ಮಡಿಕೇರಿ, NEWS DESK ಅ. 17: ಮಡಿಕೇರಿ ದಸರಾ ಅಂಗವಾಗಿ ಮಡಿಕೇರಿ ನಗರ ದಸರಾ ಸಮಿತಿ ಹಾಗೂ ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿಯ ಸಹಯೋಗದಲ್ಲಿ ಕೊಡಗು ಜಾನಪದ ಪರಿಷತ್ ವತಿಯಿಂದ 6ನೇ ವರ್ಷದ ಜಾನಪದ ದಸರಾವನ್ನು ಅ. 18ರಂದು ಆಯೋಜಿಸಲಾಗಿದೆ ಎಂದು ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಹಾಗೂ ಸಂಚಾಲಕ ಅನಿಲ್ ಎಚ್.ಟಿ. ತಿಳಿಸಿದ್ದಾರೆ.
ಅಂದು ಬೆಳಿಗ್ಗೆ 9.30ಕ್ಕೆ ನಗರದ ಖಾಸಗಿ ಬಸ್ ನಿಲ್ದಾಣದಿಂದ ಕಲಾ ಜಾಥಾ ಆರಂಭವಾಗಲಿದ್ದು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ ನೀಡಲಿದ್ದಾರೆ. ಡೊಳ್ಳು ಕುಣಿತ, ಪೂಜಾ ಕುಣಿತ, ವೀರಗಾಸೆ, ಕರಡಿ ಮಜಲು, ರಂಗ ಕುಣಿತ, ಜಾನಪದ ಜಾಗೃತಿ ನಾಟಕ ಹಾಗೂ ಆದಿವಾಸಿ ನೃತ್ಯ ಪ್ರದರ್ಶನಗಳು ಜಾಥಾದ ಪ್ರಮುಖ ಆಕರ್ಷಣೆಗಳಾಗಿವೆ.
ಬೆಳಿಗ್ಗೆ 10 ಗಂಟೆಗೆ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ಕೊಡಗು ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ. ಅನಂತಶಯನ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಜಾನಪದ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಕರ್ನಾಟಕ ಅರೆಭಾಷೆ ಸಾಹಿತ್ಯ ಮತ್ತು ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಾಜಿ, ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷೆ ಪಿ. ಕಲಾವತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಉದ್ಯಮಿಗಳಾದ ಅವರೆಮಾದಂಡ ಶರಣ್ ಪೂಣಚ್ಚ, ನಾಪಂಡ ಮುತ್ತಪ್ಪ, ಪೊನ್ನಚ್ಚನ ಮೋಹನ್, ಕುಕ್ಕೇರ ಜಯ ಚಿಣ್ಣಪ್ಪ, ಜಯಂತಿ ಶೆಟ್ಟಿ, ಸಮಾಜ ಸೇವಕ ಎಡಿಕೇರಿ ಪ್ರಸನ್ನ, ಜಿಲ್ಲಾಡಳಿತದ ಕಾನೂನು ಸಲಹೆಗಾರ ಲೋಕೇಶ್ ಕುಮಾರ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಚಿನ್ನಸ್ವಾಮಿ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ.
ಜಾನಪದ ಗಾಯಕರುಗಳಾದ ಉಮೇಶ್ ಹಾಗೂ ರಿಕ್ಕಿ ಮುತ್ತಪ್ಪ, ಮಡಿಕೇರಿ ನಗರ ದಸರಾ ಸಮಿತಿ ಉಪಾಧ್ಯಕ್ಷ ಮಹೇಶ್ ಜೈನಿ, ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿ ಸಬಿತಾ ಹಾಗೂ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಕುಡೆಕಲ್ ಸಂತೋಷ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.



































