ಮಡಿಕೇರಿ, NEWS DESK ಅ.14: ದುಬೈ ಕೇಂದ್ರವಾಗಿ ಕಾರ್ಯಾಚರಿಸುತ್ತಿರುವ ಕೂರ್ಗ್ ಓಲ್ಡ್ ಸ್ಟುಡೆಂಟ್ಸ್ ಅಸೋಸಿಯೇಷನ್ ಯುಎಇ ವತಿಯಿಂದ ವೈದ್ಯಕೀಯ ವಿದ್ಯಾಭ್ಯಾಸದಲ್ಲಿ ಸಾಧನೆ ಮಾಡಿದ ಕೊಡಗಿನ ನಾಲ್ಕುನಾಡು ಭಾಗದ ಇಬ್ಬರು ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಅಮೆರಿಕದಲ್ಲಿ ವೈದ್ಯಕೀಯ ವ್ಯಾಸಂಗ ಪೂರ್ಣಗೊಳಿಸಿ ಪ್ರಸ್ತುತ ನಾಪೋಕ್ಲು ಸರ್ಕಾರಿ ಆಸ್ಪತ್ರೆಯಲ್ಲಿ ಇಂಟರ್ನ್ಶಿಪ್ ಮಾಡುತ್ತಿರುವ ಕುಂಜಿಲದ ಡಾ. ಆಯಿಷಾ ಶೌಕತ್ತಲಿ ಹಾಗೂ ಕನ್ನಡ ಮಾಧ್ಯಮದ ಶಾಲೆಯಲ್ಲಿ ವ್ಯಾಸಂಗ ಮಾಡಿ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸರ್ಕಾರಿ ಕೋಟಾದಡಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದಿರುವ ಎಮ್ಮೆಮಾಡು ಮೂಲದ ಫಾಸಿಲ ಅಬ್ದುಲ್ಲಾ ಅವರನ್ನು ಸನ್ಮಾನಿಸಲಾಯಿತು.
ಹೊದವಾಡದ ರಾಫೆಲ್ಸ್ ಶಾಲಾ-ಕಾಲೇಜಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರೂ ವಿದ್ಯಾರ್ಥಿನಿಯರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ಫಾಸಿಲ ಅಬ್ದುಲ್ಲಾ ಅವರ ಮುಂದಿನ ವೈದ್ಯಕೀಯ ವಿದ್ಯಾಭ್ಯಾಸಕ್ಕೆ ನೆರವಾಗುವ ಉದ್ದೇಶದಿಂದ ಸಂಘದ ವತಿಯಿಂದ ರೂ.20,000 ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ರಾಫೆಲ್ಸ್ ಕಾಲೇಜಿನ ಪ್ರಾಂಶುಪಾಲರು, ನಾಪೋಕ್ಲು ಪೊಲೀಸ್ ಠಾಣೆಯ ಅಧಿಕಾರಿಗಳು, ಬಲ್ಲಮಾವಟಿ ಶಾಲೆಯ ಹಿರಿಯ ಉಪನ್ಯಾಸಕ ಮೆಹಬೂಬ್ ಮಾಸ್ಟರ್ ಹಾಗೂ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದ ಮುಖ್ಯ ಕಾರ್ಯದರ್ಶಿ ರಫೀಕಲಿ ಕುಂಡಂಡ ಕುಂಜಿಲ ಉಪಸ್ಥಿತರಿದ್ದರು.
ಪ್ರತಿಭಾವಂತ ವಿದ್ಯಾರ್ಥಿನಿಯರನ್ನು ಗುರುತಿಸಿ ಪ್ರೋತ್ಸಾಹಿಸುವ ಮೂಲಕ ಅವರ ಶೈಕ್ಷಣಿಕ ಸಾಧನೆಗೆ ಬೆಂಬಲ ನೀಡಿದ ಸಂಘದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಯಿತು.

















