ಮಡಿಕೇರಿ NEWS DESK ಅ.21 : ಕರ್ತವ್ಯದ ವೇಳೆ ದೇಶದ ರಕ್ಷಣೆ ಹಾಗೂ ಸಾರ್ವಜನಿಕರ ಸುರಕ್ಷತೆಗಾಗಿ ಪ್ರಾಣತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಯನ್ನು ಸ್ಮರಿಸುವ ಪೊಲೀಸ್ ಹುತಾತ್ಮರ ದಿನವನ್ನು ಕೊಡಗು ಜಿಲ್ಲಾ ಪೊಲೀಸ್ ವತಿಯಿಂದ ಮಡಿಕೇರಿ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸೋಮಶೇಖರ್ ಎಸ್.ಜೆ. ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು, ದೇಶದ ವಿವಿಧೆಡೆ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಹುತಾತ್ಮರಾದ ಪೊಲೀಸ್ ಸಿಬ್ಬಂದಿಯನ್ನು ಸ್ಮರಿಸಿ ಗೌರವ ಸಲ್ಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ ಅವರು ಪೊಲೀಸ್ ಸಿಬ್ಬಂದಿಯ ತ್ಯಾಗ, ಬಲಿದಾನ ಮತ್ತು ದೇಶದ ಸೇವೆಯಲ್ಲಿ ಅವರ ಪಾತ್ರದ ಕುರಿತು ಮಾತನಾಡಿದರು. ಪೊಲೀಸ್ ಹುತಾತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಕರ್ತವ್ಯದ ವೇಳೆ ಪ್ರಾಣತ್ಯಾಗ ಮಾಡಿದ ಪೊಲೀಸ್ ಸಿಬ್ಬಂದಿಗಳಿಗೆ ಗೌರವ ಅರ್ಪಿಸಲಾಯಿತು. ದೇಶದ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕರ ರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಪೊಲೀಸ್ ಸಿಬ್ಬಂದಿಯ ಸೇವೆ ಮತ್ತು ತ್ಯಾಗವನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಹಿರಿಯ ಅಧಿಕಾರಿಗಳು, ನಿವೃತ್ತ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.





































