ಮಡಿಕೇರಿ ನ.24 NEWS DESK: ಯುವಜನತೆ ಓದಿನ ಕಡೆ ಹೆಚ್ಚಿನ ಗಮನಹರಿಸಬೇಕು. ಪ್ರಸ್ತುತ ಪೋಕ್ಸೊ ಪ್ರಕರಣಗಳು ಹೆಚ್ಚುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದ ವಿದ್ಯಾರ್ಥಿಗಳು ತಪ್ಪು ದಾರಿ ಹಿಡಿಯುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ಹೇಳಿದರು. ಪ್ರಚೋದನಾ ಸಂಸ್ಥೆ ಹಾಸನ, ಜಸ್ಟ್ ರೈಟ್ಸ್ ಫಾರ್ ಚಿಲ್ರನ್ನ್ ದೆಹಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೊಡಗು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ತಾಲ್ಲೂಕು ಪಂಚಾಯಿತಿ, ಪೊಲೀಸ್ ಇಲಾಖೆ, ಮಕ್ಕಳ ಕಲ್ಯಾಣ ಸಮಿತಿ, ಸಮಗ್ರ ಮಕ್ಕಳ ರಕ್ಷಣಾ ಘಟಕ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತಾಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ಮಂಗಳವಾರ “ಬಾಲ್ಯ ವಿವಾಹ ಮುಕ್ತ ಭಾರತ ಆಂದೋಲನದಡಿಯಲ್ಲಿ ಮಕ್ಕಳ, ಅಪ್ರಾಪ್ತ ವಯಸ್ಕರ ಬಲವಂತದ ವಿವಾಹ ನಿರ್ಮೂಲನೆಗಾಗಿ ಅಂತರಾಷ್ಟ್ರೀಯ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ವಿದ್ಯಾವಂತರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೂ ಬಾಲ್ಯವಿವಾಹದಂತಹ ಸಾಮಾಜಿಕ ಪಿಡುಗುಗಳ ಕುರಿತು ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ. ಪೋಕ್ಸೊ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜಾಗೃತರಾಗಿರಬೇಕು. ಪೋಕ್ಸೊ ಕಾಯ್ದೆಯ ಮಹತ್ವ ಹಾಗೂ ಅದರ ಉದ್ದೇಶವನ್ನು ಅರಿತುಕೊಂಡು, ತಮ್ಮ ಸುರಕ್ಷತೆಯ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು. ಗ್ರಾಮೀಣ ಹಾಗೂ ಬುಡಕಟ್ಟು ಪ್ರದೇಶಗಳಲ್ಲಿ ಇಂದಿಗೂ ಬಾಲ್ಯವಿವಾಹಗಳು ನಡೆಯುತ್ತಿರುವುದು ಕಂಡುಬರುತ್ತಿದೆ. ಇದರೊಂದಿಗೆ ಪೋಕ್ಸೊ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿರುವುದು ಕಳವಳಕ್ಕೆ ಕಾರಣವಾಗಿದೆ ಎಂದು ಹೇಳಿದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಮಕ್ಕಳು ಇಂತಹ ಕಾರ್ಯಕ್ರಮಗಳ ಪ್ರಯೋಜನ ಪಡೆದುಕೊಂಡು ಜಾಗೃತರಾಗಬೇಕು ಎಂದರು. ಮಡಿಕೇರಿ ತಹಶೀಲ್ದಾರ್ ಆರ್.ಶ್ರೀಧರ್ ಅವರು ಮಾತನಾಡಿ, ಕೊಡಗು ಜಿಲ್ಲೆಯಲ್ಲಿ ಪೋಕ್ಸೊ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ. ವಿದ್ಯಾರ್ಥಿಗಳು 15 ರಿಂದ 25 ವರ್ಷಗಳ ನಡುವಿನ ಅಮೂಲ್ಯ ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಲೈನ್ ಮನೆಗಳು ಹೆಚ್ಚಾಗಿದ್ದು, ಅಂತಹ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಕಂಡುಬಂದಲ್ಲಿ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತಂದು ಪ್ರಕರಣಗಳನ್ನು ತಡೆಗಟ್ಟಲು ಸಹಕರಿಸಬೇಕು ಎಂದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ವಿ.