂರು ಕಾರ್ಮಾಡು ಚೆಕ್ಪೋಸ್ಟ್ನಿಂದ ಕೊಳಂಗೆರೆ ಜಂಕ್ಷನ್ವರೆಗೆ ರಸ್ತೆ ಬದಿಗಳಲ್ಲಿ ಸ್ವಚ್ಛತಾ ಕಾರ್ಯ ನಡೆಸಿ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸುವ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲಾಯಿತು.
ನಾಗರಹೊಳೆ ಕಲ್ಲಹಳ್ಳ ವನ್ಯಜೀವಿ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗೋಪಾಲ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಅರಣ್ಯ ಸಂಪತ್ತಿನ ಸಂರಕ್ಷಣೆಯಲ್ಲಿ ಅರಣ್ಯ ಇಲಾಖೆಯೊಂದಿಗೆ ಸಾರ್ವಜನಿಕರೂ ಕೈಜೋಡಿಸಬೇಕು. ಪರಿಸರವನ್ನು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.
ಗ್ರಾಮಸ್ಥರ ಪರವಾಗಿ ಮಾತನಾಡಿದ ಪಡಿಞರಂಡ ಪ್ರಭು ಕುಮಾರ್ ಅವರು, ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪ್ರಕೃತಿ ಸೌಂದರ್ಯ ಹಾಗೂ ವನ್ಯಜೀವಿ ಸಂಪತ್ತನ್ನು ವೀಕ್ಷಿಸಲು ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ರಕ್ಷಿತಾರಣ್ಯದ ಅಂಚಿನಲ್ಲಿರುವ ಕಾರ್ಮಾಡು ಗ್ರಾಮದ ಜನರು ಪ್ರಕೃತಿಯೊಂದಿಗೆ ಬದುಕು ಕಟ್ಟಿಕೊಂಡಿದ್ದು, ಶುದ್ಧ ಗಾಳಿ ಮತ್ತು ನೀರನ್ನು ಪಡೆಯುವ ಸೌಭಾಗ್ಯ ಹೊಂದಿದ್ದಾರೆ ಎಂದು ತಿಳಿಸಿದರು.
ಜಾಗತಿಕ ತಾಪಮಾನ ಏರಿಕೆಯಿಂದ ಪರಿಸರದ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತಿರುವ ಈ ಸಂದರ್ಭದಲ್ಲಿ ಪರಿಸರ ಸಂರಕ್ಷಣೆ ಎಲ್ಲರ ಹೊಣೆಗಾರಿಕೆಯಾಗಿದೆ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಜೊತೆಗೆ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಕಲ್ಲಹಳ್ಳ ವನ್ಯಜೀವಿ ವಲಯದ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಅವರು ಸ್ವಾಗತಿಸಿದರು. ಕಲ್ಲಹಳ್ಳ ವನ್ಯಜೀವಿ ಉಪವಲಯದ ಅರಣ್ಯಾಧಿಕಾರಿ ರಂಜಿತಾ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಕಾರ್ಮಾಡು ಗ್ರಾಮ ಪರಿಸರ ಅಭಿವೃದ್ಧಿ ಸಮಿತಿಯ ನಿರ್ದೇಶಕರಾದ ಕೊಟ್ಟಂಗಡ ಮಧು ಮಂಜುನಾಥ್, ಗಾಣಂಗಡ ಸುದೀಪ್, ಮೋಹನ್ ಬೆಂಡೆಕುತ್ತಿ ಹಾಗೂ ಗ್ರಾಮಸ್ಥರಾದ ಸೂರೇಶ್, ಕಾವೇರಿ, ಉದಿತ್, ಉದಯ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಮತ್ತು ಗ್ರಾಮಸ್ಥರು ಪಾಲ್ಗೊಂಡು ಸ್ವಚ್ಛತಾ ಕಾರ್ಯವನ್ನು ಯಶಸ್ವಿಗೊಳಿಸಿದರು.



















