ಸಿದ್ದಾಪುರ, NEWS DESK ನ.17: ಮಹಾತ್ಮ ಗಾಂಧಿ ಗ್ರಾಮ ಪಂಚಾಯಿತಿ ಕಾರ್ಯಾಲಯ, ಸಿದ್ದಾಪುರ ಹಾಗೂ ಸ್ವಚ್ಛ ಸಿದ್ದಾಪುರ ಸಮಿತಿಯ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭಾಗವಹಿಸಿ, ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು, ‘ಶುದ್ಧ ಕೊಡಗು – ಹಸಿರು ಕೊಡಗು’ ಎಂಬ ಪರಿಕಲ್ಪನೆ ಪ್ರತಿಯೊಬ್ಬರ ಮನದಲ್ಲೂ ಸದಾ ಇರಬೇಕು. ಪ್ರತಿಯೊಬ್ಬ ನಾಗರಿಕರೂ ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಿ, ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಕೈಜೋಡಿಸಿದಾಗ ಕೊಡಗನ್ನು ಸುಂದರ ಹಾಗೂ ಸ್ವಚ್ಛ ನಾಡನ್ನಾಗಿ ರೂಪಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಬಾಲ್ಯದಿಂದಲೇ ಮಕ್ಕಳಲ್ಲಿ ಸ್ವಚ್ಛತೆಯ ಅರಿವು ಮೂಡಿಸುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಪೋಷಕರು ಹಾಗೂ ಹಿರಿಯರು ಮಕ್ಕಳಿಗೆ ಸ್ವಚ್ಛತೆಯ ಮಹತ್ವವನ್ನು ತಿಳಿಸಿಕೊಡುವ ಮೂಲಕ ಉತ್ತಮ ಪರಿಸರ ಪ್ರಜ್ಞೆಯನ್ನು ಬೆಳೆಸಬೇಕು ಎಂದು ಅವರು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಉದ್ಯಮಿ ಇಮ್ಯಾನುಯೆಲ್ ಥಾಮಸ್ ರಾಮಪುರಂ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ವಿ. ಜಾನ್ಸನ್, ವಲಯ ಅಧ್ಯಕ್ಷ ಪ್ರತೀಶ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.
