ಅಂಬಿಕಾ ಅವರು ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸಂಪ್ರದಾಯದ ಹೆಸರಿನಲ್ಲಿ ಬಾಲ್ಯವಿವಾಹಗಳು ನಡೆಯುತ್ತಿದ್ದು, ಬಾಲ್ಯ ವಿವಾಹ ತಡೆಯುವ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ಉತ್ತಮ ಶಿಕ್ಷಣ ಪಡೆದು ಉನ್ನತ ಹುದ್ದೆಗಳನ್ನು ಅಲಂಕರಿಸುವ ಗುರಿ ಹೊಂದಬೇಕು ಎಂದು ಕರೆ ನೀಡಿದರು. ಮಕ್ಕಳ ವಿಶೇಷ ಪೆÇಲೀಸ್ ಘಟಕದ ಸಹಾಯಕ ಸಬ್ ಇನ್ಸ್ಪೆಕ್ಟರ್ ಸುಮತಿ ಅವರು ಮಾತನಾಡಿ, ಬಾಲ್ಯವಿವಾಹ ಶಿಕ್ಷಾರ್ಹ ಅಪರಾಧವಾಗಿದ್ದು, ದೇಶದ ಸುಭದ್ರ ಭವಿಷ್ಯಕ್ಕೆ ಮಕ್ಕಳ ಪಾತ್ರ ಮಹತ್ವದ್ದಾಗಿದೆ. ಮಕ್ಕಳು ಇಂದಿನಿಂದಲೇ ಜವಾಬ್ದಾರಿಯುತ ಪ್ರಜೆಗಳಾಗಿ ರೂಪುಗೊಳ್ಳಬೇಕು ಎಂದರು. ಹಾಸನ ಪ್ರಚೋದನಾ ಸಂಸ್ಥೆಯ ನಿರ್ದೇಶಕರಾದ ಸಿ.ಸಿ.ಪೌಲೋಸ್ ಅವರು ಮಾತನಾಡಿ, ಪ್ರಚೋದನಾ ಕರ್ನಾಟಕದ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ಸರ್ಕಾರೇತರ ಸ್ವಯಂಸೇವಾ ಸಂಸ್ಥೆಯಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಶಂಸೆಗೆ ಪಾತ್ರವಾಗಿರುವ ಸಂಸ್ಥೆಯು ಶಾಲೆ ತೊರೆದ ಮಕ್ಕಳನ್ನು ಮತ್ತೆ ಶೈಕ್ಷಣಿಕ ಪ್ರಗತಿಯತ್ತ ಕೊಂಡೊಯ್ಯಲು ಸಹಕಾರ ನೀಡುತ್ತಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಹಿರಿಯ ಉಪನ್ಯಾಸಕ ಎನ್.ಎಸ್.ಚಿದಾನಂದ ಅವರು, ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾದ ಸಮಯವಾಗಿದೆ. ಈ ಹಂತದಲ್ಲಿ ನೈತಿಕ ಮೌಲ್ಯ ಬೆಳೆಸಿಕೊಂಡು ವಿದ್ಯಾವಂತರಾಗಬೇಕು. ಸಾಮಾಜಿಕ ಜಾಲತಾಣಗಳ ದುರ್ಬಳಕೆಯಿಂದ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಹರಿಸಿ ಆದರ್ಶ ವ್ಯಕ್ತಿಗಳಾಗಿ ಬದುಕಬೇಕು ಎಂದು ಕಿವಿಮಾತು ಹೇಳಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಉಪ ನಿರ್ದೇಶಕರಾದ ಪ್ರಭಾಕರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಕೀರ್ತನ್, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು. ಕಾಲೇಜಿನ ವಿದ್ಯಾರ್ಥಿನಿಯರು ವಂದೇ ಮಾತರಂ ಹಾಗೂ ನಾಡಗೀತೆ ಹಾಡಿದರು. ಉಪನ್ಯಾಸಕರಾದ ಮಲ್ಲಿಕಾರ್ಜುನ ಪುಟಾಣಿ ಸ್ವಾಗತಿಸಿದರು. ಶಿವಪ್ಪ ನಿರೂಪಿಸಿದರು. ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕಿ ವಿ.ಆರ್.ಮುಕ್ತಕೇಶಿ ವಂದಿಸಿದರು.


















