ಕುಶಾಲನಗರ, NEWS DESK ನ.2: ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ನೂತನ ತಹಶೀಲ್ದಾರರಾಗಿ ಅಧಿಕಾರ ಸ್ವೀಕರಿಸಿದ ರಮೇಶ್ ಬಾಬು ಅವರನ್ನು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲಾ ಹಾಗೂ ಕುಶಾಲನಗರ ತಾಲ್ಲೂಕು ಘಟಕದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಗೌರವಿಸಲಾಯಿತು.
ಕುಶಾಲನಗರ ತಾಲ್ಲೂಕು ಕಂದಾಯ ಇಲಾಖೆಯ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಸಂಘಟನೆಯ ಪದಾಧಿಕಾರಿಗಳು ನೂತನ ತಹಶೀಲ್ದಾರ್ ಅವರಿಗೆ ಶಾಲು ಹೊದಿಸಿ, ಫಲಪುಷ್ಪ ನೀಡಿ ಅಭಿನಂದಿಸಿದರು.
ಸಂಘಟನೆಯ ಮುಖಂಡರು ಹಾಗೂ ಪದಾಧಿಕಾರಿಗಳ ಆತ್ಮೀಯ ಸ್ವಾಗತಕ್ಕೆ ಹರ್ಷ ವ್ಯಕ್ತಪಡಿಸಿದ ತಹಶೀಲ್ದಾರ್ ರಮೇಶ್ ಬಾಬು ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕುಶಾಲನಗರ ತಾಲ್ಲೂಕಿನ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ಜನಪರವಾಗಿ ಕಾರ್ಯನಿರ್ವಹಿಸುವುದು ತಮ್ಮ ಮುಖ್ಯ ಗುರಿಯಾಗಿದೆ. ಕಂದಾಯ ಇಲಾಖೆಯ ಎಲ್ಲಾ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲು ಹಾಗೂ ತಾಲ್ಲೂಕಿನ ಅಭಿವೃದ್ಧಿಗೆ ಪ್ರತಿಯೊಬ್ಬರ ಸಹಕಾರ ಅಗತ್ಯವಿದೆ. ಎಲ್ಲರ ಸಹಕಾರದೊಂದಿಗೆ ಉತ್ತಮ ಆಡಳಿತ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಕೊಡಗು ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಜಿಲ್ಲಾ ಉಪಾಧ್ಯಕ್ಷ ರಾಜಶೇಖರ್ ಗೌಡ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜಯಶ್ರೀ ಮುರುಗೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಣಿಕಂಠ, ಜಿಲ್ಲಾ ಖಜಾಂಜಿ ಅಂತೋನಿ, ಕುಶಾಲನಗರ ತಾಲ್ಲೂಕು ಅಧ್ಯಕ್ಷ ಕೆ.ಎಸ್. ಶಿವ, ಉಪಾಧ್ಯಕ್ಷ ನಾಸಿರ್, ತಾಲ್ಲೂಕು ಸಂಘಟನಾಕಾರ ವಿ.ಪಿ. ಚಂದ್ರು, ತಾಲ್ಲೂಕು ಮಹಿಳಾ ಘಟಕದ ಉಪಾಧ್ಯಕ್ಷೆ ದಿವ್ಯ ಡಿಸೋಜ, ತಾಲ್ಲೂಕು ಗೌರವಾಧ್ಯಕ್ಷೆ ನಾಗರತ್ನ, ಕುಶಾಲನಗರ ನಗರ ಘಟಕದ ಗೌರವಾಧ್ಯಕ್ಷ ವಿಲ್ಸನ್, ಆರ್ಮಿ ದಿನೇಶ್, ರಫೀಕ್, ಜೈರುದ್ದೀನ್, ಅನಿಫ್, ಪ್ರಶಾಂತ್ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

















