ಮಡಿಕೇರಿ NEWS DESK ನ.20 : ರಾಜ್ಯ ನಿಗಮ ಮಂಡಳಿಯಲ್ಲಿ ಸ್ಥಾನಮಾನ ನೀಡದಿರುವುದು ಸೇರಿದಂತೆ ಪಕ್ಷದಲ್ಲಿ ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ಸೂಕ್ತ ರಾಜಕೀಯ ಅವಕಾಶಗಳನ್ನು ಕಲ್ಪಿಸುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿರುವ ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್, ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಮಡಿಕೇರಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಯಲ್ಲಿ ನನ್ನನ್ನು ಕೇವಲ ಸದಸ್ಯನನ್ನಾಗಿ ಆಯ್ಕೆ ಮಾಡುವ ಮೂಲಕ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಲಾಗಿದೆ. ಈ ಹುದ್ದೆಯನ್ನು ನಾನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು. ಕಾoಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಮತ ಹಾಕುವ ಜವಾಬ್ದಾರಿ ಮಾತ್ರ ನೀಡಲಾಗುತ್ತಿದೆಯೇ ಹೊರತು, ಅಧಿಕಾರ ಮತ್ತು ಸ್ಥಾನಮಾನ ನೀಡುತ್ತಿಲ್ಲ. ಕಳೆದ ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ಜಾತ್ಯಾತೀತ ನೆಲೆಗಟ್ಟಿನಲ್ಲಿ ಶ್ರಮಿಸಿದ್ದೇನೆ. ಆದರೂ ನನಗೆ ಸೂಕ್ತ ಸ್ಥಾನಮಾನ ನೀಡಿಲ್ಲ, ಈ ಬಗ್ಗೆ ಬಿಜೆಪಿ ಮಂದಿಯೇ ಅನುಕಂಪ ವ್ಯಕ್ತಪಡಿಸುತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ನ್ಯಾಯಯುತ ಅವಕಾಶಗಳು ದೊರೆಯುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಅತ್ಯಧಿಕ ಮತಗಳನ್ನು ನೀಡಿ ಇಬ್ಬರು ಶಾಸಕರು ಆಯ್ಕೆಯಾಗುವಂತೆ ನೋಡಿಕೊಂಡ ಅಲ್ಪಸಂಖ್ಯಾತರಿಗೆ ಅನ್ಯಾಯವಾಗಿದೆ. ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಹಂಚಿಕೆಯಲ್ಲೂ ಅಲ್ಪಸಂಖ್ಯಾತರಿಗೆ ಸೂಕ್ತ ಪ್ರಾತಿನಿಧ್ಯ ದೊರೆತಿಲ್ಲ. ಜಿ.ಪಂ ಅಧ್ಯಕ್ಷ ಸ್ಥಾನವನ್ನು ಅಲ್ಪಸಂಖ್ಯಾತರಿಗೆ ನೀಡಬೇಕಾಗಬಹುದು ಎಂಬ ಆತಂಕದಿAದಲೇ ನನ್ನನ್ನು ಸೇರಿದಂತೆ ನಮ್ಮ ಸಮುದಾಯದ ನಾಯಕರಿಗೆ ಅವಕಾಶಗಳನ್ನು ನಿರಾಕರಿಸಲಾಗುತ್ತಿದೆ. ಜಿಲ್ಲೆಯ ಇಬ್ಬರು ಶಾಸಕರು ಹಾಗೂ ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಂದ ನನಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು. “ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವುದಕ್ಕೆ ಮಾತ್ರ ಸೀಮಿತವಾಗಬೇಕೇ? ನಮಗೂ ರಾಜಕೀಯ ಸ್ಥಾನಮಾನ ಹಾಗೂ ಗೌರವಯುತ ಅವಕಾಶಗಳು ಬೇಡವೇ ಎಂದು ಪ್ರಶ್ನಿಸಿರುವ ಕೆ.ಎ.ಯಾಕುಬ್ ಇನ್ನು ಮುಂದೆ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುವುದಿಲ್ಲ. ಕಾಂಗ್ರೆಸ್ ಗೆ ಮತ ಹಾಕಿ ಮನೆಯಲ್ಲೇ ಸುಮ್ಮನಿರುತ್ತೇನೆ ಮತ್ತು ಕಾಂಗ್ರೆಸ್ ಸಿದ್ಧಾಂತಕ್ಕೆ ಬದ್ಧನಾಗಿರುತ್ತೇನೆ ಎಂದು ಸ್ಪಷ್ಟಪಡಿಸಿದರು.
















