ಕುಂದಾ, NEWS DESK ನ.15: ಇತಿಹಾಸ ಪ್ರಸಿದ್ಧ ಬೊಟ್ಟಿಯತ್ ಮೂಂದ್ ನಾಡಿನ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಕಾರ್ಯಕ್ರಮವನ್ನು ಇದೇ ನವೆಂಬರ್ 28ರಂದು ಶನಿವಾರ ನಡೆಸಲು ನಿರ್ಧರಿಸಲಾಗಿದೆ.
ಕುಂದಾ ಸಮೀಪದ ಕೈಮುಡಿಕೆ ಪುತ್ತರಿ ಕೋಲ್ ಮಂದ್ನಲ್ಲಿ ಭಾನುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡಿನ ತಕ್ಕ ಮುಖ್ಯಸ್ಥರು ಮತ್ತು ಪ್ರಮುಖರ ಸಭೆಯಲ್ಲಿ ಮೂರು ನಾಡಿನ ತಕ್ಕ ಮುಖ್ಯಸ್ಥರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮದ ಸಿದ್ಧತೆಗಳ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಮೂರು ನಾಡಿನ ನಾಡ್ ತಕ್ಕರು, ಊರು ತಕ್ಕರು ಸೇರಿದಂತೆ ವಿವಿಧ ತಕ್ಕ ಮುಖ್ಯಸ್ಥರು ಹಾಗೂ ಪ್ರಮುಖರು ಭಾಗವಹಿಸಿದ್ದರು.
ಸಭೆಯಲ್ಲಿ ಕೋಲ್ ಮಂದ್ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲು ಹಾಗೂ ಸಾರ್ವಜನಿಕರಿಗಾಗಿ ವಿವಿಧ ಪೈಪೋಟಿಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಸ್ಪರ್ಧೆಗಳಲ್ಲಿ ಭಾಗವಹಿಸುವವರು ಸ್ಥಳದಲ್ಲಿಯೇ ತಮ್ಮ ಹೆಸರುಗಳನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನೂ ಮಾಡಲು ನಿರ್ಧರಿಸಲಾಯಿತು.
ಕೈಮುಡಿಕೆ ಪುತ್ತರಿ ಕೋಲ್ ಮಂದ್ ಕಾರ್ಯದರ್ಶಿ ನಾಳಿಯಮಂಡ ಉಮೇಶ್ ಕೇಚಮಯ್ಯ ಸ್ವಾಗತಿಸಿ, ವಂದಿಸಿದರು.
















