ಸುಂಟಿಕೊಪ್ಪ, NEWS DESK ನ.19: ಮಾದಕ ವಸ್ತುಗಳ ದುಷ್ಪರಿಣಾಮಗಳಿಂದ ದೂರವಿದ್ದು, ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಸುತ್ತಮುತ್ತಲಿನಲ್ಲಿ ಯಾವುದೇ ಅನ್ಯ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡಬೇಕು ಎಂದು ಕುಶಾಲನಗರ ವೃತ್ತದ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕೊಡಗರಹಳ್ಳಿಯ ಶಾಂತಿನಿಕೇತನ ವಿದ್ಯಾಸಂಸ್ಥೆಯಲ್ಲಿ ಸುಂಟಿಕೊಪ್ಪ ಪೊಲೀಸ್ ಠಾಣೆ ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತ ‘ಬೇಡ ಬ್ರೋ’ ಅಭಿಯಾನ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಾದಕ ವಸ್ತುಗಳ ವ್ಯಸನವು ವಿದ್ಯಾರ್ಥಿಗಳ ಆರೋಗ್ಯ, ವಿದ್ಯಾಭ್ಯಾಸ ಮತ್ತು ಭವಿಷ್ಯವನ್ನು ಸಂಪೂರ್ಣವಾಗಿ ಹಾಳುಮಾಡುವುದಲ್ಲದೆ, ಕುಟುಂಬ ಹಾಗೂ ಸಮಾಜದ ಶಾಂತಿಯನ್ನು ಕದಡುತ್ತದೆ. ಯಾರಾದರೂ ಮಾದಕ ವಸ್ತುಗಳ ಸೇವನೆಗೆ ಪ್ರೇರೇಪಿಸಿದಲ್ಲಿ ಧೈರ್ಯವಾಗಿ ‘ಬೇಡ ಬ್ರೋ’ ಎಂದು ನಿರಾಕರಿಸಬೇಕು. ಈ ಕುರಿತು ಪೋಷಕರು ಅಥವಾ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಕುರಿತು ಪ್ರಾತ್ಯಕ್ಷಿಕೆ ಹಾಗೂ ವಿಡಿಯೋಗಳ ಮೂಲಕ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಐಎಸ್‌ಐ ಗುಣಮಟ್ಟದ ಹೆಲ್ಮೆಟ್ ಧರಿಸಬೇಕು. ಕಾರಿನಲ್ಲಿ ಪ್ರಯಾಣಿಸುವಾಗ ಸೀಟ್ ಬೆಲ್ಟ್ ಬಳಸುವುದರಿಂದ ಅಪಘಾತದ ಸಂದರ್ಭದಲ್ಲಿ ಪ್ರಾಣಾಪಾಯದ ತೀವ್ರತೆಯನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದರು.
18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ವಾಹನ ಚಲಾಯಿಸುವುದು ಕಾನೂನುಬಾಹಿರವಾಗಿದ್ದು, ಅಪ್ರಾಪ್ತರು ವಾಹನ ಚಲಾಯಿಸಿ ಸಿಕ್ಕಿಬಿದ್ದಲ್ಲಿ ಪೋಷಕರು ಭಾರಿ ದಂಡದೊಂದಿಗೆ ಕಾನೂನು ಕ್ರಮ ಹಾಗೂ ಜೈಲು ಶಿಕ್ಷೆಗೂ ಒಳಗಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಕವಿತಾ, ಶಿಕ್ಷಕರು, ಬೋಧಕ ವರ್ಗದವರು, ಸುಂಟಿಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
















