ಕುಶಾಲನಗರ, NEWS DESK ನ.9: ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಮದಲಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಕುಶಾಲನಗರ ಸ್ಥಳೀಯ ಸಂಸ್ಥೆ, ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕ ಹಾಗೂ ಇಕೋ ಕ್ಲಬ್ ವತಿಯಿಂದ ಹಸಿರು ದೀಪಾವಳಿ ಆಚರಿಸಲಾಯಿತು.
ಗೈಡ್ಸ್ ಸ್ವಯಂಸೇವಕರು ಹಾಗೂ ಶಾಲಾ ವಿದ್ಯಾರ್ಥಿಗಳು ‘ಪಟಾಕಿ ತ್ಯಜಿಸಿ – ಹಸಿರು ದೀಪಾವಳಿ ಆಚರಿಸಿ’ ಎಂಬ ಘೋಷವಾಕ್ಯದೊಂದಿಗೆ ಶಾಲಾ ಆವರಣದಲ್ಲಿ ರಂಗೋಲಿ ಬಿಡಿಸಿ, ಮಣ್ಣಿನ ಹಣತೆಗಳನ್ನು ಬೆಳಗಿಸುವ ಮೂಲಕ ಹಸಿರು ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿದರು. ಇದೇ ಸಂದರ್ಭದಲ್ಲಿ ಮಾಲಿನ್ಯ ಮುಕ್ತ ದೀಪಾವಳಿ ಆಚರಿಸುವ ಸಂಕಲ್ಪ ಕೈಗೊಂಡರು.
ಹಸಿರು ದೀಪಾವಳಿ ಆಚರಣೆಗೆ ಚಾಲನೆ ನೀಡಿದ ಶಾಲೆಯ ಮುಖ್ಯ ಶಿಕ್ಷಕಿ ಎಂ. ರೇಣುಕ ಮಾತನಾಡಿ, ದೀಪಾವಳಿ ಸೇರಿದಂತೆ ಯಾವುದೇ ಹಬ್ಬದ ಆಚರಣೆಯ ಸಂದರ್ಭದಲ್ಲಿ ನೆಲ, ಜಲ ಹಾಗೂ ಪರಿಸರಕ್ಕೆ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ಸ್ವಚ್ಛ, ಆರೋಗ್ಯಕರ ಹಾಗೂ ಹಸಿರು ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಸಂಕಲ್ಪ ತೊಡಬೇಕು ಎಂದರು. ಹಬ್ಬದ ಸಂದರ್ಭದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ವಿಂಗಡಿಸಿ, ಎಲ್ಲೆಂದರಲ್ಲಿ ಕಸ ಎಸೆಯದೆ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಹಸಿರು ದೀಪಾವಳಿ ಆಚರಣೆಯ ಕುರಿತು ಮಾಹಿತಿ ನೀಡಿದ ಶಿಕ್ಷಕ ಇ. ಮಿಥುನ್, ಪರಿಸರಕ್ಕೆ ಹಾನಿ ಉಂಟುಮಾಡುವ ಹಾಗೂ ವಾಯು ಮತ್ತು ಶಬ್ದ ಮಾಲಿನ್ಯಕ್ಕೆ ಕಾರಣವಾಗುವ ಪಟಾಕಿಗಳನ್ನು ಸಿಡಿಸಬಾರದು. ಪಟಾಕಿಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಇತರರಿಗೂ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಶಿಕ್ಷಕಿ ವೀಣಾ ಅವರು ಪಟಾಕಿ ಸಿಡಿಸುವುದರಿಂದ ಉಂಟಾಗುವ ಮಾಲಿನ್ಯ ಹಾಗೂ ಅದರ ದುಷ್ಪರಿಣಾಮಗಳ ಕುರಿತು ವಿವರಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸುಂದರ್ ವಿದ್ಯಾರ್ಥಿಗಳಿಗೆ ಹಸಿರು ದೀಪಾವಳಿ ಆಚರಣೆಯ ಪ್ರತಿಜ್ಞಾ ವಿಧಿ ಬೋಧಿಸಿದರು.
ಮಾಲಿನ್ಯ ಮುಕ್ತ ದೀಪಾವಳಿ ಆಚರಣೆಯ ಮಹತ್ವದ ಕುರಿತು ಶಾಲೆಯ ಗೈಡ್ ಕ್ಯಾಪ್ಟನ್ ಕೆ.ಕೆ. ಗಾಯತ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರತಿಜ್ಞೆ ಸ್ವೀಕರಿಸಿದ ವಿದ್ಯಾರ್ಥಿಗಳು, ಪರಿಸರ ಕಾಳಜಿಯುಳ್ಳ ಜವಾಬ್ದಾರಿಯುತ ಭಾರತದ ಪ್ರಜೆಗಳಾಗಿ ಈ ದೀಪಾವಳಿ ಹಬ್ಬವನ್ನು ಪ್ರಕೃತಿಯೊಂದಿಗೆ ಪ್ರೀತಿಯಿಂದ ಆಚರಿಸುವುದಾಗಿ ಸಂಕಲ್ಪ ಮಾಡಿದರು.
ಇದಕ್ಕೂ ಮೊದಲು ವಿದ್ಯಾರ್ಥಿಗಳು ಗ್ರಾಮದಲ್ಲಿ ಹಸಿರು ದೀಪಾವಳಿ ಆಚರಣೆಯ ಕುರಿತು ಜಾಗೃತಿ ಮೂಡಿಸಿದರು. ‘ಹಸಿರು ದೀಪಾವಳಿ ಆಚರಿಸೋಣ ಬನ್ನಿ’, ‘ಹಣತೆ ಬೆಳಗಿಸಿ ಮಾಲಿನ್ಯ ಮುಕ್ತ ದೀಪಾವಳಿ ಆಚರಿಸೋಣ ಬನ್ನಿ’ ಎಂಬ ಘೋಷಣೆಗಳ ಭಿತ್ತಿಫಲಕಗಳನ್ನು ಹಿಡಿದು ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.
ಶಾಲಾ ಶಿಕ್ಷಕರಾದ ಮಧುಸೂದನ್, ಆರಿಫಾ, ರಹಮತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
























