ಮಡಿಕೇರಿ, NEWS DESK, ಅ.13: ಮಡಿಕೇರಿ ದಸರಾ ಜನೋತ್ಸವದ ಪ್ರಮುಖ ಆಕರ್ಷಣೆಗಳಲ್ಲೊಂದಾದ ಕಾಫಿ ದಸರಾ ಮಳಿಗೆಗಳ ಉದ್ಘಾಟನೆಯೊಂದಿಗೆ ನಗರದಲ್ಲಿ ಕಾಫಿಯ ಘಮ ಹರಡಿದೆ. ಎರಡು ದಿನಗಳ ಕಾಲ ನಡೆಯುವ ಕಾಫಿ ದಸರಾದಲ್ಲಿ ಕಾಫಿಗೆ ಸಂಬಂಧಿಸಿದ ಪ್ರದರ್ಶನ ಹಾಗೂ ಮಾರಾಟಕ್ಕಾಗಿ ಒಟ್ಟು 54 ಮಳಿಗೆಗಳನ್ನು ತೆರೆಯಲಾಗಿದೆ ಎಂದು ಕಾಫಿ ದಸರಾ ಸಂಚಾಲಕ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.
ಮಂಗಳವಾರ ಸಂಜೆ ಕಲಾಸಂಭ್ರಮ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಕಾಫಿ ದಸರಾ ಮಳಿಗೆಗಳನ್ನು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಡಿಕೇರಿ ನಗರದ ಸ್ವಚ್ಛತೆಯನ್ನು ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ 60 ಪೌರಕಾರ್ಮಿಕರನ್ನು ಶಾಸಕ ಡಾ. ಮಂತರ್ ಗೌಡ ಅವರು ಸನ್ಮಾನಿಸಿ ಗೌರವಿಸಿದರು. ನಗರದ ಸ್ವಚ್ಛತೆಯಲ್ಲಿ ನಿರಂತರವಾಗಿ ಸೇವೆ ಸಲ್ಲಿಸುತ್ತಿರುವ ಸ್ವಚ್ಛತಾ ರಾಯಭಾರಿಗಳ ಕಾರ್ಯವನ್ನು ಗುರುತಿಸಿ, ಕಾಫಿ ದಸರಾ ವೇದಿಕೆಯ ಮೂಲಕ ಗೌರವ ಸಲ್ಲಿಸಲಾಯಿತು.

















