ವಿರಾಜಪೇಟೆ, NEWS DESK ಅ.30: ಇಲ್ಲಿನ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಅ. 30ರಂದು ಪೋಷಕರ ಹಾಗೂ ಶಿಕ್ಷಕರ ಸಭೆಯನ್ನು ಆಯೋಜಿಸಲಾಗಿತ್ತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಎಂ.ಕೆ. ಪದ್ಮ ಅವರು ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ವಿಕಸನದಲ್ಲಿ ಪೋಷಕರ ಪಾತ್ರ ಮಹತ್ತರವಾಗಿದೆ. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಪೋಷಕರು ಹೆಚ್ಚಿನ ಸಮಯ ಮೀಸಲಿಡಬೇಕು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಶಿಕ್ಷಕರಷ್ಟೇ ಪೋಷಕರ ಜವಾಬ್ದಾರಿಯೂ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಕನ್ನಡ ಉಪನ್ಯಾಸಕಿ ಶ್ರೀಮತಿ ಎಂ.ಪಿ. ದಮಯಂತಿ ಅವರು ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಹಾಗೂ ಪರೀಕ್ಷೆಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪೋಷಕರಿಗೆ ವಿವರವಾಗಿ ತಿಳಿಸಿದರು.
ಸಭೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದ ಪೋಷಕರು ಮುಕ್ತ ಸಂವಾದದಲ್ಲಿ ಭಾಗವಹಿಸಿ, ಕಾಲೇಜಿನ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ತಮ್ಮ ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಪೋಷಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಅವರು ಮಾತನಾಡಿ, ಮಕ್ಕಳ ವಿದ್ಯಾಭ್ಯಾಸ ಹಾಗೂ ಬೆಳವಣಿಗೆಯ ಬಗ್ಗೆ ಹೆಚ್ಚಿನ ಗಮನ ಹರಿಸುವುದು ಪೋಷಕರ ಕರ್ತವ್ಯವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಆರಂಭದಲ್ಲಿ ಕುಮಾರಿ ವೀಣಾ ಮತ್ತು ತಂಡದವರು ಪ್ರಾರ್ಥಿಸಿದರು. ಶಿಕ್ಷಕ-ಪೋಷಕ ಸಂಘದ ಸಂಚಾಲಕಿ ಶ್ರೀಮತಿ ಡೈನಾ ಸೋಮಯ್ಯ ಅವರು ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಂಘದ ಸಂಚಾಲಕಿ ನಕಿಯಾ ಬಾನು ವಂದನಾರ್ಪಣೆ ಮಾಡಿದರು. ಉಪನ್ಯಾಸಕಿಯರಾದ ಶ್ರೀಮತಿ ಅನುಪಮ ತಿಮ್ಮಯ್ಯ ಹಾಗೂ ಶ್ರೀಮತಿ ಪ್ರೇಮಾಂಜಲಿ ಕಾರ್ಯಕ್ರಮ ನಿರೂಪಿಸಿದರು.
ಕಾಲೇಜಿನ ಉಪನ್ಯಾಸಕ ವೃಂದದವರು ಹಾಗೂ ಪೋಷಕರು ಸಭೆಯಲ್ಲಿ ಉಪಸ್ಥಿತರಿದ್ದರು. ಕೊನೆಯಲ್ಲಿ ರಾಷ್ಟ್ರಗೀತೆಯೊಂದಿಗೆ ಸಭೆ ಮುಕ್ತಾಯಗೊಂಡಿತು.

















