ಮಡಿಕೇರಿ, NEWS DESK ನ.19: ದೇಶದ ಏಕತೆ, ಸಮಗ್ರತೆ ಮತ್ತು ಸೌಹಾರ್ದತೆಯನ್ನು ಬಲಪಡಿಸುವ ಉದ್ದೇಶದಿಂದ ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ನವೆಂಬರ್ 19ರಿಂದ 25ರವರೆಗೆ ರಾಜ್ಯಾದ್ಯಂತ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಸಪ್ತಾಹದ ಮೊದಲ ದಿನವಾದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ ರಾಯಕೋಡ ಅವರು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ರಾಷ್ಟ್ರೀಯ ಐಕ್ಯತಾ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸುವುದಾಗಿ ಪ್ರತಿಜ್ಞೆ ಮಾಡಲಾಯಿತು. ಅಲ್ಲದೆ, ಯಾವುದೇ ರೀತಿಯ ಹಿಂಸಾಚಾರದಲ್ಲಿ ತೊಡಗದೆ, ಧರ್ಮ, ಭಾಷೆ, ಪ್ರದೇಶ ಹಾಗೂ ರಾಜಕೀಯ ಅಥವಾ ಆರ್ಥಿಕ ಭಿನ್ನಾಭಿಪ್ರಾಯಗಳಿಂದ ಉಂಟಾಗುವ ವಿವಾದಗಳನ್ನು ಶಾಂತಿಯುತವಾಗಿ ಮತ್ತು ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಲು ಪ್ರಯತ್ನಿಸುವುದಾಗಿ ಪ್ರಮಾಣ ಸ್ವೀಕರಿಸಲಾಯಿತು.
ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ನ.20ರಂದು ಅಲ್ಪಸಂಖ್ಯಾತರ ಕಲ್ಯಾಣ ದಿನ, ನ.21ರಂದು ಭಾಷಾ ಸೌಹಾರ್ದತಾ ದಿನ, ನ.22ರಂದು ದುರ್ಬಲ ವರ್ಗಗಳ ದಿನ, ನ.23ರಂದು ಸಾಂಸ್ಕೃತಿಕ ಏಕತಾ ದಿನ, ನ.24ರಂದು ಮಹಿಳಾ ದಿನ ಹಾಗೂ ನ.25ರಂದು ಪರಿಸರ ರಕ್ಷಣಾ ದಿನವನ್ನು ಆಚರಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಸೂರಜ್, ಜಿಲ್ಲಾ ಖಜಾನಾಧಿಕಾರಿ ರಘುನಾಥ್, ಸಾಮಾಜಿಕ ಭದ್ರತಾ ಯೋಜನೆಯ ಸಹಾಯಕ ನಿರ್ದೇಶಕಿ ಮಮತ, ಶಿರಸ್ತೇದಾರರಾದ ಮಹೇಶ್, ಮಧುಕರ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
















