ಮಡಿಕೇರಿ, NEWS DESK ನ.14: ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಸಹಕಾರ ಇಲಾಖೆ ಹಾಗೂ ಕಾರುಗುಂದ, ಚೇರಂಬಾಣೆ ಮತ್ತು ಬೆಟ್ಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ 73ನೇ ಸಹಕಾರ ಸಪ್ತಾಹದ ಉದ್ಘಾಟನಾ ಕಾರ್ಯಕ್ರಮ ಕಾರುಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.
‘ಸುಸ್ಥಿರ ಅಭಿವೃದ್ಧಿ ಮತ್ತು ಬೆಳವಣಿಗೆಯಲ್ಲಿ ಸಹಕಾರ ಸಂಸ್ಥೆಗಳ ಪಾತ್ರ’ ಎಂಬ ವಿಷಯದಡಿ ನಡೆದ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ಸಹಕಾರಿಗಳಾದ ಬೊಳ್ಳಾರಪಂಡ ಎಂ. ಚಂಗಪ್ಪ, ನಾಪಂಡ ಸಿ. ಗಣೇಶ, ಕುಂಜಿಲನ ಕೆ. ನಾಗೇಶ, ಕುಟ್ಟೇಟಿರ ಜಲೀನ ಉತ್ತಪ್ಪ, ಬೊಳ್ಳಂಡ ಪಿ. ಹರೀಶ್ ಕಾರ್ಯಪ್ಪ, ತಳೂರು ಎಂ. ಸೋಮಣ್ಣ, ನೈಯ್ಯಣಿ ಹೇಮಲತಾ ತಾರೇಂದ್ರ, ಬಾಚರಣೆಯಂಡ ಬಿ. ಗಣಪತಿ, ಬಿ.ಆರ್. ಶ್ರೀನಿವಾಸ ಮೂರ್ತಿ ಹಾಗೂ ಬೈಮನ ಎಂ. ಜಗದೀಶ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಎಲ್ಲರೂ ಕೊಡುಗೆ ನೀಡಬೇಕು
ಸಹಕಾರ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು. ರಾಬಿನ್ ದೇವಯ್ಯ, ವರ್ಷಕ್ಕೊಮ್ಮೆ ಸಹಕಾರ ಸಪ್ತಾಹ ಆಚರಿಸಿದರೆ ಸಾಲದು. ಹಿರಿಯರು ಸಹಕಾರ ಸಪ್ತಾಹಕ್ಕೆ ಹೊಸ ಅರ್ಥ ನೀಡಿದ್ದು, ನಿರಂತರ ಕಾರ್ಯಕ್ರಮಗಳು ನಡೆಯುವಂತೆ ನೋಡಿಕೊಂಡಿದ್ದಾರೆ. ಸಹಕಾರಿ ಕ್ಷೇತ್ರಕ್ಕೆ ಉತ್ತೇಜನ ನೀಡಲು ಹಿರಿಯರು ಅಪಾರ ಶ್ರಮ ವಹಿಸಿದ್ದಾರೆ ಎಂದರು.
