ವಿರಾಜಪೇಟೆ, NEWS DESK ನ.5: ಕೊಪ್ಪಳದ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ ಚೆಸ್ ಪಂದ್ಯಾವಳಿಯಲ್ಲಿ ಕಾವೇರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿ ಶಾಲೆಗೆ ಕೀರ್ತಿ ತಂದಿದ್ದಾರೆ.
8ನೇ ತರಗತಿಯ ವಿದ್ಯಾರ್ಥಿನಿ ಲೇಟ್ಟಿರ ಛಾಲ್ಸಿ ಅವರು ಅಂಡರ್-14 ವಿಭಾಗದ ಚೆಸ್ ಪಂದ್ಯಾವಳಿಯಲ್ಲಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದರು. ಒಟ್ಟು 155 ಸ್ಪರ್ಧಿಗಳು ಭಾಗವಹಿಸಿದ್ದ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿದ ಅವರು ಅತ್ಯುತ್ತಮ ಪ್ರದರ್ಶನ ನೀಡಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ. ಕೆದಮುಳ್ಳೂರು ನಿವಾಸಿಗಳಾದ ಲೇಟ್ಟಿರ ಗೌತಮ್ ಎಂ.ಯು. ಮತ್ತು ಅಣ್ಣೀರ ಸುಷ್ಮ ಎ.ಪಿ. ದಂಪತಿಯ ಪುತ್ರಿಯಾಗಿರುವ ಛಾಲ್ಸಿ ಕಳೆದ ನಾಲ್ಕು ವರ್ಷಗಳಿಂದ ಚೆಸ್ ತರಬೇತಿ ಪಡೆಯುತ್ತಿದ್ದಾರೆ.
ಅದೇ ರೀತಿ, 6ನೇ ತರಗತಿಯ ವಿದ್ಯಾರ್ಥಿ ಶೌರ್ಯ ಬಿ.ಎಸ್. ಅವರು ಅಂಡರ್-14 ವಿಭಾಗದಲ್ಲಿ ತಾಲೂಕು ಮಟ್ಟದಲ್ಲಿ ಪ್ರಥಮ ಹಾಗೂ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದರು. ರಾಜ್ಯಮಟ್ಟದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿದ ಅವರು ಕೊಡಗು ಜಿಲ್ಲೆಯ ಉತ್ತಮ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಾವೇರಿ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಸುದೇಶ್ ಬಿ.ಎಸ್. ಹಾಗೂ ಸಹನಾ ದಂಪತಿಯ ಪುತ್ರನಾಗಿರುವ ಶೌರ್ಯ ಕಳೆದ ಆರು ವರ್ಷಗಳಿಂದ ಚೆಸ್ ತರಬೇತಿ ಪಡೆಯುತ್ತಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾವೇರಿ ಶಾಲೆಯ ಚೆಸ್ ತರಬೇತುದಾರ ಮಣಿ ಅವರ ನಿರಂತರ ಮಾರ್ಗದರ್ಶನ, ಸಮರ್ಪಕ ತರಬೇತಿ ಹಾಗೂ ವಿದ್ಯಾರ್ಥಿಗಳ ಪರಿಶ್ರಮ ಪ್ರಮುಖ ಕಾರಣವಾಗಿದೆ.
ಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸುದೇಶ್ ಬಿ.ಎಸ್. ಉಪಸ್ಥಿತರಿದ್ದರು.
ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ಶಾಲೆ ಹಾಗೂ ಜಿಲ್ಲೆಯ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಸುದೇಶ್ ಬಿ.ಎಸ್., ಕಾರ್ಯದರ್ಶಿ ವಿನೋದ್ ಪಿ.ಎನ್., ಮುಖ್ಯ ಶಿಕ್ಷಕಿ ಪಾರ್ವತಿ ಪಿ.ಯು., ಸಂಯೋಜಕಿ ಅಮೃತ ಅರ್ಜುನ್, ಶಿಕ್ಷಕರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಅಭಿನಂದಿಸಿದ್ದಾರೆ.

















