ಅಸ್ಸಾಂ, NEWS DESK ನ.13: ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 23 ಮಂದಿ ಮೃತಪಟ್ಟಿದ್ದು, 20 ಮಂದಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿಗಳು ಸೇರಿದಂತೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಟೆಂಪೋ ಟ್ರಾವೆಲರ್ ಮತ್ತು ಕಂಟೈನರ್ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.
ಗೋಲಾಘಾಟ್ ಜಿಲ್ಲೆಯ ಕೊಹೊರಾ ವ್ಯಾಪ್ತಿಯ ಹಾಥಿಕುಲಿ ಟೀ ಎಸ್ಟೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿ 715ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೊಕಾಖಾಟ್ನಿಂದ ನಾಗಾಂವ್ ಕಡೆಗೆ ತೆರಳುತ್ತಿದ್ದ ಟೆಂಪೋ ಟ್ರಾವೆಲರ್ಗೆ ಗುವಾಹಟಿ ಕಡೆಯಿಂದ ಬರುತ್ತಿದ್ದ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದಿದೆ.
ಮಿನಿ ಬಸ್ನಲ್ಲಿ ಸುಮಾರು 35ರಿಂದ 40 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಅವರಲ್ಲಿ ಹೆಚ್ಚಿನವರು ಶಾಲಾ-ಕಾಲೇಜು ವಿದ್ಯಾರ್ಥಿಗಳಾಗಿದ್ದರು. ಡಿಕ್ಕಿಯ ರಭಸಕ್ಕೆ ಟೆಂಪೋ ಟ್ರಾವೆಲರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, 23 ಮಂದಿ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತಕ್ಕೆ ಮಿನಿ ಬಸ್ ಅತಿವೇಗದಲ್ಲಿ ಚಲಿಸುತ್ತಿದ್ದುದೇ ಕಾರಣವಾಗಿರಬಹುದು ಎಂದು ಗೋಲಾಘಾಟ್ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸ್ವಪ್ನನೀಲ್ ದೇಕಾ ತಿಳಿಸಿದ್ದಾರೆ. ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ನಿಗದಿಪಡಿಸಿರುವ ವೇಗದ ಮಿತಿಯನ್ನು ಉಲ್ಲಂಘಿಸಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಈ ಭೀಕರ ದುರಂತ ಅಸ್ಸಾಂನಲ್ಲಿ ತೀವ್ರ ಶೋಕಕ್ಕೆ ಕಾರಣವಾಗಿದೆ.















