ಸೋಮವಾರಪೇಟೆ, NEWS DESK ನ.16: ತಾಲೂಕಿನ ಬೇಳೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಪ್ರಜಾಸೇವಾ ಅಭಿಯಾನದಲ್ಲಿ ಸಾರ್ವಜನಿಕರಿಂದ 30ಕ್ಕೂ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು, ವಿವಿಧ ಇಲಾಖೆಗಳ ವಿರುದ್ಧ ಸಾರ್ವಜನಿಕರು ಹಲವು ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು.
ಕಂದಾಯ, ಆಹಾರ, ಅರಣ್ಯ, ಲೋಕೋಪಯೋಗಿ, ಜಿಲ್ಲಾ ಪಂಚಾಯಿತಿ, ಸಣ್ಣ ನೀರಾವರಿ, ಶಿಕ್ಷಣ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸೇರಿದಂತೆ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಅಹವಾಲು ಸಲ್ಲಿಸಿದರು.
ಕಾಡಾನೆ ದಾಳಿಯಿಂದ ಉಂಟಾದ ಬೆಳೆ ಹಾನಿಗೆ ಪರಿಹಾರ ದೊರೆಯದಿರುವುದು, ಶಾಂತಳ್ಳಿ ಹೋಬಳಿಯಲ್ಲಿ ಕಂದಾಯ ಇಲಾಖೆಯ ದುರಸ್ತಿ ಕಾರ್ಯಗಳು ನಡೆಯದಿರುವುದು ಹಾಗೂ ರಸ್ತೆ ಬದಿಯ ಕಾಡುಗಳನ್ನು ತೆರವುಗೊಳಿಸದ ಕಾರಣ ಅಪಘಾತಗಳು ಹೆಚ್ಚುತ್ತಿರುವ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆ ಗುಂಡಿ ಮುಚ್ಚಲು 7 ಕೋಟಿ ರೂ. ಬಿಡುಗಡೆಯಾಗಿದ್ದರೂ ಯಾವ ರಸ್ತೆಗಳ ದುರಸ್ತಿ ಮಾಡಲಾಗಿದೆ ಮತ್ತು ಹಣ ಎಲ್ಲಿ ಬಳಕೆಯಾಗಿದೆ ಎಂದು ಗ್ರಾಮಸ್ಥರೊಬ್ಬರು ಪ್ರಶ್ನಿಸಿದರು.
ಕೆಂಚಮ್ಮನ ಬಾಣೆಯಲ್ಲಿ ಮನೆ ನಿರ್ಮಾಣಕ್ಕಾಗಿ ಬೇಳೂರು ಗ್ರಾಮ ಪಂಚಾಯಿತಿ ಸದಸ್ಯರೊಬ್ಬರು ಫಲಾನುಭವಿಯಿಂದ 12 ಸಾವಿರ ರೂ. ಲಂಚ ಪಡೆದಿದ್ದರೂ ಮನೆ ನಿರ್ಮಾಣ ಕಾರ್ಯ ಆರಂಭವಾಗಿಲ್ಲ ಎಂದು ಶಾಸಕರಿಗೆ ದೂರು ಸಲ್ಲಿಸಲಾಯಿತು. ಪಡಿತರ ಚೀಟಿ ಸಮಸ್ಯೆ, ಬಿಪಿಎಲ್ ಕಾರ್ಡ್ ಅರ್ಹತೆ ಇದ್ದರೂ ಕಚೇರಿಯಲ್ಲಿ ಸರಿಯಾಗಿ ಸ್ಪಂದಿಸದಿರುವುದು ಹಾಗೂ ಆರೋಗ್ಯ ಸಂಬಂಧಿತ ಸಮಸ್ಯೆಗಳ ಕುರಿತು ಮಹಿಳೆಯೊಬ್ಬರು ಅಹವಾಲು ಸಲ್ಲಿಸಿದರು.
ಇನ್ನು ಅರಣ್ಯ ಇಲಾಖೆಯವರು ಕಾಡಾನೆಗಳನ್ನು ಖಾಸಗಿ ತೋಟಗಳತ್ತ ಓಡಿಸುತ್ತಿರುವುದರಿಂದ ಫಸಲಿಗೆ ಬಂದ ಕಾಫಿ ಗಿಡಗಳು ನಷ್ಟವಾಗುತ್ತಿವೆ ಎಂದು ಐಗೂರು ಗ್ರಾಮದ ಕಾಫಿ ಬೆಳೆಗಾರರು ದೂರಿದರು. ಮೂವತೊಕ್ಲು ಗ್ರಾಮದಲ್ಲಿ 20 ಮನೆಗಳಿಗೆ ಹಕ್ಕುಪತ್ರ ವಿತರಿಸಲಾಗಿದ್ದು, ಉಳಿದ ಐದು ಮನೆಗಳಿಗೆ ಇನ್ನೂ ಹಕ್ಕುಪತ್ರ ನೀಡಿಲ್ಲ ಎಂಬ ಸಮಸ್ಯೆಯನ್ನೂ ಗ್ರಾಮಸ್ಥರು ಪ್ರಸ್ತಾಪಿಸಿದರು.
ಬಿಪಿಎಲ್ ಕಾರ್ಡ್ ರದ್ದತಿ, ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮೆಯಾಗದಿರುವುದು, ವಿದ್ಯುತ್ ಹಾಗೂ ಪಿಂಚಣಿ ಸೌಲಭ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಶಾಸಕ ಡಾ. ಮಂತರ್ ಗೌಡ ಅವರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ಮಾತನಾಡಿದ ಶಾಸಕ ಡಾ. ಮಂತರ್ ಗೌಡ, ಜನಪ್ರತಿನಿಧಿಗಳ ಜೊತೆಗೆ ಅಧಿಕಾರಿಗಳು ಶ್ರದ್ಧೆಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಮನವಿಗಳಿಗೆ ಸಕಾಲದಲ್ಲಿ ಸ್ಪಂದಿಸಬೇಕು. ಜನರಿಗೆ ಅಗತ್ಯವಿರುವುದು ಮೂಲಭೂತ ಸೌಲಭ್ಯಗಳು. ಅವುಗಳನ್ನು ಸಮರ್ಪಕವಾಗಿ ಒದಗಿಸದಿದ್ದರೆ ಸರ್ಕಾರದ ಹೊಸ ಯೋಜನೆಗಳು ಜನರಿಗೆ ತಲುಪುವುದು ಹೇಗೆ ಎಂದು ಪ್ರಶ್ನಿಸಿದರು.
ಸರ್ಕಾರದ ಯಾವುದೇ ಯೋಜನೆಗಳ ಫಲಾನುಭವಿಗಳಿಂದ ಲಂಚ ಪಡೆಯುತ್ತಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ಮಂಡಳಿ ನಿರ್ದೇಶಕ ಕೆ.ಎಂ. ಲೋಕೇಶ್, ಅಕ್ರಮ ಸಕ್ರಮ ಸಮಿತಿ ಸದಸ್ಯ ಬಿ.ಬಿ. ಸತೀಶ್, ತಹಶೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
















