ಕುಶಾಲನಗರ, NEWS DESK ನ.21: ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರರ ಕುರಿತು ‘ಬಸವ ಮಂಟಪ’ ಕೃತಿಯಲ್ಲಿ ಅವಹೇಳನಕಾರಿ ಹಾಗೂ ಅವಾಚ್ಯ ಪದಗಳನ್ನು ಬಳಸಿರುವ ಲೇಖಕರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕೊಡಗು ಜಿಲ್ಲಾ ವೀರಶೈವ ಮಹಾಸಭಾದ ವತಿಯಿಂದ ಮನವಿ ಸಲ್ಲಿಸಲಾಯಿತು.
ಕುಶಾಲನಗರದ ತಹಸೀಲ್ದಾರ್ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ ಮಹಾಸಭಾದ ಪದಾಧಿಕಾರಿಗಳು, ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ ಪ್ರಕಟಿಸಿರುವ ಕೃತಿಯ ಲೇಖಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ವಿ. ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ಉಪಾಧ್ಯಕ್ಷ ಹೆಚ್.ಪಿ. ಉದಯಕುಮಾರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್. ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ. ನಟರಾಜು ಹಾಗೂ ಕೋಶಾಧಿಕಾರಿ ಕೆ.ಪಿ. ಪರಮೇಶ್ ಉಪಸ್ಥಿತರಿದ್ದರು.
















