ವಿರಾಜಪೇಟೆ, NEWS DESK ಅ.14: ಯಾವುದೇ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ಬ್ಯಾಂಕ್ಗಳು ಹಾಗೂ ವಿಮಾ ಸಂಸ್ಥೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಕೆ.ಸಿ. ದಯಾನಂದ ಅಭಿಪ್ರಾಯಪಟ್ಟರು.
ವಿರಾಜಪೇಟೆ ಕಾವೇರಿ ಕಾಲೇಜಿನ ಐಕ್ಯೂಎಸಿ ಹಾಗೂ ಅರ್ಥಶಾಸ್ತ್ರ ವಿಭಾಗದ ವತಿಯಿಂದ ಕಾಲೇಜಿನ ಕೌಸ್ತುಭ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ಬ್ಯಾಂಕ್ ಮತ್ತು ವಿಮೆಗಳ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬ್ಯಾಂಕ್ಗಳು ಜನರಿಂದ ಠೇವಣಿಗಳನ್ನು ಸಂಗ್ರಹಿಸಿ, ಅಗತ್ಯವಿರುವವರಿಗೆ ಸಾಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತವೆ. ಕೃಷಿ, ಕೈಗಾರಿಕೆ, ವ್ಯಾಪಾರ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಯಲ್ಲಿ ಬ್ಯಾಂಕ್ಗಳ ಪಾತ್ರ ಮಹತ್ವದ್ದಾಗಿದೆ. ದೇಶದಲ್ಲಿ ಹಣಕಾಸಿನ ಒಳಗೊಳ್ಳುವಿಕೆಯನ್ನು ಹೆಚ್ಚಿಸುವುದರ ಜೊತೆಗೆ ಆರ್ಥಿಕ ಸ್ಥಿರತೆಯನ್ನು ಕಾಪಾಡುವಲ್ಲಿಯೂ ಬ್ಯಾಂಕ್ಗಳು ಸಹಕಾರಿಯಾಗಿವೆ ಎಂದು ತಿಳಿಸಿದರು.
ಪ್ರಸ್ತುತ ಬ್ಯಾಂಕಿಂಗ್ ಕ್ಷೇತ್ರದಲ್ಲಿ ತಂತ್ರಜ್ಞಾನದ ಬೆಳವಣಿಗೆಯಿಂದಾಗಿ ದಿನದ 24 ಗಂಟೆಗಳಲ್ಲಿಯೂ ಹಣಕಾಸಿನ ವಹಿವಾಟು ನಡೆಸುವ ಅವಕಾಶ ಲಭ್ಯವಾಗಿದೆ. ಆದರೆ, ಇದರೊಂದಿಗೆ ಆನ್ಲೈನ್ ವಂಚನೆ ಪ್ರಕರಣಗಳೂ ಹೆಚ್ಚುತ್ತಿವೆ. ಲಿಂಕ್ಗಳು ಹಾಗೂ ಒಟಿಪಿ ಮೂಲಕ ಗ್ರಾಹಕರ ಖಾತೆಯಲ್ಲಿರುವ ಹಣವನ್ನು ವಂಚಕರು ಕಳವು ಮಾಡುವ ಸಾಧ್ಯತೆ ಇರುವುದರಿಂದ ಹಣಕಾಸಿನ ವಹಿವಾಟು ನಡೆಸುವಾಗ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು.
ವಿಮೆಯ ಮಹತ್ವದ ಕುರಿತು ಮಾತನಾಡಿದ ಅವರು, ಹಿಂದೆ ಸಾರ್ವಜನಿಕ ವಲಯದಲ್ಲಿ ವಿಮೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿರಲಿಲ್ಲ. ಆದರೆ, ಕೋವಿಡ್ ನಂತರ ಜನಸಾಮಾನ್ಯರು ವಿಮೆಯ ಅಗತ್ಯವನ್ನು ಅರಿತುಕೊಳ್ಳಲು ಆರಂಭಿಸಿದ್ದಾರೆ ಎಂದರು.
ಅನಿರೀಕ್ಷಿತ ಅಪಾಯಗಳು ಎದುರಾದಾಗ ವ್ಯಕ್ತಿ ಹಾಗೂ ಅವರ ಕುಟುಂಬಕ್ಕೆ ಆರ್ಥಿಕ ಭದ್ರತೆ ಒದಗಿಸುವಲ್ಲಿ ವಿಮೆ ಪ್ರಮುಖ ಪಾತ್ರ ವಹಿಸುತ್ತದೆ. ಜೀವ ವಿಮೆ ಹಾಗೂ ಇತರ ವಿಮಾ ಯೋಜನೆಗಳು ಸಂಕಷ್ಟದ ಸಂದರ್ಭಗಳಲ್ಲಿ ಕುಟುಂಬದ ಆರ್ಥಿಕ ಸ್ಥಿತಿ ಕುಸಿಯದಂತೆ ನೆರವಾಗುತ್ತವೆ. ದೀರ್ಘಕಾಲೀನ ಆರ್ಥಿಕ ಭದ್ರತೆಯನ್ನು ರೂಪಿಸಿಕೊಳ್ಳಲು ವಿಮೆ ಸಹಕಾರಿಯಾಗಿರುವುದರಿಂದ ಪ್ರತಿಯೊಬ್ಬರೂ ತಮ್ಮ ಅಗತ್ಯಕ್ಕೆ ಅನುಗುಣವಾಗಿ ವಿಮಾ ಯೋಜನೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ. ಕೆ.ಜಿ. ವೀಣಾ ಮಾತನಾಡಿ, ಪ್ರಸ್ತುತ ಬ್ಯಾಂಕಿಂಗ್ ಸೌಲಭ್ಯಗಳು ಜನರ ಬೆರಳ ತುದಿಗೆ ತಲುಪಿವೆ. ತಂತ್ರಜ್ಞಾನದಿಂದ ಸೇವೆಗಳು ಸುಲಭವಾಗಿದ್ದರೂ, ಅದರೊಂದಿಗೆ ವಂಚನೆಯಂತಹ ಸಮಸ್ಯೆಗಳೂ ಹೆಚ್ಚುತ್ತಿವೆ. ಹಣಕಾಸಿನ ಅಪ್ಲಿಕೇಶನ್ಗಳನ್ನು ಬಳಸುವಾಗ ಹಾಗೂ ಅಪರಿಚಿತ ಲಿಂಕ್ಗಳನ್ನು ತೆರೆಯುವಾಗ ಗ್ರಾಹಕರು ಜಾಗರೂಕರಾಗಿರಬೇಕು ಎಂದು ಹೇಳಿದರು.
ಜೀವನದಲ್ಲಿ ಅನಿರೀಕ್ಷಿತವಾಗಿ ಎದುರಾಗುವ ಸಮಸ್ಯೆಗಳು ಹಾಗೂ ಸಾವಿನಂತಹ ಸಂದರ್ಭಗಳಲ್ಲಿ ಕುಟುಂಬದ ಆರ್ಥಿಕ ಸ್ಥಿತಿ ಹದಗೆಡದಂತೆ ಕಾಪಾಡುವಲ್ಲಿ ವಿಮೆ ಮಹತ್ವದ ಪಾತ್ರ ವಹಿಸುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಸಂಯೋಜಕ ರಾಘವೇಂದ್ರ, ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ಪವಿತ್ರ ಹಾಗೂ ವಿಭಾಗದ ಉಪನ್ಯಾಸಕ ಬಾಬು ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

















