ಕುಶಾಲನಗರ, NEWS DESK ಅ.9: ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯ, ಸಂಸದೀಯ ಕಾರ್ಯವಿಧಾನ ಹಾಗೂ ಜನಪ್ರತಿನಿಧಿಗಳ ಜವಾಬ್ದಾರಿಯನ್ನು ಯುವಜನರು ಅರಿತುಕೊಳ್ಳಲು ಯುವಸಂಸತ್ತು ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು.
ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಗುರುವಾರ ಆಯೋಜಿಸಿದ್ದ 2026ನೇ ಸಾಲಿನ ಯುವಸಂಸತ್ತು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಸಹಯೋಗದಲ್ಲಿ ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಯುವಸಂಸತ್ತಿನಲ್ಲಿ ವಿದ್ಯಾರ್ಥಿಗಳು ಸಂಸದೀಯ ಕಲಾಪದ ಮಾದರಿಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಪ್ರಶ್ನೋತ್ತರ, ವಿಚಾರ ಮಂಡನೆ, ಚರ್ಚೆ ಹಾಗೂ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಗಳ ಮೂಲಕ ಸಂಸದೀಯ ಪ್ರಜಾಪ್ರಭುತ್ವದ ಕಾರ್ಯವೈಖರಿಯನ್ನು ಅರಿತುಕೊಂಡರು.
ಯುವಜನರಲ್ಲಿ ನಾಯಕತ್ವ ಗುಣ, ಸಂವಹನ ಕೌಶಲ, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿಯನ್ನು ಬೆಳೆಸುವುದು ಇಂತಹ ಕಾರ್ಯಕ್ರಮಗಳ ಪ್ರಮುಖ ಉದ್ದೇಶವಾಗಿದೆ. ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು, ನಾಗರಿಕರ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ಸಹಕಾರಿಯಾಯಿತು.
ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ. ಸುರೇಶ್ ಎಂ., ತಾಲೂಕು ಮಟ್ಟದ ಯುವಸಂಸತ್ತು ಸಮಿತಿಯ ಸೋಮವಾರಪೇಟೆ ಸಂಚಾಲಕ ಹಾಗೂ ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ, ಸಮಿತಿಯ ಕಾರ್ಯದರ್ಶಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಎಂ., ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಸಮಿತಿ ಸದಸ್ಯ ಸಿದ್ದೇಗೌಡ, ತಾಲೂಕು ವಕೀಲರ ಸಂಘದ ಅಧ್ಯಕ್ಷರು ಸೇರಿದಂತೆ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಪತ್ರಕರ್ತ ಚಂದ್ರಮೋಹನ್, ಪ್ರಾಧ್ಯಾಪಕಿ ಡಾ. ನಿರ್ಮಲ ಹಾಗೂ ವಕೀಲ ಯತೀಶ್ ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ವಿದ್ಯಾರ್ಥಿಗಳ ವಿಷಯ ಮಂಡನೆ, ಸಂಸದೀಯ ನಡವಳಿಕೆ, ವಿಷಯದ ಅರಿವು, ಭಾಷಾ ಬಳಕೆ, ಸಮಯಪಾಲನೆ ಹಾಗೂ ಚರ್ಚೆಯಲ್ಲಿ ಪಾಲ್ಗೊಂಡ ರೀತಿಯನ್ನು ಆಧರಿಸಿ ಮೌಲ್ಯಮಾಪನ ನಡೆಸಲಾಯಿತು.
ಯುವಸಂಸತ್ತು ಸ್ಪರ್ಧೆಯ ಫಲಿತಾಂಶ
ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಲೋಹಿತ್ ಪ್ರಥಮ ಸ್ಥಾನ ಪಡೆದರು. ಕೊಡಗು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮೋಹನ್ ಎಚ್.ಎಂ. ದ್ವಿತೀಯ ಸ್ಥಾನ ಗಳಿಸಿದರು. ಸೋಮವಾರಪೇಟೆಯ ಸೆಂಟ್ ಜೋಸೆಫ್ ಪ್ರಥಮ ದರ್ಜೆ ಕಾಲೇಜಿನ ಮೋಹನ್ ಹಾಗೂ ಜ್ಞಾನ ಕಾವೇರಿ ಆವರಣದ ಕನ್ನಡ ವಿಭಾಗದ ಪ್ರೀತ್ ಸಿ. ಜಂಟಿಯಾಗಿ ತೃತೀಯ ಸ್ಥಾನ ಪಡೆದುಕೊಂಡರು. ಇದೇ ಸಂದರ್ಭದಲ್ಲಿ ಜಿಲ್ಲಾಮಟ್ಟದ ಯುವಸಂಸತ್ತು ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಮಾಧ್ಯಮ ಪ್ರತಿನಿಧಿಗಳು, ಯುವಸಂಸತ್ತು ಸಮಿತಿಯ ಸದಸ್ಯರು ಮತ್ತು ಪೋಷಕರು ಭಾಗವಹಿಸಿದ್ದರು.
ಬಿಆರ್‌ಸಿ ಮಂಜೇಶ್ ಕಾರ್ಯಕ್ರಮ ನಿರೂಪಿಸಿದರು. ಕೊಡಗು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕ ಡಾ. ಜಮೀರ್ ಅಹ್ಮದ್ ಸ್ವಾಗತಿಸಿದರು.

















