ಮಡಿಕೇರಿ, NEWS DESK ನ. 11: ಕೊಡವ ಹೆರಿಟೇಜ್ ಸೆಂಟರ್ನ ಬಾಕಿ ಉಳಿದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ₹5 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿಗಳನ್ನು ಶೀಘ್ರವಾಗಿ ಆರಂಭಿಸಲು ಶಾಸಕ ಡಾ. ಮಂತರ್ ಗೌಡ ಅವರು ಕ್ರಮ ಕೈಗೊಂಡಿದ್ದಾರೆ.
ಈ ಸಂಬಂಧ ಶಾಸಕ ಡಾ. ಮಂತರ್ ಗೌಡ ಅವರು ಬೆಂಗಳೂರಿನಲ್ಲಿ ಪ್ರವಾಸೋದ್ಯಮ ಇಲಾಖೆಯ ಆಯುಕ್ತರನ್ನು ಭೇಟಿ ಮಾಡಿ, ಕೊಡವ ಹೆರಿಟೇಜ್ ಸೆಂಟರ್ನ ಬಾಕಿ ಕಾಮಗಾರಿಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು. ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ, ಯಾವುದೇ ವಿಳಂಬವಿಲ್ಲದೆ ಕಾಮಗಾರಿಗಳಿಗೆ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಕೊಡವ ಹೆರಿಟೇಜ್ ಸೆಂಟರ್ ಕೊಡಗಿನ ವಿಶಿಷ್ಟ ಸಂಸ್ಕೃತಿ, ಪರಂಪರೆ ಹಾಗೂ ಐತಿಹಾಸಿಕ ವೈಭವವನ್ನು ಪ್ರತಿಬಿಂಬಿಸುವ ಮಹತ್ವದ ಯೋಜನೆಯಾಗಿದೆ. ಕೊಡವ ಸಮುದಾಯದ ಆಚಾರ-ವಿಚಾರ, ಸಂಪ್ರದಾಯಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವಲ್ಲಿ ಈ ಕೇಂದ್ರ ಪ್ರಮುಖ ಪಾತ್ರ ವಹಿಸಲಿದೆ. ಅಲ್ಲದೆ, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೂ ಹೆಚ್ಚಿನ ಕೊಡುಗೆ ನೀಡಲಿದೆ ಎಂದು ತಿಳಿಸಿದರು.
ಯೋಜನೆಯ ಕೆಲವು ಕಾಮಗಾರಿಗಳು ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಅವುಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸುವ ಅಗತ್ಯವಿದೆ. ಸರ್ಕಾರದಿಂದ ₹5 ಕೋಟಿ ಅನುದಾನ ಬಿಡುಗಡೆಯಾಗಿರುವುದರಿಂದ ಟೆಂಡರ್ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಕಾಮಗಾರಿಗಳನ್ನು ಆರಂಭಿಸಲು ಇಲಾಖೆಯ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಕೊಡಗಿನ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವುದರ ಜೊತೆಗೆ ಪ್ರವಾಸೋದ್ಯಮಕ್ಕೆ ಮತ್ತಷ್ಟು ಉತ್ತೇಜನ ನೀಡುವ ಉದ್ದೇಶದಿಂದ ಕೊಡವ ಹೆರಿಟೇಜ್ ಸೆಂಟರ್ ಯೋಜನೆಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ವಿಶೇಷ ಆಸಕ್ತಿ ವಹಿಸಿರುವುದಾಗಿ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.























