ಮಡಿಕೇರಿ, NEWS DESK ನ. 20: ಕೊಡಗು ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿರುವ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಕಂಡುಬರುವುದು ಅಪರೂಪ. ಇಲ್ಲಿನ ಸಹಕಾರ ಸಂಘಗಳು ರಾಜ್ಯಕ್ಕೆ ಮಾದರಿಯಾಗಿವೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಶ್ಲಾಘಿಸಿದರು.
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಕೊಡಗು ಜಿಲ್ಲಾ ಸಹಕಾರ ಯೂನಿಯನ್, ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಸಹಕಾರ ಇಲಾಖೆ ಹಾಗೂ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಡಿಸಿಸಿ ಬ್ಯಾಂಕ್‌ನ ಉನ್ನತಿ ಸಭಾಂಗಣದ ಪಂದ್ಯಂಡ ಬೆಳ್ಯಪ್ಪ ವೇದಿಕೆಯಲ್ಲಿ ಆಯೋಜಿಸಲಾಗಿದ್ದ 73ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಸಹಕಾರ ಸಂಘಗಳ ರಚನೆಯು ಮೂಲಭೂತ ಹಕ್ಕು ಎಂಬುದನ್ನು ಸಂವಿಧಾನ ತಿದ್ದುಪಡಿಯ ಮೂಲಕವೇ ಸ್ಪಷ್ಟಪಡಿಸಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನೆರವಾಗಬೇಕು ಎಂಬುದೇ ಸಹಕಾರ ತತ್ವದ ಮೂಲ ಆಶಯವಾಗಿದೆ. ರಾಜ್ಯದಲ್ಲಿಯೂ ಸಹಕಾರ ಸಂಘಗಳ ಕಾಯ್ದೆ ಜಾರಿಯಲ್ಲಿದ್ದು, ಸರ್ಕಾರದ ಸೀಮಿತ ಹಸ್ತಕ್ಷೇಪಕ್ಕೆ ಮಾತ್ರ ಅವಕಾಶವಿದೆ. ಸಹಕಾರ ಸಂಘಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಇದಕ್ಕೆ ಸರ್ಕಾರಗಳು ಕೂಡ ಅವಕಾಶ ಮಾಡಿಕೊಡಬೇಕು ಎಂದು ಅವರು ಅಭಿಪ್ರಾಯಪಟ್ಟರು.
ರಾಜ್ಯ ಸರ್ಕಾರದ ಅಸಿಸ್ಟೆಂಟ್ ಅಡ್ವಕೇಟ್ ಜನರಲ್ ಆಗಿದ್ದ ಅವಧಿಯಲ್ಲಿ ಸಹಕಾರ ಸಂಸ್ಥೆಗಳ ಪರವಾಗಿ ವಾದ ಮಂಡಿಸಿದ ಅನುಭವವನ್ನು ಹಂಚಿಕೊಂಡ ಶಾಸಕ ಪೊನ್ನಣ್ಣ, ಸಹಕಾರ ಸಂಸ್ಥೆಗಳಲ್ಲಿನ ಅವ್ಯವಹಾರಗಳ ತನಿಖೆಯನ್ನು ಹತ್ತಿರದಿಂದ ಕಂಡಿದ್ದೇನೆ. ಆದರೆ, ಕೊಡಗಿನಲ್ಲಿ ಇಂತಹ ಯಾವುದೇ ಪ್ರಕರಣಗಳು ತಮ್ಮ ಗಮನಕ್ಕೆ ಬಂದಿಲ್ಲ ಎಂದು ತಿಳಿಸಿದರು.
ಕೊಡಗಿನ ಸಹಕಾರ ಸಂಸ್ಥೆಗಳ ಪ್ರಾಮಾಣಿಕತೆ ಮತ್ತು ಪಾರದರ್ಶಕತೆ ರಾಜ್ಯಕ್ಕೆ ಮಾದರಿಯಾಗಿದೆ. ಜಿಲ್ಲೆಯ ಸಹಕಾರಿ ಸಂಸ್ಥೆಗಳನ್ನು ರಾಜ್ಯವೇ ಗುರುತಿಸುತ್ತಿದ್ದು, ಈ ಗೌರವಕ್ಕೆ ಹಿರಿಯ ಸಹಕಾರಿಗಳ ಕೊಡುಗೆ ಮಹತ್ವದ್ದಾಗಿದೆ. ಈ ಕೀರ್ತಿಯನ್ನು ಶಾಶ್ವತವಾಗಿ ಉಳಿಸಿಕೊಳ್ಳುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಸಲಹೆ ನೀಡಿದರು.
