ಮಡಿಕೇರಿ NEWS DESK ಅ.31 : ಭಾರತದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 42ನೇ ವರ್ಷದ ಪುಣ್ಯಸ್ಮರಣೆಯನ್ನು ನಗರದ ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ಮಾತನಾಡಿ ಇಂದಿರಾ ಗಾಂಧಿ ಅವರು ಪ್ರಧಾನಮಂತ್ರಿಯಾಗಿ ದೇಶಕ್ಕೆ ನೀಡಿದ ಕೊಡುಗೆ ಹಾಗೂ ಮಹಿಳಾ ಶಕ್ತಿಗೆ ಪ್ರೇರಣೆಯಾಗಿರುವ ಕುರಿತು ವಿವರಿಸಿದರು. ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಇಂದಿರಾ ಗಾಂಧಿ ಅವರು ಬ್ಯಾಂಕ್ ಗಳ ರಾಷ್ಟ್ರೀಕರಣಕ್ಕೆ ತೆಗೆದುಕೊಂಡ ದಿಟ್ಟ ನಿರ್ಧಾರ ಸೇರಿದಂತೆ ದೇಶದ ಅಭಿವೃದ್ಧಿಗಾಗಿ ಶ್ರಮಿಸಿದ ರೀತಿಯನ್ನು ಸ್ಮರಿಸಿದರು. ಕಾಂಗ್ರೆಸ್ ಪ್ರಚಾರ ಸಮಿತಿಯ ಬ್ಲಾಕ್ ಅಧ್ಯಕ್ಷ ವಿ.ಜಿ.ಮೋಹನ್ ಮಾತನಾಡಿ ಇಂದಿರಾ ಗಾಂಧಿ ಅವರ ರಾಜಕೀಯ ಜೀವನ ಹಾಗೂ ಸಾಧನೆಗಳ ಕುರಿತು ಮಾಹಿತಿ ನೀಡಿದರು.
ಮಡಿಕೇರಿ ಬ್ಲಾಕ್ ಯುವ ಘಟಕದ ಅಧ್ಯಕ್ಷ ಕವನ ಕೊತ್ತೋಳಿ ಮಾತನಾಡಿ, ಇಂದಿರಾ ಗಾಂಧಿ ಅವರ ಆಡಳಿತ ವೈಖರಿ ಹಾಗೂ ಆದರ್ಶಗಳನ್ನು ಯುವ ರಾಜಕಾರಣಿಗಳು ಅಳವಡಿಸಿಕೊಳ್ಳುವ ಅಗತ್ಯವನ್ನು ತಿಳಿಸಿದರು. ನಗರಸಭೆಯ ಮಾಜಿ ಉಪಾಧ್ಯಕ್ಷೆ ಲೀಲಾ ಶೇಷಮ್ಮ ಮಾತನಾಡಿ, ಇಂದಿರಾ ಗಾಂಧಿ ಅವರ ರಾಜಕೀಯ ನಡೆಗಳು ಹಾಗೂ ದೇಶದ ಆಡಳಿತದಲ್ಲಿ ಅವರು ಕೈಗೊಂಡ ಹಲವು ಮಹತ್ವದ ನಿರ್ಧಾರಗಳನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿಕಲಾ, ಪ್ರಧಾನ ಕಾರ್ಯದರ್ಶಿ ಕೋಚನ ಚೇತನ್, ಮಾಜಿ ಸೈನಿಕ ಘಟಕದ ಜಿಲ್ಲಾಧ್ಯಕ್ಷ ಬೊಳಿಯಂಡ ಗಣೇಶ್, ನಗರ ಉಪಾಧ್ಯಕ್ಷ ಮುನೀರ್ ಮಾಚಾರ್, ಕೌಸರ್, ವಸಂತ ಭಟ್, ಸುಬ್ರಮಣಿ, ಜಿ.ಆರ್.ರಾಜು, ಸೈಮನ್, ಪೂಣಚ್ಚ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಅಲ್ಪಸಂಖ್ಯಾತರ ಘಟಕದ ಬ್ಲಾಕ್ ಅಧ್ಯಕ್ಷ ಕೆ.ಜಿ.ಪೀಟರ್ ನಿರೂಪಿಸಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಆರ್.ಪಿ.ಚಂದ್ರಶೇಖರ್ ವಂದಿಸಿದರು.

















