ವಿರಾಜಪೇಟೆ, NEWS DESK ನ.19: ವಿರಾಜಪೇಟೆ ನಗರದಿಂದ ಮಡಿಕೇರಿಗೆ ಸಂಪರ್ಕ ಕಲ್ಪಿಸುವ ರಸ್ತೆಯ ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ಸುಮಾರು 2.5 ಕಿ.ಮೀ. ರಸ್ತೆಯನ್ನು ತಕ್ಷಣ ಮರು ಡಾಂಬರೀಕರಣಗೊಳಿಸುವಂತೆ ಆಗ್ರಹಿಸಿ ಚಿಕ್ಕಪೇಟೆ ಹಾಗೂ ಬೋಯಿಕೇರಿ ಗ್ರಾಮದ ಸಾರ್ವಜನಿಕರು ಮತ್ತು ಆಟೋ ಚಾಲಕರು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರಿಗೆ ಮನವಿ ಸಲ್ಲಿಸಿದರು.
ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೇಟಿರ ಬೋಪಣ್ಣ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಚಿಕ್ಕಪೇಟೆ ಮಾರ್ಗವಾಗಿ ಬೋಯಿಕೇರಿ, ಕೆದಮುಳ್ಳೂರು, ತೋರ, ಕ್ರಿಶ್ಚಿಯನ್ ಕಾಲೋನಿ, ಪಾಲಂಗಾಲ ಸೇರಿದಂತೆ ವಿವಿಧ ಪ್ರದೇಶಗಳಿಗೆ ಈ ರಸ್ತೆ ಸಂಪರ್ಕ ಕಲ್ಪಿಸುತ್ತದೆ. ಪ್ರತಿದಿನ ನೂರಾರು ವಾಹನಗಳು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಗರಕ್ಕೆ ತೆರಳಲು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ.
ಸುಮಾರು 17 ವರ್ಷಗಳ ಹಿಂದೆ ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಡಾಂಬರೀಕರಣ ಮಾಡಲಾಗಿದ್ದು, ಅಂದಿನಿಂದ ಇಲ್ಲಿಯವರೆಗೆ ಮರು ಡಾಂಬರೀಕರಣ ಕಾಮಗಾರಿ ನಡೆದಿಲ್ಲ. ಇದರೊಂದಿಗೆ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಅಳವಡಿಸಲು ರಸ್ತೆ ಅಗೆದಿರುವುದರಿಂದ ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ.
ರಸ್ತೆಯ ದುಸ್ಥಿತಿಯಿಂದ ವಾಹನಗಳನ್ನು ಚಲಾಯಿಸಲು ಸಾಕಷ್ಟು ಸಮಸ್ಯೆಯಾಗುತ್ತಿದೆ ಎಂದು ಆಟೋ ಚಾಲಕರು ಶಾಸಕರ ಗಮನಕ್ಕೆ ತಂದು, ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ರಸ್ತೆ ಮರು ಡಾಂಬರೀಕರಣ ಕಾಮಗಾರಿ ಕೈಗೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿರಾಜಪೇಟೆ ಕೊಡವ ಸಮಾಜದ ಅಧ್ಯಕ್ಷ ಅಮ್ಮುಣಿಚಂಡ ರವಿ ಸೇರಿದಂತೆ ಸ್ಥಳೀಯ ನಿವಾಸಿಗಳು, ಸಾರ್ವಜನಿಕರು ಹಾಗೂ ಆಟೋ ಚಾಲಕರು ಉಪಸ್ಥಿತರಿದ್ದರು.
