ರೈತರು ಮತ್ತು ಬೆಳೆಗಾರರಿಗೆ ತುರ್ತು ನೆರವನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಪ್ರಮುಖ ಸಂಸ್ಥೆಗಳಾಗಿ ಸಹಕಾರ ಕ್ಷೇತ್ರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದ ಅವರು, ಸಹಕಾರ ಕ್ಷೇತ್ರವು ಪ್ರಾಮಾಣಿಕವಾಗಿ ಹಾಗೂ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಪಿ.ಯು. ರಾಬಿನ್ ದೇವಯ್ಯ, 1953ರಲ್ಲಿ ಆರಂಭವಾದ ಸಹಕಾರ ಸಪ್ತಾಹವನ್ನು ಪ್ರತಿವರ್ಷ ದೇಶಾದ್ಯಂತ ಅತ್ಯಂತ ವೈಭವದಿಂದ ಆಚರಿಸಲಾಗುತ್ತಿದೆ. ಸೈನ್ಯ, ಕ್ರೀಡೆ ಸೇರಿದಂತೆ ಸಹಕಾರ ಕ್ಷೇತ್ರಕ್ಕೂ ಕೊಡಗು ಜಿಲ್ಲೆ ಮಹತ್ವದ ಕೊಡುಗೆ ನೀಡಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 2018ರಿಂದ ‘ಸಹಕಾರಿ ರತ್ನ’ ಮತ್ತು ‘ಶ್ರೇಷ್ಠ ಸಹಕಾರಿ’ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಹಿರಿಯ ಸಹಕಾರಿಗಳು ಅತ್ಯಂತ ಪ್ರಾಮಾಣಿಕತೆಯಿಂದ ಜಿಲ್ಲೆಯ ಸಹಕಾರಿ ಕ್ಷೇತ್ರವನ್ನು ಕಟ್ಟಿ ಬೆಳೆಸಿದ್ದಾರೆ. ಅವರ ಸೇವಾ ಮಾದರಿಯನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಕೆಲಸವಾಗಬೇಕು ಎಂದು ಕರೆ ನೀಡಿದರು.
ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಪಿ. ಬಾಂಡ್ ಗಣಪತಿ ಮಾತನಾಡಿ, ಈ ಹಿಂದೆ ಕೊಡಗು ಜಿಲ್ಲೆಯ ಸಹಕಾರಿ ಕಾಯ್ದೆಯನ್ನು ಇಡೀ ರಾಜ್ಯಕ್ಕೆ ಅನ್ವಯಿಸಲಾಗಿತ್ತು. ಅಂದಿನ ಹಿರಿಯ ಸಹಕಾರಿಗಳು ಶ್ರೇಷ್ಠ ಸಹಕಾರಿ ತತ್ವಗಳನ್ನು ಅಳವಡಿಸಿಕೊಂಡು ಕಾರ್ಯನಿರ್ವಹಿಸಿದ್ದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೊಡಗು ಡಿಸಿಸಿ ಬ್ಯಾಂಕ್ 22 ಕೋಟಿ ರೂ.ಗೂ ಅಧಿಕ ಲಾಭ ಗಳಿಸಿದ್ದು, ಸದಸ್ಯರಿಗೆ ಶೇ.20ರಷ್ಟು ಡಿವಿಡೆಂಡ್ ನೀಡಿದ ದೇಶದ ಏಕೈಕ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ತಿಳಿಸಿದರು. ಹಿರಿಯ ಸಹಕಾರಿಗಳು ಮತ್ತು ಸಿಬ್ಬಂದಿಯ ಪ್ರಾಮಾಣಿಕ ಸೇವೆ ಹಾಗೂ ಸಾಲಗಾರರು ಸಕಾಲದಲ್ಲಿ ಸಾಲ ಮರುಪಾವತಿ ಮಾಡಿರುವುದು ಈ ಸಾಧನೆಗೆ ಪ್ರಮುಖ ಕಾರಣವಾಗಿದೆ ಎಂದರು.
ವೈಯಕ್ತಿಕ ಲಾಭಕ್ಕಾಗಿ ಸಹಕಾರಿ ಕಾಯ್ದೆಗಳಲ್ಲಿ ತಿದ್ದುಪಡಿಗಳನ್ನು ತರಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಸಹಕಾರ ಕ್ಷೇತ್ರದಲ್ಲಿ ದುರುಪಯೋಗದ ಪ್ರಕರಣಗಳು ಪತ್ತೆಯಾದಲ್ಲಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
73ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ‘ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಗಾಗಿ ಸಹಕಾರ ಸಂಸ್ಥೆಗಳು’ ಎಂಬ ವಿಷಯದ ಕುರಿತು ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕಿ ಎಂ.ಎಂ. ಶ್ಯಾಮಲ ವಿಚಾರ ಮಂಡಿಸಿದರು. ಈ ನಿಟ್ಟಿನಲ್ಲಿ ಸಹಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಶಿಸಿದರು.
