ಮಡಿಕೇರಿ, NEWS DESK ನ.18: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಉದ್ದೇಶದಿಂದ ಕೊಡಗು ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಪ್ರಯುಕ್ತ ಸ್ಪರ್ಧಾ ಕಾರ್ಯಕ್ರಮವನ್ನು ನವೆಂಬರ್ 21ರಂದು ಬೆಳಗ್ಗೆ 10 ಗಂಟೆಗೆ ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ.
ಮಕ್ಕಳಲ್ಲಿ ಆತ್ಮಸ್ಥೈರ್ಯ, ಭರವಸೆ, ವಿಚಾರವಂತಿಕೆ ಹಾಗೂ ಕಲಾಪ್ರತಿಭೆಯನ್ನು ಬೆಳೆಸುವ ನಿಟ್ಟಿನಲ್ಲಿ 9ರಿಂದ 16 ವರ್ಷದೊಳಗಿನ ಮಕ್ಕಳಿಗೆ ನಾಲ್ಕು ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಸೃಜನಾತ್ಮಕ ಕಲೆ: ಚಿತ್ರಕಲೆ, ಕರಕುಶಲ ಕಲೆ ಹಾಗೂ ಜೇಡಿಮಣ್ಣಿನ ಕಲೆಯಲ್ಲಿ ಸ್ಪರ್ಧೆ ನಡೆಯಲಿದ್ದು, ಈ ಮೂರೂ ಚಟುವಟಿಕೆಗಳಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ.
ಸೃಜನಾತ್ಮಕ ಬರವಣಿಗೆ: ಕಥೆ, ಕವನ ಹಾಗೂ ಪ್ರಬಂಧ ಬರವಣಿಗೆ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಮೂರೂ ವಿಭಾಗಗಳಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ.
ಸೃಜನಾತ್ಮಕ ಪ್ರದರ್ಶನ ಕಲೆ: ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಹಾಗೂ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ, ಯೋಗನೃತ್ಯ, ಏಕಪಾತ್ರಾಭಿನಯ ಮತ್ತು ವಾದ್ಯ ಸಂಗೀತ ವಿಭಾಗಗಳಲ್ಲಿ ಯಾವುದಾದರೊಂದು ಕಲೆಯಲ್ಲಿ ಭಾಗವಹಿಸಬಹುದು.
ವಿಜ್ಞಾನದಲ್ಲಿ ನೂತನ ಆವಿಷ್ಕಾರ: ವಿಜ್ಞಾನದ ಒಂದು ವಿಷಯದ ಕುರಿತು ಮಾದರಿ ತಯಾರಿಸಿ ಪ್ರದರ್ಶನ ಹಾಗೂ ವಿವರಣೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಗುವುದು. ಅಲ್ಲದೆ, ವಿಜೇತ ಮಕ್ಕಳನ್ನು ರಾಜ್ಯಮಟ್ಟದಲ್ಲಿ ನಡೆಯುವ ಕಲಾಶ್ರೀ ಸ್ಪರ್ಧಾ ಕಾರ್ಯಕ್ರಮಕ್ಕೆ ಕರೆದೊಯ್ಯಲಾಗುವುದು.
ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿಯಿರುವ ಮಕ್ಕಳು ನವೆಂಬರ್ 20ರೊಳಗೆ ಬೆಳಗ್ಗೆ 10.30ರಿಂದ ಸಂಜೆ 5 ಗಂಟೆಯವರೆಗೆ 6363285685 ಅಥವಾ 8618861505 ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ ಹೆಸರು ನೋಂದಾಯಿಸಿಕೊಳ್ಳಬೇಕು. ಹೆಸರು ನೋಂದಾಯಿಸಿಕೊಂಡ ಮಕ್ಕಳಿಗೆ ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಲು ಆದ್ಯತೆ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಪ್ರಸನ್ನ ಕುಮಾರ್ ತಿಳಿಸಿದ್ದಾರೆ.















