ಸಿದ್ದಾಪುರ, NEWS DESK ಅ.11: ಪ್ರಜಾಪ್ರಭುತ್ವದ ರಕ್ಷಣೆ ಹಾಗೂ ಮತದಾನದ ಹಕ್ಕನ್ನು ಉಳಿಸುವಂತೆ ಆಗ್ರಹಿಸಿ ಸಮಾನ ಮನಸ್ಕರ ವೇದಿಕೆ ಸಿದ್ದಾಪುರದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ವೆಂಕಟೇಶ್ ಎಂ.ಎಸ್. ಅವರು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಅವೈಜ್ಞಾನಿಕವಾಗಿದ್ದು, ಇದರ ವಿರುದ್ಧ ಹಲವು ಹೋರಾಟಗಳು ನಡೆಯುತ್ತಿವೆ ಎಂದು ಹೇಳಿದರು. ಕಠಿಣ ನಿಯಮಗಳ ಮೂಲಕ ಬಡವರು ಹಾಗೂ ಕೂಲಿ ಕಾರ್ಮಿಕರ ಮತದಾನದ ಹಕ್ಕಿಗೆ ಧಕ್ಕೆಯಾಗುವ ಸಾಧ್ಯತೆಯಿದ್ದು, ಇದರಿಂದ ಪ್ರಜಾಪ್ರಭುತ್ವ ದುರ್ಬಲಗೊಳ್ಳುತ್ತಿದೆ ಎಂದು ಆರೋಪಿಸಿದರು. ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಕಾರ್ಮಿಕ ಮುಖಂಡ ಕುಟ್ಟಪ್ಪ ಮಾತನಾಡಿ, ಎಸ್ಐಆರ್ ಪ್ರಕ್ರಿಯೆಯ ಮೂಲಕ ಮುಸ್ಲಿಂ ಸಮುದಾಯದ ಮತಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ತೆಗೆದುಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು. ಮೋದಿ, ಅಮಿತ್ ಶಾ ಹಾಗೂ ಸಂಘ ಪರಿವಾರದ ವಿರುದ್ಧ ಟೀಕೆ ವ್ಯಕ್ತಪಡಿಸಿದ ಅವರು, ಹಿಟ್ಲರ್ ಮತ್ತು ಮುಸೋಲಿನಿ ಮಾದರಿಯ ಆಡಳಿತವನ್ನು ಜಾರಿಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ಆಕ್ಷೇಪಿಸಿದರು. ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಸಮಾನ ಮನಸ್ಕರು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು. ಇದೇ ವೇಳೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಮಾನ ಮನಸ್ಕರ ವೇದಿಕೆಯ ಪಿ.ಆರ್. ಭರತ್, ಎಸ್.ಬಿ. ಪ್ರತೀಶ್, ಎಂ. ಬಿಜೋಯ್, ಮುಸ್ತಫ, ಬಶೀರ್ ವಿ.ಕೆ., ಅಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

