ಸಹಕಾರಿಗಳಿಗೆ ಪ್ರಶಸ್ತಿ ಪ್ರದಾನ
73ನೇ ಸಹಕಾರ ಸಪ್ತಾಹದ ಅಂಗವಾಗಿ ಜಿಲ್ಲೆಯ ನಾಲ್ವರು ಹಿರಿಯ ಸಹಕಾರಿ ಧುರೀಣರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
ಹಂಡ್ಲಿ ಗ್ರಾಮದ ಹಿರಿಯ ಸಹಕಾರಿ ಎಸ್.ಕೆ. ವೀರಪ್ಪ ಅವರಿಗೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಹಿರಿಯ ಸಹಕಾರಿಗಳಾದ ನಾಪೋಕ್ಲುವಿನ ಕುಂಡ್ಯೋಳಂಡ ರಮೇಶ್ ಮುದ್ದಯ್ಯ ಹಾಗೂ ಪೊನ್ನಂಪೇಟೆಯ ಮುದ್ದಿಯಡ ಎ. ಸೋಮಯ್ಯ ಅವರಿಗೆ ‘ಶ್ರೇಷ್ಠ ಸಹಕಾರಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೋಮವಾರಪೇಟೆಯ ಲೋಕೇಶ್ವರಿ ಗೋಪಾಲ್ ಅವರಿಗೆ ‘ಶ್ರೇಷ್ಠ ಮಹಿಳಾ ಸಹಕಾರಿ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಇದೇ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಹೊಸೂರು ಸತೀಶ್ ಕುಮಾರ್ ಹಾಗೂ ಸಹಕಾರ ಸಪ್ತಾಹದ ಆಚರಣೆಗೆ ಆರ್ಥಿಕ ನೆರವು ನೀಡಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಾಂಡ್ ಗಣಪತಿ ಅವರನ್ನು ಸನ್ಮಾನಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕುಂಡ್ಯೋಳಂಡ ಪಿ. ರಮೇಶ್ ಮುದ್ದಯ್ಯ, ಸಹಕಾರ ಕ್ಷೇತ್ರಕ್ಕೆ ಕಾಲಿಟ್ಟಾಗ ಇಂತಹ ಶ್ರೇಷ್ಠ ಪ್ರಶಸ್ತಿ ಲಭಿಸಲಿದೆ ಎಂದು ನಿರೀಕ್ಷಿಸಿರಲಿಲ್ಲ. ಈ ದಿನ ತಮ್ಮ ಜೀವಮಾನದ ಅವಿಸ್ಮರಣೀಯ ಕ್ಷಣವಾಗಿದೆ ಎಂದು ಭಾವುಕರಾದರು.
ಲೋಕೇಶ್ವರಿ ಗೋಪಾಲ್ ಮಾತನಾಡಿ, ಪ್ರಶಸ್ತಿಯ ಹಿಂದೆ ಜವಾಬ್ದಾರಿಯೂ ಅಡಗಿದೆ. ಮಹಿಳೆಯರು ಪರಸ್ಪರ ಸಹಕಾರ ನೀಡಿದರೆ ಮಹಿಳಾ ಸಹಕಾರಿ ಬ್ಯಾಂಕ್‌ಗಳು ಅಭಿವೃದ್ಧಿ ಹೊಂದಲು ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರಗಳು ಕೂಡ ಅಗತ್ಯ ಸಹಕಾರ ನೀಡಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮಕ್ಕೂ ಮುನ್ನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಡಗು ಜಿಲ್ಲೆಯ ಹಿರಿಯ ಮುಖಂಡ ಚಕ್ಕೇರ ಮನು ಕಾವೇರಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರು, ಡಿಸಿಸಿ ಬ್ಯಾಂಕ್ ನಿರ್ದೇಶಕರು, ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳು, ವಿವಿಧ ಸಹಕಾರ ಸಂಸ್ಥೆಗಳ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.
ಸಹಕಾರ ಯೂನಿಯನ್ ವ್ಯವಸ್ಥಾಪಕಿ ಮಂಜುಳಾ ಪ್ರಾರ್ಥಿಸಿದರು. ಉಪಾಧ್ಯಕ್ಷ ಎಚ್.ಕೆ. ಮಾದಪ್ಪ ಸ್ವಾಗತಿಸಿದರು. ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯೋಗೇಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೊಸೂರು ಸತೀಶ್ ಕುಮಾರ್ ವಂದಿಸಿದರು.
















