ವಿರಾಜಪೇಟೆ ಅ.30 NEWS DESK : ಕನ್ನಡ ರಾಜ್ಯೋತ್ಸವದ ಅಂಗವಾಗಿ ಕರ್ನಾಟಕ ಸಂಘದ ವತಿಯಿಂದ ನವೆಂಬರ್ 2ರಂದು ವಿರಾಜಪೇಟೆಯ ಮಹಿಳಾ ಸಮಾಜದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ತಾಲೂಕು ಮಟ್ಟದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ತಿಳಿಸಿದ್ದಾರೆ. ಅಂದು ಪೂರ್ವಾಹ್ನ 10 ಗಂಟೆಗೆ ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 10.30 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಸಂಘದ ಅಧ್ಯಕ್ಷ ಮಾಳೇಟಿರ ಬೆಲ್ಲು ಬೋಪಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ, ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ ಹಾಗೂ ವಿರಾಜಪೇಟೆ ಪುರಸಭೆಯ ಮುಖ್ಯಾಧಿಕಾರಿ ಪಟ್ಟಚೆರವಂಡ ನಾಚಪ್ಪ ಪಾಲ್ಗೊಳ್ಳಲಿದ್ದಾರೆ.

















