ಕುಶಾಲನಗರ, NEWS DESK ಅ. 16: ಸಮಾಜದಲ್ಲಿ ನಿಸ್ವಾರ್ಥ ಮನೋಭಾವದಿಂದ ಸಾಮಾಜಿಕ ಸೇವೆ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ತೊಡಗಿಸಿಕೊಂಡು ವಿಶೇಷ ಕೊಡುಗೆ ನೀಡುವ ವ್ಯಕ್ತಿಗಳನ್ನು ಗುರುತಿಸಿ, ಪ್ರೋತ್ಸಾಹಿಸುವ ಕಾರ್ಯವಾಗಬೇಕು ಎಂದು ಅರಮೇರಿ-ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.
ಕುಶಾಲನಗರ ತಾಲ್ಲೂಕಿನ ಶಿರಂಗಾಲ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಸಮಾಜ ಸೇವಕ ಎಸ್.ವಿ. ನಂಜುಂಡಪ್ಪ ಅವರ ಶ್ರದ್ಧಾಂಜಲಿ ಸಭೆ ಮತ್ತು ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಂಜುಂಡಪ್ಪ ಅವರು ತಮ್ಮ ಸೇವಾ ಕಾರ್ಯಗಳ ಮೂಲಕ ಮಾದರಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗುರುತಿಸಿಕೊಂಡಿದ್ದರು ಎಂದು ಸ್ಮರಿಸಿದರು.
ಸ್ಥಳೀಯ ಗ್ರಾಮೀಣ ಜನರ ಆಶಯಗಳಿಗೆ ಸ್ಪಂದಿಸಿ ಶಿರಂಗಾಲ ಗ್ರಾಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ಹಾಗೂ ಸುಸಜ್ಜಿತ ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ವಿಶೇಷ ಪ್ರಯತ್ನ ಮತ್ತು ಕಾಳಜಿ ವಹಿಸಿದ್ದ ಅವರ ಕಾರ್ಯಗಳು ಸಾಮಾಜಿಕ ಸೇವೆಗೆ ಸಾಕ್ಷಿಯಾಗಿವೆ. ಗ್ರಾಮದ ಸಮಗ್ರ ಅಭಿವೃದ್ಧಿ ಹಾಗೂ ಗ್ರಾಮೀಣ ಜನರ ಜೀವನಮಟ್ಟ ಸುಧಾರಣೆಯಲ್ಲಿ ಅವರು ಮಹತ್ವದ ಪಾತ್ರ ವಹಿಸಿದ್ದರು. 1970ರ ದಶಕದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶಿರಂಗಾಲವನ್ನು ಆದರ್ಶ ಗ್ರಾಮವನ್ನಾಗಿ ರೂಪಿಸಲು ಶ್ರಮಿಸಿದ್ದರು ಎಂದು ಹೇಳಿದರು.
ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ನಂಜುಂಡಪ್ಪ ಅವರು ಸದಾ ತಮ್ಮ ಗ್ರಾಮದ ಅಭಿವೃದ್ಧಿಯ ಬಗ್ಗೆ ಕಾಳಜಿ ಹೊಂದಿದ್ದರು. ಶಿರಂಗಾಲ ಪದವಿಪೂರ್ವ ಕಾಲೇಜಿನ ಸ್ಥಾಪನೆಗೆ ಪ್ರಮುಖ ಪಾತ್ರ ವಹಿಸಿದ್ದ ಅವರು, ಶಿಕ್ಷಣ ಕ್ಷೇತ್ರದ ಬೆಳವಣಿಗೆ ಹಾಗೂ ಗ್ರಾಮದ ಅಭಿವೃದ್ಧಿಗಾಗಿ ತಮ್ಮನ್ನು ಸಮರ್ಪಿಸಿಕೊಂಡಿದ್ದರು ಎಂದು ತಿಳಿಸಿದರು.
ಮುಳ್ಳೂರು ಮಠದ ಸ್ವತಂತ್ರ ಬಸವಲಿಂಗ ಸ್ವಾಮೀಜಿ ಮಾತನಾಡಿ, ಗ್ರಾಮ ಪಂಚಾಯಿತಿಯ ಮೂಲಕ ಸ್ಥಳೀಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ, ಸರ್ಕಾರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವುದರೊಂದಿಗೆ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ನಂಜುಂಡಪ್ಪ ಅವರು ಶ್ರಮಿಸಿದ್ದರು. ಏಳು ದಶಕಗಳಿಗೂ ಹೆಚ್ಚು ಕಾಲ ಸಮಾಜಮುಖಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಅವರ ಬದುಕು ಸ್ಮರಣೀಯವಾಗಿದೆ ಎಂದರು.
ತೊರೆನೂರು ವಿರಕ್ತ ಮಠದ ಮಲ್ಲೇಶ ಸ್ವಾಮೀಜಿ ಹಾಗೂ ಕಲ್ಲಳ್ಳಿ ಮಠದ ರುದ್ರಮುನಿ ಸ್ವಾಮೀಜಿ ಮಾತನಾಡಿ, ನಂಜುಂಡಪ್ಪ ಅವರ ಸಾಮಾಜಿಕ ಸೇವೆ ಮತ್ತು ಗ್ರಾಮದ ಅಭಿವೃದ್ಧಿಗೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಸೋಮವಾರಪೇಟೆಯ ವೀರಶೈವ ಸಮಾಜದ ಮುಖಂಡ ಹಾಲಪ್ಪ, ನಂಜಮ್ಮ ನಂಜುಂಡಪ್ಪ, ಎಸ್.ಎನ್. ಶಶಿ, ಎಸ್.ಎನ್. ವಿಜಯ್, ಸಿ.ಎನ್. ಲೋಕೇಶ್ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.

















