ಮಡಿಕೇರಿ, NEWS DESK ನ.17: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎ.ಎಸ್. ಪೊನ್ನಣ್ಣ ಅವರು ಮಂಗಳವಾರ ಚಾಲನೆ ನೀಡಿದರು.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ ಸಿದ್ದಾಪುರ ಸಮೀಪದ ಬೀಟೆಕಾಡು ಬಳಿ ಸುಮಾರು ₹24.52 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ 66/11 ಕೆ.ವಿ ವಿದ್ಯುತ್ ವಿತರಣಾ ಉಪಕೇಂದ್ರಕ್ಕೆ ಶಾಸಕರು ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೂತನ ವಿದ್ಯುತ್ ಉಪಕೇಂದ್ರದಿಂದ ಸಿದ್ದಾಪುರ, ಕೂಡುಗದ್ದೆ, ಗುಹ್ಯ, ಪಾಲಕ್ಕೆರೆ, ಪುಲಿಗೇರಿ, ಇಂಜಿಲಗೇರಿ, ಕರಡಿಗೋಡು, ಮಾಲ್ದಾರೆ, ಚೆನ್ನಯ್ಯನಕೋಟೆ, ಪಾಲಿಬೆಟ್ಟ, ನೆಲ್ಯಹುದಿಕೇರಿ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮಗಳಿಗೆ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದರು.
ಹೊಸ ಉಪಕೇಂದ್ರದ ಮೂಲಕ 12 ಹೊಸ 11 ಕೆ.ವಿ ವಿದ್ಯುತ್ ಮಾರ್ಗಗಳನ್ನು ನಿರ್ಮಿಸಲಾಗುತ್ತಿದ್ದು, ಇದರಿಂದ ಹಾಲಿ ಇರುವ ವಿರಾಜಪೇಟೆ ವಿದ್ಯುತ್ ಉಪಕೇಂದ್ರದ ಮೇಲಿನ ಹೊರೆ ಕಡಿಮೆಯಾಗಲಿದೆ. ವಿದ್ಯುತ್ ಅಡಚಣೆಗಳನ್ನು ನಿಯಂತ್ರಿಸುವುದರ ಜೊತೆಗೆ ವೋಲ್ಟೇಜ್ ಸುಧಾರಣೆ ಹಾಗೂ ಭವಿಷ್ಯದ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.
ವಿರಾಜಪೇಟೆ ಕ್ಷೇತ್ರದ ಬಾಳೆಲೆ, ಭಾಗಮಂಡಲ, ಹುದಿಕೇರಿ, ಕಾಟಕೇರಿ, ಕಳತ್ಮಾಡು ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಉಪಕೇಂದ್ರಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. ಒಟ್ಟಾರೆ ಕ್ಷೇತ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ ಸುಮಾರು ₹349 ಕೋಟಿ ವೆಚ್ಚದ ವಿದ್ಯುತ್ ಕಾಮಗಾರಿಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.
ಸಿದ್ದಾಪುರ–ಪಾಲಿಬೆಟ್ಟ ರಸ್ತೆ ಅಭಿವೃದ್ಧಿಗೆ ₹2.25 ಕೋಟಿ ಅನುದಾನ
ಇದೇ ಸಂದರ್ಭದಲ್ಲಿ ಸಿದ್ದಾಪುರ–ಪಾಲಿಬೆಟ್ಟ ಸಂಪರ್ಕ ರಸ್ತೆಯ ಸುಮಾರು 2.30 ಕಿ.ಮೀ ಉದ್ದದ ಅಭಿವೃದ್ಧಿ ಕಾಮಗಾರಿಗೆ ಶಾಸಕರು ಭೂಮಿಪೂಜೆ ನೆರವೇರಿಸಿದರು. ಅಂದಾಜು ₹225 ಲಕ್ಷ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಕೊಡಗು ಜಿಲ್ಲೆಯಲ್ಲಿ ರಸ್ತೆ, ವಿದ್ಯುತ್, ಆಸ್ಪತ್ರೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಅಗತ್ಯ ಅನುದಾನ ಬಿಡುಗಡೆಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದು ಶಾಸಕರು ತಿಳಿಸಿದರು.
ಇದರೊಂದಿಗೆ ಸಿದ್ದಾಪುರದಲ್ಲಿ ನೂತನ ಆಟೋ ನಿಲ್ದಾಣ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಿದರು. ಅವರೆಗುಂದದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿದರು. ಇದಕ್ಕೂ ಮೊದಲು ಸಿದ್ದಾಪುರದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕಾವೇರಿ ಜಲಾನಯನ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಕಾಡಾ) ನಿರ್ದೇಶಕ ಸೂರಜ್ ಹೊಸೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ವಿರಾಜಪೇಟೆ ತಾಲೂಕು ಅಧ್ಯಕ್ಷ ಜಾನ್ಸನ್, ಪ್ರಮುಖರಾದ ರಂಜಿ ಪೂಣಚ್ಚ ಸೇರಿದಂತೆ ಇತರರು ಉಪಸ್ಥಿತರಿದ್ದರು.
