ದೇಶದಲ್ಲಿರುವ ಶೇ.80ರಷ್ಟು ರೈತರ ಹಿತ ಕಾಯುವ ಉದ್ದೇಶದಿಂದ ಸಹಕಾರಿ ಸಂಘಗಳು ಉದಯಿಸಿದವು. ರೈತರ ಅಭಿವೃದ್ಧಿ ಹಾಗೂ ಹಿತಾಸಕ್ತಿಯನ್ನು ಕಾಪಾಡುವಲ್ಲಿ ಸಹಕಾರಿ ಕ್ಷೇತ್ರ ಮಹತ್ವದ ಪಾತ್ರ ವಹಿಸುತ್ತಿದೆ. ಆದ್ದರಿಂದ ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಹೆಚ್.ಜೆ. ಸತೀಶ್ ಕುಮಾರ್ ಮಾತನಾಡಿ, 1906ರಲ್ಲಿಯೇ ಭಾಗಮಂಡಲ ಭಾಗದಲ್ಲಿ ಸಹಕಾರ ಸಂಘ ಸ್ಥಾಪನೆಯಾಗಿತ್ತು. ಅಂದಿನ ಹಿರಿಯರು ಸಾಮಾಜಿಕ ಕಳಕಳಿ ಹಾಗೂ ಒಗ್ಗಟ್ಟಿನ ಮನೋಭಾವದಿಂದ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸೇವಾ ಮನೋಭಾವವನ್ನು ಯುವಜನತೆ ಮೈಗೂಡಿಸಿಕೊಂಡು ಸಾಮಾಜಿಕ ಕಳಕಳಿಯಿಂದ ಕಾರ್ಯನಿರ್ವಹಿಸಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾರುಗುಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎನ್. ಎರ್ಯಾಲಿ ಮಾದಯ್ಯ ಮಾತನಾಡಿ, ಹಿರಿಯರು ಕಟ್ಟಿ ಬೆಳೆಸಿದ ಸಹಕಾರಿ ಸಂಘಗಳನ್ನು ನಿಸ್ವಾರ್ಥ ಮನೋಭಾವದಿಂದ ಮತ್ತಷ್ಟು ಅಭಿವೃದ್ಧಿಪಡಿಸಬೇಕು. ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಹಿರಿಯರ ಮಾರ್ಗದರ್ಶನ ಮುಂದೆಯೂ ಅಗತ್ಯವಿದೆ ಎಂದು ತಿಳಿಸಿದರು.
ಹಿಂದಿನ ಕಾಲದಲ್ಲಿ ವಾಹನ ಸೌಲಭ್ಯಗಳಿಲ್ಲದಿದ್ದರೂ ಹಿರಿಯರು ಕಾಲ್ನಡಿಗೆಯಲ್ಲಿಯೇ ಸಂಚರಿಸಿ ಸಹಕಾರಿ ಕ್ಷೇತ್ರವನ್ನು ಬೆಳೆಸಿದ್ದಾರೆ. ಅವರ ಪರಿಶ್ರಮದ ಫಲವಾಗಿ ಕೊಡಗಿನ ಸಹಕಾರಿ ಕ್ಷೇತ್ರ ಇಂದು ಮಾದರಿಯಾಗಿ ಗುರುತಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ದಿನದ ಮಹತ್ವದ ಕುರಿತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕಿ ಹಾಗೂ ಕೆಐಸಿಎಂ ನಿವೃತ್ತ ಪ್ರಾಂಶುಪಾಲೆ ಶ್ಯಾಮಲ ಎಂ.ಎ. ಉಪನ್ಯಾಸ ನೀಡಿದರು. ಇದೇ ಸಂದರ್ಭದಲ್ಲಿ ಹಿರಿಯ ಸಹಕಾರಿ ಹಾಗೂ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿರ್ದೇಶಕ ಹೆಚ್.ಜೆ. ಸತೀಶ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ವಿ.ಕೆ. ಅಜಯ್ ಕುಮಾರ್, ಪಿ.ಎನ್. ಚಂದ್ರಪ್ರಕಾಶ್, ಎಸ್.ಆರ್. ಸುನಿಲ್ ರಾವ್, ಎಂ.ಟಿ. ಸುಬ್ಬಯ್ಯ, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕ ಕೆ.ಎನ್. ಸತೀಶ್, ಬೆಟ್ಟಗೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಟಿ.ಎ. ಕಿಶೋರ್ ಕುಮಾರ್, ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಿ.ಪಿ. ಸುಮನ್, ಸಹಕಾರ ಸಂಘಗಳ ಉಪನಿಬಂಧಕಿ ಶೈಲಜ, ಕಾರುಗುಂದ ಸಹಕಾರ ಸಂಘದ ಉಪಾಧ್ಯಕ್ಷ ಕೆ.ಸಿ. ತಿಮ್ಮಯ್ಯ ಸೇರಿದಂತೆ ಸಹಕಾರ ಕ್ಷೇತ್ರದ ಪ್ರತಿನಿಧಿಗಳು, ವಿವಿಧ ಸಹಕಾರ ಸಂಘಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
















