ವಿರಾಜಪೇಟೆ, NEWS DESK ನ.20: ಸರ್ಕಾರದಿಂದ ಬಿಡುಗಡೆಯಾಗುವ ಅನುದಾನಗಳು ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳುವುದರ ಜೊತೆಗೆ, ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಹೇಳಿದರು.
ವಿರಾಜಪೇಟೆಯ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ಹಾಗೂ ನಾಪೋಕ್ಲು ಬ್ಲಾಕ್ ವ್ಯಾಪ್ತಿಯ ವಲಯ ಮತ್ತು ಬೂತ್ ಅಧ್ಯಕ್ಷರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜನರ ಅಗತ್ಯಗಳಿಗೆ ಅನುಗುಣವಾಗಿ ಅಭಿವೃದ್ಧಿ ಕಾಮಗಾರಿಗಳು ಅನುಷ್ಠಾನಗೊಳ್ಳುವಲ್ಲಿ ಪಕ್ಷದ ಮುಖಂಡರು ಮುತುವರ್ಜಿ ವಹಿಸಬೇಕು. ಪಕ್ಷದಲ್ಲಿ ಜವಾಬ್ದಾರಿಯುತ ಹುದ್ದೆಗಳನ್ನು ಹೊಂದಿರುವ ಪ್ರತಿಯೊಬ್ಬರೂ ತಮ್ಮ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ಸರ್ಕಾರದ ಜನಪರ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಜನಸಾಮಾನ್ಯರಿಗೆ ಅನುಕೂಲವಾಗುವ ಆಡಳಿತದ ಅನುಷ್ಠಾನದಲ್ಲಿ ಕಾರ್ಯಕರ್ತರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಸರ್ಕಾರದಿಂದ ಬಿಡುಗಡೆಯಾಗುವ ಅನುದಾನಗಳು ಸಮರ್ಪಕವಾಗಿ ಬಳಕೆಯಾಗುವಂತೆ ನಿಗಾ ವಹಿಸಬೇಕು. ಮುಂಬರುವ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕಾವೇರಿ ಜಲಾನಯನ ಪ್ರದೇಶ ಅಭಿವೃದ್ಧಿ ಮಂಡಳಿ ನಿರ್ದೇಶಕ ಸೂರಜ್ ಹೊಸೂರು, ಕಾವೇರಿ ಜಲಾನಯನ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಅರವಿಂದ್ ಕುಟ್ಟಪ್ಪ, ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕ ಕೆ.ಎ. ಇಸ್ಮಾಯಿಲ್ ನಾಪೋಕ್ಲು, ಮಡಿಕೇರಿ ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ನೆರವಂಡ ಉಮೇಶ್, ಡಿಸಿಸಿ ಉಪಾಧ್ಯಕ್ಷ ಅಬ್ದುಲ್ ರೆಹಮಾನ್ ನಾಪೋಕ್ಲು, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೌಕತ್ ಆಲಿ, ವಿರಾಜಪೇಟೆ ನಗರ ಕಾಂಗ್ರೆಸ್ ಅಧ್ಯಕ್ಷ ಮಾಳೆಟೀರ ಬೋಪಣ್ಣ ಹಾಗೂ ವಿರಾಜಪೇಟೆ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಉಪಸ್ಥಿತರಿದ್ದರು.
ಇದಲ್ಲದೆ, ಎರಡೂ ಬ್ಲಾಕ್ಗಳ ವಲಯ ಹಾಗೂ ಬೂತ್ ಅಧ್ಯಕ್ಷರು, ಮಹಿಳಾ ಕಾಂಗ್ರೆಸ್, ಒಬಿಸಿ, ಅಲ್ಪಸಂಖ್ಯಾತ, ಎಸ್.ಟಿ. ಘಟಕಗಳ ಪದಾಧಿಕಾರಿಗಳು, ಯುವ ಕಾಂಗ್ರೆಸ್ ಮುಖಂಡರು ಸೇರಿದಂತೆ ಪಕ್ಷದ ಹಿರಿಯ ಮತ್ತು ಕಿರಿಯ ಕಾರ್ಯಕರ್ತರು ಭಾಗವಹಿಸಿದ್ದರು.
















