ಮಡಿಕೇರಿ, NEWS DESK ಅ. 14: ಪೊನ್ನಂಪೇಟೆ ತಾಲ್ಲೂಕಿನ ಬಾಳೆಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಟ್ಟಗೇರಿಯ ತೋಟವೊಂದರಲ್ಲಿ ನಾಲ್ವರು ಅಕ್ರಮ ಬಾಂಗ್ಲಾದೇಶಿ ವಲಸಿಗರು ಕಾರ್ಮಿಕರಾಗಿ ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸಂಯೋಜಕ ಬೋಜೇಗೌಡ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದೂ ಜಾಗರಣಾ ವೇದಿಕೆ, ಆಟೋ ಚಾಲಕರ ಸಂಘ ಹಾಗೂ ಸ್ಥಳೀಯ ಹಿಂದೂ ಸಂಘಟನೆಗಳ ಕಾರ್ಯಕರ್ತರು ನಾಲ್ವರನ್ನು ಪತ್ತೆಹಚ್ಚಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹೇಳಿದರು.
ಪಶ್ಚಿಮ ಬಂಗಾಳದ ಮಧ್ಯವರ್ತಿಯೊಬ್ಬರ ಮೂಲಕ ಭಾರತಕ್ಕೆ ಬಂದಿರುವುದಾಗಿ ವಲಸಿಗರು ಹೇಳಿಕೊಂಡಿದ್ದಾರೆ ಎಂದು ತಿಳಿಸಿದ ಅವರು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ನಡೆಸುವ ಮೂಲಕ ಅಕ್ರಮ ಪ್ರವೇಶಕ್ಕೆ ಸಂಬಂಧಿಸಿದ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.
ಪತ್ತೆಯಾದ ನಾಲ್ವರಲ್ಲಿ ದಂಪತಿ ಹಾಗೂ ಅವರ ಇಬ್ಬರು ಮಕ್ಕಳು ಸೇರಿದ್ದಾರೆ. ಇವರ ಬಳಿ ಬೆಂಗಳೂರು ನೋಂದಣಿಯ ದ್ವಿಚಕ್ರ ವಾಹನವೂ ಪತ್ತೆಯಾಗಿರುವುದು ಕಳವಳಕಾರಿ ಸಂಗತಿಯಾಗಿದೆ ಎಂದು ಬೋಜೇಗೌಡ ಹೇಳಿದರು. ಅಕ್ರಮವಾಗಿ ದೇಶ ಪ್ರವೇಶಿಸಿದವರಿಗೆ ಇಲ್ಲಿ ಆಶ್ರಯ ನೀಡುತ್ತಿರುವವರ ಬಗ್ಗೆಯೂ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
ಆಂತರಿಕ ಸುರಕ್ಷತೆಗೆ ಅಪಾಯದ ಆತಂಕ
ಅಕ್ರಮ ಬಾಂಗ್ಲಾದೇಶಿ ವಲಸಿಗರಿಂದ ದೇಶದ ಆಂತರಿಕ ಸುರಕ್ಷತೆಗೆ ಅಪಾಯ ಉಂಟಾಗುವ ಸಾಧ್ಯತೆಯಿದ್ದು, ಅವರನ್ನು ಭಾರತಕ್ಕೆ ಕರೆತರುವ ಮಧ್ಯವರ್ತಿಗಳು ಹಾಗೂ ಆಶ್ರಯ ನೀಡುತ್ತಿರುವವರ ವಿರುದ್ಧವೂ ಪ್ರಕರಣ ದಾಖಲಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಕೊಡಗು ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ನೆಲೆಸಿರುವ ಕುರಿತು ಹಲವು ವರ್ಷಗಳಿಂದ ಪೊಲೀಸ್ ಇಲಾಖೆಯ ಗಮನಕ್ಕೆ ತರಲಾಗಿದೆ. ಪೊಲೀಸ್ ವರಿಷ್ಠಾಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರೂ, ನಿರೀಕ್ಷಿತ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ ಅವರು, ಇಲಾಖೆಯ ನಿರ್ಲಕ್ಷ್ಯವನ್ನು ಹಿಂದೂ ಜಾಗರಣಾ ವೇದಿಕೆ ತೀವ್ರವಾಗಿ ಖಂಡಿಸುತ್ತದೆ ಎಂದರು.
ಈ ವಿಚಾರವನ್ನು ರಾಜ್ಯಪಾಲರು ಹಾಗೂ ರಾಷ್ಟ್ರಪತಿಗಳ ಗಮನಕ್ಕೆ ತರಲಾಗುವುದು. ಜಿಲ್ಲಾಡಳಿತವು ಅಕ್ರಮ ವಲಸಿಗರ ವಿರುದ್ಧ ಕೂಡಲೇ ಕಾರ್ಯಾಚರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳದಿದ್ದರೆ, ದೇಶದ ಆಂತರಿಕ ಸುರಕ್ಷತೆಯ ದೃಷ್ಟಿಯಿಂದ ಹಿಂದೂ ಜಾಗರಣಾ ವೇದಿಕೆ ತೀವ್ರ ಹೋರಾಟ ರೂಪಿಸಲಿದೆ ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಜಿಲ್ಲಾ ಸಹ ಸಂಯೋಜಕರಾದ ಅಲ್ಲುಮಾಡ ಶರತ್, ಸುನಿಲ್ ಮಾದಾಪುರ, ಯೋಗೇಶ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಕುಮಾರ್ ಹಾಗೂ ಮಡಿಕೇರಿ ತಾಲ್ಲೂಕು ಕಾರ್ಯಕಾರಿಣಿ ಸದಸ್ಯ ವಿವೇಕ್ ಉಪಸ್ಥಿತರಿದ್ದರು.

















