ಮಡಿಕೇರಿ, NEWS DESK ನ.5: ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಗತ್ಯ ವಸ್ತುಗಳ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವುದರಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವ ಮೂಲಕ ಜನರಿಗೆ ನೆಮ್ಮದಿಯ ಬದುಕು ಕಲ್ಪಿಸಬೇಕು ಎಂದು ಕೊಡಗು ಜಿಲ್ಲಾ ಬಿಜೆಪಿ ಎಸ್‌ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ. ಪರಮೇಶ್ವರ ಆಗ್ರಹಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಉಚಿತ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ಜನಸಾಮಾನ್ಯರ ಹಕ್ಕುಗಳನ್ನು ಕಸಿದುಕೊಳ್ಳುತ್ತಿದೆ. ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಸಾಮಾನ್ಯ ಕುಟುಂಬಗಳು ಜೀವನ ನಿರ್ವಹಣೆ ಮಾಡಲು ಪರದಾಡುವಂತಾಗಿದೆ ಎಂದು ಟೀಕಿಸಿದ್ದಾರೆ.
ಪೆಟ್ರೋಲ್ ಮತ್ತು ಡೀಸೆಲ್ ದರಗಳ ವಿಚಾರದಲ್ಲಿ ಹಿಂದಿನ ದರಗಳನ್ನು ಮುಂದಿಟ್ಟುಕೊಂಡು ಜನರ ಗಮನ ಬೇರೆಡೆ ಸೆಳೆಯುವ ಮೂಲಕ ಸರ್ಕಾರ ಸತ್ಯವನ್ನು ಮರೆಮಾಚುತ್ತಿದೆ ಎಂದು ಆರೋಪಿಸಿದ್ದಾರೆ.
ರಾಜ್ಯದಲ್ಲಿ ಬರದ ಪರಿಸ್ಥಿತಿ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಇದರ ತೀವ್ರತೆ ಹೆಚ್ಚಾಗುವ ಆತಂಕವಿದೆ. ಬೆಳೆ ಹಾನಿ ಹಾಗೂ ಮೇವಿನ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಲಿನ ದರವನ್ನು ನಾಲ್ಕು ಬಾರಿ ಹೆಚ್ಚಿಸಿದ್ದರೂ ರೈತರಿಗೆ ನಿರೀಕ್ಷಿತ ಲಾಭ ದೊರೆಯುತ್ತಿಲ್ಲ. ಜಾನುವಾರುಗಳ ಮೇವಿಗೆ ಸಬ್ಸಿಡಿ ನೀಡದೆ, ಒಂದು ಚೀಲ ಮೇವಿನ ಬೆಲೆಯನ್ನು 200 ರೂ.ಗಿಂತ ಹೆಚ್ಚಿಸಿರುವುದು ರೈತರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ದೂರಿದ್ದಾರೆ.
ಮಹಿಳೆಯರಿಗೆ ಉಚಿತ ಪ್ರಯಾಣದ ಯೋಜನೆಯಿಂದ ರಾಜ್ಯ ಸಾರಿಗೆ ಸಂಸ್ಥೆಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬಿದ್ದಿದೆ. ಉಚಿತ ವಿದ್ಯುತ್ ಯೋಜನೆಯಿಂದ ವಿದ್ಯುತ್ ಇಲಾಖೆಯ ಆರ್ಥಿಕ ಸ್ಥಿತಿಯೂ ಹದಗೆಟ್ಟಿದೆ ಎಂದು ಟೀಕಿಸಿದ್ದಾರೆ.
ಮಹಿಳೆಯರಿಗೆ ಮಾಸಿಕ 2,000 ರೂ. ನೀಡುವ ಭರವಸೆ ನೀಡಿದ್ದರೂ, 8ರಿಂದ 9 ತಿಂಗಳ ಹಣ ಪಾವತಿಸದೆ ವಂಚಿಸಲಾಗಿದೆ. ಪುರುಷ ಪ್ರಯಾಣಿಕರ ಮೇಲೆ ಬಸ್ ಪ್ರಯಾಣ ದರ ಏರಿಕೆಯ ಹೊರೆ ಹಾಕಲಾಗುತ್ತಿದೆ. ಪಿಂಚಣಿ ಪಡೆಯುವ ವೃದ್ಧರು ಹಾಗೂ ಅರ್ಹ ಫಲಾನುಭವಿಗಳಿಗೆ ಪರಿಶೀಲನೆಯ ನೆಪದಲ್ಲಿ ನಾಲ್ಕೈದು ತಿಂಗಳ ಪಿಂಚಣಿ ಹಣ ನೀಡದೆ ತೊಂದರೆ ಉಂಟುಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಪರಿಶಿಷ್ಟ ಪಂಗಡದ ಜನರಿಗೆ ನೀಡಲಾಗುತ್ತಿದ್ದ ಪೌಷ್ಟಿಕ ಆಹಾರದ ಕಿಟ್‌ಗಳನ್ನು ಕಳೆದ ಎಂಟು ತಿಂಗಳಿನಿಂದ ವಿತರಿಸದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಕಂದಾಯ ಇಲಾಖೆಯ ಕೆಲಸಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಆಧಾರ್ ಕೇಂದ್ರಗಳು ಹಾಗೂ ಆನ್‌ಲೈನ್ ಸೇವೆಗಳ ಕಾರ್ಯನಿರ್ವಹಣೆಯಲ್ಲಿಯೂ ಸಮಸ್ಯೆಗಳಿವೆ. ರಸ್ತೆಗಳ ಅಭಿವೃದ್ಧಿ ಸೇರಿದಂತೆ ಮೂಲಸೌಕರ್ಯ ಕಾಮಗಾರಿಗಳಲ್ಲಿಯೂ ನಿರೀಕ್ಷಿತ ಪ್ರಗತಿ ಕಂಡುಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17 ಬಾರಿ ಬಜೆಟ್ ಮಂಡಿಸಿರುವ ಆರ್ಥಿಕ ತಜ್ಞರೆಂದು ಬಿಂಬಿಸಿಕೊಂಡಿದ್ದರೂ, ಚುನಾವಣಾ ಸಂದರ್ಭದಲ್ಲಿ ಉಚಿತ ಯೋಜನೆಗಳ ಭರವಸೆ ನೀಡಿ ರಾಜ್ಯದ ಆರ್ಥಿಕತೆಯನ್ನು ಸಂಕಷ್ಟಕ್ಕೆ ತಳ್ಳಿದ್ದಾರೆ. ಯೋಜನೆಗಳ ಅನುಷ್ಠಾನ ಹಾಗೂ ಆಡಳಿತ ವೈಫಲ್ಯದಿಂದ ಮುಂದಿನ ದಿನಗಳಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಹೇಗಾಗಬಹುದು ಎಂಬ ಆತಂಕ ಜನರಲ್ಲಿ ಮೂಡಿದೆ ಎಂದು ಹೇಳಿದ್ದಾರೆ.
ಜನಸಾಮಾನ್ಯರು ಮೂರು-ನಾಲ್ಕು ದಿನ ಹಾಲು ಖರೀದಿಸದೆ ಪ್ರತಿಭಟಿಸಿದರೆ ಅದರ ಪರಿಣಾಮ ಸರ್ಕಾರಕ್ಕೆ ಅರಿವಾಗಬಹುದು. ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದ ಕರ್ನಾಟಕವನ್ನು ರಕ್ಷಿಸಲು ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವುದೇ ಸೂಕ್ತ ಎಂದು ಎಂ.ಎಂ. ಪರಮೇಶ್ವರ ಒತ್ತಾಯಿಸಿದ್ದಾರೆ.

















