ಮಡಿಕೇರಿ, NEWS DESK ಅ. 17: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗಳಿಂದ ಪಾರಾಗಿರುವ ಘಟನೆ ಸುಂಟಿಕೊಪ್ಪ ಸಮೀಪದ ರಾಷ್ಟ್ರೀಯ ಹೆದ್ದಾರಿಯ 7ನೇ ಹೊಸಕೋಟೆಯ ಮಾರುತಿ ನಗರದಲ್ಲಿ ನಡೆದಿದೆ.
ಮೃತರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಅಡಿವಾರ ಗೊಲ್ಲರಹಟ್ಟಿ ಗ್ರಾಮದ ಪ್ರದೀಪ್ ಎಂ.ಸಿ. (20) ಹಾಗೂ ಸಿಂಹನಾಯಕ (30) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪ್ರವೀಣ ಎಂ.ಸಿ., ಮಹಂತೇಶ ಆರ್. ಹಾಗೂ ಕಾರ್ತಿಕ ನಾಯಕ ಸಿ. ಅವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.
ಐವರು ಮಡಿಕೇರಿಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆ 7ನೇ ಹೊಸಕೋಟೆಯ ಮಾರುತಿ ನಗರದ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಹಾಗೂ ಸಹಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.





































