ಮಡಿಕೇರಿ, NEWS DESK ನ. 6: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಸಂದರ್ಭದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎಷ್ಟು ಮತದಾರರ ಮತದಾನದ ಹಕ್ಕನ್ನು ಕಾನೂನುಬಾಹಿರವಾಗಿ ರದ್ದುಪಡಿಸಲಾಗಿದೆ ಹಾಗೂ ಯಾರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂಬುದನ್ನು ಕಾಂಗ್ರೆಸ್ ಪಕ್ಷ ದಾಖಲೆ ಸಹಿತ ಬಹಿರಂಗಪಡಿಸಲಿ ಎಂದು ವಿರಾಜಪೇಟೆ ಬಿಜೆಪಿ ಮಂಡಲದ ವಕ್ತಾರ ಚೆಪ್ಪುಡಿರ ರಾಕೇಶ್ ದೇವಯ್ಯ ಸವಾಲು ಹಾಕಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಂಗ್ರೆಸ್ ಪಕ್ಷವು ಆಧಾರರಹಿತ ಆರೋಪಗಳನ್ನು ಮಾಡುವ ಮೂಲಕ ಎಸ್ಐಆರ್ ಪ್ರಕ್ರಿಯೆ ಕುರಿತು ಗೊಂದಲ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದ್ದಾರೆ.
ಒಬ್ಬ ವ್ಯಕ್ತಿಯ ಹೆಸರು ಎರಡು ಕಡೆಗಳ ಮತದಾರರ ಪಟ್ಟಿಯಲ್ಲಿ ಇದ್ದಾಗ, ಒಂದು ಕಡೆಗಿನ ನೋಂದಣಿಯನ್ನು ರದ್ದುಪಡಿಸಿದರೆ, ಮೃತಪಟ್ಟವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿದರೆ ಹಾಗೂ ವ್ಯಕ್ತಿ ಮತ್ತು ಅವರ ಕುಟುಂಬದವರು ಆ ಸ್ಥಳದಲ್ಲಿ ವಾಸವಿಲ್ಲದಿರುವ ಸಂದರ್ಭದಲ್ಲಿ ಪರಿಶೀಲನೆ ನಡೆಸಿ ಅವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿದರೆ ಅದು ತಪ್ಪೇ? ಎಂದು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಪಕ್ಷವು ಅಧಿಕಾರ ಪಡೆಯುವ ಏಕೈಕ ಉದ್ದೇಶದಿಂದ ಸುಳ್ಳು ಆರೋಪಗಳನ್ನು ಮಾಡುತ್ತಾ ಸತ್ಯವನ್ನು ಮರೆಮಾಚಲು ಪ್ರಯತ್ನಿಸುತ್ತಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ ವಾಸ್ತವಾಂಶಗಳನ್ನು ಜನರ ಮುಂದಿಡುವ ಕೆಲಸ ಮಾಡಿದೆ. ಇದನ್ನು ಸಹಿಸದ ಕಾಂಗ್ರೆಸ್ಸಿಗರು ಬಿಜೆಪಿ ಚುನಾವಣಾ ಆಯೋಗದ ವಕ್ತಾರರಂತೆ ವರ್ತಿಸುತ್ತಿದೆ ಎಂದು ಆರೋಪಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಸುಖಾಸುಮ್ಮನೆ ನಮೂನೆ ಸಂಖ್ಯೆ 7ರ ಅರ್ಜಿಗಳನ್ನು ಭರ್ತಿ ಮಾಡಿ ಮತದಾರರನ್ನು ಪಟ್ಟಿಯಿಂದ ಹೊರಗಿಡಲು ಪ್ರಯತ್ನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಬಿಜೆಪಿ ವಿರುದ್ಧ ಈ ರೀತಿಯ ಆಧಾರರಹಿತ ಆರೋಪಗಳನ್ನು ಮಾಡುತ್ತಿರುವಾಗ ಬಿಜೆಪಿ ಅದಕ್ಕೆ ಉತ್ತರಿಸಬಾರದೇ? ಕಾಂಗ್ರೆಸ್ ನಾಯಕರೂ ಚುನಾವಣಾ ಆಯೋಗದ ವಕ್ತಾರರಂತೆ ಮಾತನಾಡುತ್ತಿದ್ದಾರೆಯೇ ಎಂದು ರಾಕೇಶ್ ದೇವಯ್ಯ ತಿರುಗೇಟು ನೀಡಿದ್ದಾರೆ.
ಚುನಾವಣಾ ಆಯೋಗದ ಪ್ರಕ್ರಿಯೆಯಲ್ಲಿ ಯಾವುದಾದರೂ ತಪ್ಪು ನಡೆದಿದ್ದರೆ ಅಥವಾ ಅನ್ಯಾಯವಾಗಿದ್ದರೆ, ಅದಕ್ಕೆ ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಸಂಗ್ರಹಿಸಿ ನ್ಯಾಯಾಲಯದ ಮೊರೆ ಹೋಗುವ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಆದರೆ ಕಾಂಗ್ರೆಸ್ ನಾಯಕರು ಆ ಮಾರ್ಗವನ್ನು ಅನುಸರಿಸದೆ ಕೇವಲ ಆರೋಪಗಳನ್ನು ಮಾಡುವುದೇಕೆ? ಅವರಿಗೆ ನ್ಯಾಯಾಲಯದ ಮೇಲೆ ನಂಬಿಕೆ ಇಲ್ಲವೇ ಎಂದು ಪ್ರಶ್ನಿಸಿದ್ದಾರೆ.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆಯಿಂದ ಎಷ್ಟು ಜನರಿಗೆ ಅನ್ಯಾಯವಾಗಿದೆ ಎಂಬುದನ್ನು ದಾಖಲೆಗಳ ಸಹಿತ ಜನರ ಮುಂದಿಡಲಿ. ರಾಷ್ಟ್ರೀಯ ನಾಯಕರನ್ನು ಮೆಚ್ಚಿಸುವ ಉದ್ದೇಶದಿಂದ ಕಾಂಗ್ರೆಸ್ಸಿಗರು ಕ್ಷೇತ್ರದ ಜನರನ್ನು ತಪ್ಪುದಾರಿಗೆಳೆಯುವ ಪ್ರಯತ್ನ ಮಾಡಬಾರದು. ವಿರಾಜಪೇಟೆ ಕ್ಷೇತ್ರದ ಮತದಾರರು ಪ್ರಜ್ಞಾವಂತರಾಗಿದ್ದು, ಪ್ರಜಾಪ್ರಭುತ್ವ, ಸಂವಿಧಾನ, ಮತದಾನ, ಚುನಾವಣಾ ಆಯೋಗ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಸೇರಿದಂತೆ ಎಲ್ಲ ವಿಚಾರಗಳ ಬಗ್ಗೆ ಅರಿವು ಹೊಂದಿದ್ದಾರೆ ಎಂದು ರಾಕೇಶ್ ದೇವಯ್ಯ ತಿಳಿಸಿದ್ದಾರೆ.

















