ಮಡಿಕೇರಿ, NEWS DESK ನ.13: ಮಡಿಕೇರಿ-ಗಾಳಿಬೀಡು ನಡುವಿನ ಒಟ್ಟು 8 ಕಿ.ಮೀ. ಮುಖ್ಯ ರಸ್ತೆಯ ಪೈಕಿ 3.5 ಕಿ.ಮೀ. ರಸ್ತೆಯನ್ನು 3.50 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾಮಗಾರಿಗೆ ಚಾಲನೆ ನೀಡಿ ಒಂದು ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಳ್ಳದಿರುವುದನ್ನು ಖಂಡಿಸಿ, ಗಾಳಿಬೀಡು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ನ.14ರಂದು ಶಾಂತಿಯುತ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಾಳಿಬೀಡು ಗ್ರಾಮದ ದಿಶಾಂತ್, 2025ರ ನವೆಂಬರ್ 14ರಂದು ಗಾಳಿಬೀಡು ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಗಿತ್ತು. ಶಾಸಕರ ಅನುದಾನದಲ್ಲಿ ಯೋಜನೆ ರೂಪಿಸಲಾಗಿದ್ದು, ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಆದರೆ ಕಾಮಗಾರಿ ಆರಂಭಗೊಂಡು ಒಂದು ವರ್ಷ ಕಳೆದರೂ ನಿರೀಕ್ಷಿತ ಪ್ರಗತಿ ಕಂಡುಬಂದಿಲ್ಲ. ಇದರಿಂದ ಗ್ರಾಮಸ್ಥರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಟೆಂಡರ್ ಪಡೆದ ಗುತ್ತಿಗೆದಾರರು ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸದಿರುವುದರಿಂದ ರಸ್ತೆ ಸಂಚಾರ ದುಸ್ತರವಾಗಿದೆ. ವಿದ್ಯಾರ್ಥಿಗಳು, ಉದ್ಯೋಗಿಗಳು ಹಾಗೂ ಹಿರಿಯ ನಾಗರಿಕರು ಸೇರಿದಂತೆ ನೂರಾರು ಮಂದಿ ಪ್ರತಿನಿತ್ಯ ಈ ರಸ್ತೆಯನ್ನು ಅವಲಂಬಿಸಿದ್ದಾರೆ. ಹದಗೆಟ್ಟ ರಸ್ತೆಯಿಂದ ವಾಹನ ಸವಾರರು ಅಪಾಯ ಎದುರಿಸುವಂತಾಗಿದ್ದು, ಸಾರ್ವಜನಿಕರ ಸುರಕ್ಷತೆಯ ಬಗ್ಗೆಯೂ ಆತಂಕ ಉಂಟಾಗಿದೆ ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ನ.14ರಂದು ಬೆಳಿಗ್ಗೆ 8 ಗಂಟೆಯಿಂದ ಕೆ. ನಿಡುಗಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಿಲ್ಲಾ ಪಂಚಾಯಿತಿ ಜಂಕ್ಷನ್ನಲ್ಲಿ ಗಾಳಿಬೀಡು, ಒಂದನೇ ಮೊಣ್ಣಂಗೇರಿ, ಕೆ. ನಿಡುಗಣೆ ಹಾಗೂ ವಣಚಲು ಗ್ರಾಮಗಳ ಗ್ರಾಮಸ್ಥರು ಮತ್ತು ಸಾರ್ವಜನಿಕರು ಪ್ರತಿಭಟನೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಗಾಳಿಬೀಡು ಮುಖ್ಯ ರಸ್ತೆ ಕಾಮಗಾರಿ ವಿಳಂಬಕ್ಕೆ ಕಾರಣವೇನು ಎಂಬುದನ್ನು ಅಧಿಕಾರಿಗಳು ಸಾರ್ವಜನಿಕರಿಗೆ ಬಹಿರಂಗಪಡಿಸಬೇಕು. ಟೆಂಡರ್ ಪಡೆದ ಗುತ್ತಿಗೆದಾರರು ಕೂಡಲೇ ಕಾಮಗಾರಿ ಆರಂಭಿಸಿ ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಕಾಮಗಾರಿಯ ಗುಣಮಟ್ಟವನ್ನು ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಿ ಖಾತರಿಪಡಿಸಬೇಕು. ಕಾಮಗಾರಿ ಪೂರ್ಣಗೊಳ್ಳುವ ನಿಖರ ದಿನಾಂಕವನ್ನು ಪ್ರಕಟಿಸಬೇಕು. ವಿಳಂಬಕ್ಕೆ ಕಾರಣರಾದ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಉಮೇಶ್ ಗುಡ್ಡೆಮನೆ, ಸಂತೋಷ್ ಪೂಜಾರಿ, ನಿತಿನ್ ಯಾಲದಾಳು, ಪುಷ್ಪರಾಜ್ ಗಾಳಿಬೀಡು ಹಾಗೂ ಶರತ್ ಯಾಲದಾಳು ಉಪಸ್ಥಿತರಿದ್ದರು.
















